ವ್ಯವಸ್ಥಿತ ಚುನಾವಣೆಗೆ ಸಹಕರಿಸಿ
ಕನ್ನಡಪ್ರಭ ವಾರ್ತೆ, ಯಾದಗಿರಿ, ಮಾ.28
ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾದ್ಯಂತ ವ್ಯವಸ್ಥಿತವಾಗಿ ವಿಧಾನಸಭೆ ಚುನಾವಣೆ ಪ್ರಕ್ರಿಯೆ ನಡೆಸುವ ಉದ್ದೇಶದೊಂದಿಗೆ ಎಲ್ಲಾ ಅಧಿಕಾರಿಗಳು ಪರಿಣಾಮಕಾರಿಯಾಗಿ ಹಾಗೂ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಗುರುವಾರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಪಿ. ರಾಜೇಂದ್ರ ಜೋಳನ್ ಸೂಚಿಸಿದರು.
ಪ್ರಮುಖ ಜವಾಬ್ದಾರಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ವಿಧಾನಸಭೆ ಚುನಾವಣೆಗೆ ಸಂಬಂಧಪಟ್ಟಂತ ಈವರೆಗೆ ಕೈಗೊಳ್ಳಲಾದ ಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಜಿಲ್ಲಾದ್ಯಂತ ಮುಕ್ತ, ನ್ಯಾಯಸಮ್ಮತ ಹಾಗೂ ವ್ಯವಸ್ಥಿತವಾಗಿ ಚುನಾವಣೆ ನಡೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ಈ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿಸಿದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಚುನಾವಣಾ ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಯಲು ಈ ಹಿಂದಿನ ಜಿಲ್ಲಾಧಿಕಾರಿಗಳು ವ್ಯವಸ್ಥಿತವಾಗಿ ಕ್ರಮ ಕೈಗೊಂಡಿದ್ದಾರೆ. ನೀತಿಸಂಹಿತೆ ಉಲ್ಲಂಘನೆ ನಿಯಂತ್ರಣ ತಂಡ, ನೋಡಲ್ ಅಧಿಕಾರಿಗಳು, ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳ ನೇಮಕ ಮಾಡಿದ್ದಾರೆ. ಅಧಿಕಾರಿಗಳಿಗೆ ನೀಡಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ಮಾಡಬೇಕು. ಚುನಾವಣಾಧಿಕಾರಿಗಳು ಫ್ಲೈಯಿಂಗ್ ಸ್ಕ್ವಾಡ್, ವೀಡಿಯೋ ಸರ್ವೇನ್ಸ್ ತಂಡ ರೂಪಿಸುವುದು ಸೇರಿದಂತೆ ಇತರೆ ಅವಶ್ಯಕತೆಗಳ ಬಗ್ಗೆ ತಕ್ಷಣ ಕ್ರಿಯಾ ಯೋಜನೆ ಸಲ್ಲಿಸಬೇಕು ಎಂದು ತಿಳಿಸಿದರು.
ಎಚ್ಚರಿಕೆಗಳು: ಜಿಲ್ಲೆಯಲ್ಲಿರುವ ಹೆದ್ದಾರಿ ಫಲಕಗಳಲ್ಲಿ ಯಾವುದೇ ರೀತಿಯ ಚುನಾವಣಾ ಉಲ್ಲಂಘನೆಯಂತಹ ವಿಷಯಗಳು ಕಂಡು ಬಂದಲ್ಲಿ ತಕ್ಷಣ ಅವುಗಳನ್ನು ತೆರವುಗೊಳಿಸಬೇಕು. ಅಬಕಾರಿ ಇಲಾಖೆ ಜಿಲ್ಲೆಯಲ್ಲಿ ಅಕ್ರಮ ಮದ್ಯ ಸರಬರಾಜು ಬಗ್ಗೆ ಎಚ್ಚರವಹಿಸಬೇಕು. ಪ್ರಾದೇಶಿಕ ಸಾರಿಗೆ ಇಲಾಖೆ ಸಹ ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಚುನಾವಣೆ ಮುಗಿಯುವವರೆಗೆ ಯಾವುದೇ ಅಧಿಕಾರಿ, ಸಿಬ್ಬಂದಿ ಕೇಂದ್ರಸ್ಥಾನ ಬಿಟ್ಟುಹೋಗಬಾರದು. ವಿಶೇಷವಾಗಿ ರಜೆಗೆ ತೆರಳುವಂತಿಲ್ಲ. ತಮ್ಮ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಟ್ಟುಹೋಗಬಾರದು ಎಂದು ಎಚ್ಚರಿಕೆ ನೀಡಿದರು.
ಕಟ್ಟುನಿಟ್ಟಿನ ಕ್ರಮ: ಮತದಾರರ ಪಟ್ಟಿಯಲ್ಲಿ ಏಪ್ರಿಲ್ 7ರವರೆಗೆ ಹೆಸರು ನೋಂದಣಿ ಕೆಲಸ ಪ್ರಗತಿಯಲ್ಲಿರುತ್ತದೆ. ತಾಲೂಕು ಕೇಂದ್ರ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾದ 24 ಗಂಟೆಗಳ ಮತದಾರರ ಮಿತ್ರ ಕಾರ್ಯನಿರ್ವಹಣೆ, ಅಲ್ಲಿ ನಿಯೋಜಿಸಿದ ಸಿಬ್ಬಂದಿಯ ಹೆಸರು, ಸ್ವೀಕರಿಸಲಾದ ಕರೆಗಳ ಬಗ್ಗೆ ವರದಿ ನೀಡಬೇಕು. ಪ್ರತಿಯೊಬ್ಬ ವೀಕ್ಷಕರೊಂದಿಗೆ ಲೈಜ್ನಿಂಗ್ ಆಫೀಸರ್, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಇಂತಹ ಅಧಿಕಾರಿಗಳ ನೇಮಕ ಮತ್ತು ತಲಾ ಒಬ್ಬರು ಎಂಜಿನೀಯರ್ ಹಾಗೂ ಕಂಪ್ಯೂಟರ್ ಅಪರೇಟರ್ಗಳ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು.
ಚುನಾವಣಾ ಕಾರ್ಯಕ್ಕೆ ಸಹಕರಿಸದೇ ಇರುವ ಸಿಬ್ಬಂದಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಚೋಳನ್ ಹೇಳಿದರು.
ನೀತಿ ಸಂಹಿತೆ: ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್.ಎ.ಜಿಲಾನಿ ಮಾತನಾಡಿ, ಈಗಾಗಲೇ ಚುನಾವಣೆ ಘೋಷಣೆ ಆಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣಕಾಸಿನ ವ್ಯವಹಾರ, ಮದ್ಯ ವ್ಯವಹಾರಗಳ ಮೇಲೆ ನಿಗಾ ಇಡಬೇಕು.
ಈ ಕುರಿತು ಜಿಲ್ಲಾಡಳಿತೊಂದಿಗೆ ಸಂಪರ್ಕದಲ್ಲಿ ಇದ್ದುಕೊಂಡು ಕಾರ್ಯನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಜಹೀರಾ ನಸೀಮ್ ಅವರು ಈ ಸಂದರ್ಭದಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

