ಬನ್ನಿ, ನಿರ್ಭೀತಿಯಿಂದ ನಿಮ್ಮ ಮತ ಚಲಾಯಿಸಿ
ಕ.ಪ್ರ. ವಾರ್ತೆ, ಯಾದಗಿರಿ, ಮೇ 4
ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಎಲ್ಲೆಡೆ ಖಾಕಿಧಾರಿಗಳು ಕಾಣಿಸುತ್ತಿದ್ದು, ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಆದ್ದರಿಂದ ಮತದಾರರು ಭಾನುವಾರ ನಿರ್ಭೀತಿಯಿಂದ ಹಕ್ಕು ಚಲಾಯಿಸಬಹುದು.
ಚುನಾವಣಾ ಅಧಿಸೂಚನೆ ಹೊರಡಿಸಿದ ದಿನದಿಂದಲೂ ಜಿಲ್ಲೆಯಲ್ಲಿ ಚುನಾವಣಾ ಅಕ್ರಮ ನಡೆಯದಂತೆ ಎಲ್ಲ ರೀತಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾ ಚುನಾವಣಾಧಿಕಾರಿ ಪಿ.ರಾಜೇಂದ್ರ ಚೋಳನ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಮತದಾನಕ್ಕೆ ಅನುಕೂಲವಾಗುವಂತೆ ಸೂಕ್ತ ಕ್ರಮ ಕೈಗೊಂಡಿದ್ದಾರೆ.
ವಿಶೇಷ ಭದ್ರತೆ: ವಿಶೇಷವಾಗಿ ಭದ್ರತಾ ವ್ಯವಸ್ಥೆ ಈ ಹಿಂದಿನ ಚುನಾವಣೆಗಳಿಗಿಂತ ಹೆಚ್ಚು ಬಿಗು ಮಾಡಲಾಗಿದೆ. ಮತದಾರರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಚಟುವಟಿಕೆಯನ್ನೂ ನಡೆಸಲಾಗಿದೆ. ಆದ್ದರಿಂದ ಈ ಬಾರಿ ಯಾವುದೇ ಹಿತಾಸಕ್ತಿಗೆ ಅಂಜದೇ ಹಕ್ಕು ಚಲಾಯಿಸುವ ವಾತಾವರಣ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ. ಆದ್ದರಿಂದ ಮತದಾನ ಪ್ರಮಾಣವೂ ಹೆಚ್ಚಾಗುವ ನಿರೀಕ್ಷೆಯಿದೆ.
ಮತದಾರರಿಗೆ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ. ವಾಹನ ಸೌಲಭ್ಯ, ಮತಗಟ್ಟೆಗಳಲ್ಲಿ ನೀರು, ಬಿಸಿಲಿನ ತಾಪದಿಂದ ರಕ್ಷಣೆಗಾಗಿ ಅಗತ್ಯವಿದ್ದ ಮತಗಟ್ಟೆಗಳಲ್ಲಿ ನೆರಳಿನ ವ್ಯವಸ್ಥೆ ಕೈಗೊಳ್ಳಲಾಗಿದೆ. ರಿಯಾಯತಿ ದರದಲ್ಲಿ ವೋಟರ್ ಎಕ್ಸ್‌ಪ್ರೆಸ್ ಎಂಬ ಸಾರಿಗೆ ವ್ಯವಸ್ಥೆ ಕೈಗೊಳ್ಳಲಾಗಿದೆ.
ಯೋಗ್ಯ ವ್ಯಕ್ತಿಗೆ ಮತ ನೀಡಿ: ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ತೋರುವ ಆಮಿಷಗಳಿಗೆ ಬಲಿಯಾಗದೇ ಸೂಕ್ತ ಹಾಗೂ ಯೋಗ್ಯ ವ್ಯಕ್ತಿಗೆ ಮತ ಹಾಕುವ ಮೂಲಕ ಈ ಚುನಾವಣೆಯಲ್ಲಿ ಮತದಾರ ತನ್ನ ಶಕ್ತಿ ತೋರಿಸಬೇಕಿದೆ. ಅದಕ್ಕಾಗಿಯೇ 48 ಗಂಟೆ ಮುಂಚಿತವಾಗಿ ಬಹಿರಂಗ ಪ್ರಚಾರ ಅಂತ್ಯಗೊಳಿಸಲಾಗಿದೆ. ಕ್ಷೇತ್ರದ ಹೊರಗಿನ ವಿವಿಧ ಪಕ್ಷಗಳ ಮುಖಂಡರು ಕ್ಷೇತ್ರ ಬಿಟ್ಟು ಹೊರಹೋಗುವಂತೆ ಆದೇಶಿಸಲಾಗಿದೆ.
ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಅಧಿಕಾರಿಗಳ ತಂಡ ಹಳ್ಳಿಹಳ್ಳಿಗೂ ಭೇಟಿ ನೀಡುತ್ತಿದೆ. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಪ್ಯಾರಾ ಮಿಲಿಟರಿ ಪಡೆ, ಸ್ಥಳೀಯ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಆದ್ದರಿಂದ ಈ ಚುನಾವಣೆಯಲ್ಲಿ ಮತದಾರ ಯಾವ ಭಯವೂ ಇಲ್ಲದೇ ನಿರ್ಭೀತಿಯಿಂದ ಹಕ್ಕು ಚಲಾಯಲು ಮುಂದಾಗಬೇಕು. ಯೋಗ್ಯ ಅಭ್ಯರ್ಥಿ ಆಯ್ಕೆಯಲ್ಲಿ ಪಾಲ್ಗೊಳ್ಳಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

