ಗುಲ್ಬರ್ಗಾ

ಕುಡಿವ ನೀರು ಪೂರೈಕೆಗೆ ಅನುದಾನ ಬಿಡುಗಡೆ

Published On :

ಕನ್ನಡಪ್ರಭ ವಾರ್ತೆ ,  ಜೇವರ್ಗಿ , ಮೇ 25
ತಾಲೂಕಿನಲ್ಲಿ ಉದ್ಭವಿಸಿದ ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುವುದರ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಲ್ಲವಿ ಆಕುರಾತಿ ಸೂಚಿಸಿದರು.
ಅವರು ಇತ್ತೀಚೆಗೆ ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲೂಕಿನಲ್ಲಿರುವ ಸುಮಾರು 20-25 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಭೀಕರವಾಗಿದ್ದು, ತಕ್ಷಣ ಅಧಿಕಾರಿಗಳು ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಭೇಟಿ ನೀಡಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಕ್ರಮಕೈಗೊಳ್ಳಬೇಕು ಎಂದರು.
ಕ್ರಮ ಕೈಗೊಳ್ಳಿ: ಕುಡಿವ ನೀರು ಪೂರೈಕೆಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ತಾಲೂಕಿನಲ್ಲಿರುವ 33 ಗ್ರಾಪಂಗಳ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಕೇಂದ್ರ ಸ್ಥಾನದಲ್ಲಿದ್ದು, ಪಂಚಾಯತ್ ಮಟ್ಟದಲ್ಲಿ ಕೈಗೆತ್ತಿಕೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳ ಉಸ್ತುವಾರಿ ನೋಡಿಕೊಳ್ಳಬೇಕು. ಇದಲ್ಲದೇ ವಾರಕ್ಕೊಮ್ಮೆ ಕೈಗೊಂಡ ಕಾಮಗಾರಿಗಳ ಬಗ್ಗೆ ಜಿಲ್ಲಾ ಪಂಚಾಯತ್ ಕಾರ್ಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದರು.
2013-14ನೇ ಸಾಲಿನ ಗ್ರಾಪಂ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರ ಮೂಲಕ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ಪಂಚತಂತ್ರ: ಜಿಲ್ಲೆಯಲ್ಲಿ 224 ಗ್ರಾಪಂಗಳಿದ್ದು, ಕೇವಲ 4 ಗ್ರಾಪಂಗಳ ಅಭಿವೃದ್ಧಿ ಮುನ್ನೋಟವನ್ನು ಪಂಚತಂತ್ರದಲ್ಲಿ ಅಳವಡಿಸಲಾಗಿದೆ. ಉಳಿದ ಗ್ರಾಪಂ ಅಧಿಕಾರಿಗಳು ತಕ್ಷಣ ತಮ್ಮ ಪಂಚಾಯತಿಗಳ ಅಭಿವೃದ್ಧಿ ಬಗ್ಗೆ ಪಂಚತಂತ್ರದಲ್ಲಿ ಅಳವಡಿಸಲು ಸೂಚಿಸಿದರು.
ಪ್ರಮುಖವಾಗಿ ಕುಡಿಯುವ ನೀರಿನ ಸಮಸ್ಯೆ, ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಗ್ರಾಪಂಗಳ ಕರವಸೂಲಾತಿ ಕುರಿತು ಮಾಹಿತಿ ಪಡೆದರು. ಗ್ರಾಮೀಣ ಪ್ರದೇಶದಲ್ಲಿರುವ ಕೃಷಿ ಕೂಲಿ ಕಾರ್ಮಿಕರು ಉದ್ಯೋಗ ಅರಸಿ ಹೊರ ರಾಜ್ಯಗಳಿಗೆ ಗೂಳೆ ಹೋಗದಂತೆ ಅವರಿಗೆ ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ನೀಡಬೇಕು. ನಿರ್ಮಲ ಭಾರತ ಯೋಜನೆಯಡಿಯಲ್ಲಿ ಪ್ರತಿ ಗ್ರಾಪಂಗಳು ತಿಂಗಳಿಗೆ 40 ಶೌಚಾಲಯ ನಿರ್ಮಿಸಬೇಕು. ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಸಮೀಕ್ಷೆ ನಡೆಸಿ ಒಟ್ಟು ಕುಟುಂಬಗಳ ಸಂಖ್ಯೆ, ಶೌಚಾಲಯ ಹೊಂದಿದ್ದ ಕುಟುಂಬಗಳ ಸಂಖ್ಯೆ ಬಗ್ಗೆ ವರದಿ ಸಲ್ಲಿಸಬೇಕು ಎಂದರು.
ಕಟ್ಟುನಿಟ್ಟು ಸೂಚನೆ: ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಹೊಸದಾಗಿ ಕೊಳವೆ ಬಾವಿಗಳನ್ನು ಕೊರೆಸಬೇಕು ಮತ್ತು ಸ್ಥಗಿತಗೊಂಡ ಕಿರು ನೀರು ಸರಬರಾಜು ಯೋಜನೆಗಳನ್ನು ಆರಂಭಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಪಲ್ಲವಿ ಆಕುರಾತಿ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.
ಸಭೆಯಲ್ಲಿ ಜಿಪಂ ಮುಖ್ಯ ಲೆಕ್ಕಾಧಿಕಾರಿ ಪಟವೇಕರ್, ಉಪಕಾರ್ಯದರ್ಶಿ ವಸಂತ ಕುಲಕರ್ಣಿ, ಮುಖ್ಯ ಯೋಜನಾಧಿಕಾರಿ ವಿರುಪಾಕ್ಷಪ್ಪ ಕಿರಣಗಿ, ಯೋಜನಾ ನಿರ್ದೇಶಕ ಎಂ.ಬಿ. ಕೆಂಚಣ್ಣನವರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪಲ್ಲಾ ನರಸಿಂಹರೆಡ್ಡಿ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.