ಗುಲ್ಬರ್ಗಾ

ಆಲ್ದಾಳಗೆ ಕಸಾಪದಿಂದ ಅಧಿಕೃತ ಆಮಂತ್ರಣ

Published On :

ಕನ್ನಡಪ್ರಭ ವಾರ್ತೆ, ಜೇವರ್ಗಿ, ಮೇ 31
13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ರಂಗಕರ್ಮಿ, ಸಾಹಿತಿ ಎಲ್.ಬಿ.ಕೆ. ಆಲ್ದಾಳ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಫಲಪುಷ್ಪ ನೀಡಿ ಅಧಿಕೃತವಾಗಿ ಆಮಂತ್ರಣ ನೀಡಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ, ಜೂನ್ 15, 16 ರಂದು ಗುಲ್ಬರ್ಗದಲ್ಲಿ ಜರುಗುವ 13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಗುರುವಾರ ನಡೆದ ಜಿಲ್ಲಾ ಕಸಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಿರಿಯ ರಂಗ ಚೇತನ ಎಲ್.ಬಿ.ಕೆ. ಆಲ್ದಾಳ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.
5 ದಶಕಗಳಿಂದ ಸಾಹಿತ್ಯ ಕೃಷಿ: ಆಲ್ದಾಳ ಅವರನ್ನು ಆಯ್ಕೆ ಮಾಡುವುದರ ಮೂಲಕ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ತನ್ನ ಘನತೆಯನ್ನು ಹೆಚ್ಚಿಸಿಕೊಂಡಿದೆ. ಕಳೆದ 5 ದಶಕಗಳಿಂದ ಸಾಹಿತ್ಯ ಕೃಷಿಯಲ್ಲಿ ತೊಡಗಿರುವ ಆಲ್ದಾಳ ಅವರು ಗ್ರಾಮೀಣ ಪ್ರತಿಭೆಯಾಗಿದ್ದು, ಅಂಥವರನ್ನು ಗುರುತಿಸಿ ನಾಡಿಗೆ ಪರಿಚಯಿಸುವುದರ ಮೂಲಕ ಅವರ ಸಾಹಿತ್ಯವನ್ನು ಇಂದಿನ ಯುವ ಪೀಳಿಗೆಗೆ ಮುಟ್ಟಿಸುವ ಉದ್ದೇಶ ಕಸಾಪ ಹೊಂದಿದೆ ಎಂದು ಮುನ್ನೂರ ಹೇಳಿದರು.
ಅಧಿಕೃತ ಆಮಂತ್ರಣ ಸ್ವೀಕರಿಸಿ ಮಾತನಾಡಿದ ಸಾಹಿತಿ ಆಲ್ದಾಳ, ತಾವು ಯಾವುದೇ ಪ್ರಶಸ್ತಿ ಪುರಸ್ಕಾರಗಳಿಗಾಗಿ ಸಾಹಿತ್ಯ ಕೃಷಿಯಲ್ಲಿ ತೊಡಗಲಿಲ್ಲ. ನಮ್ಮಂತಹ ಗ್ರಾಮೀಣ ಪ್ರದೇಶದ ಸಾಹಿತಿಗಳನ್ನು ಗುರುತಿಸಿ 13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಕಸಾಪ ಪದಾಧಿಕಾರಿಗಳನ್ನು ಅಭಿನಂದಿಸುವುದಾಗಿ ತಿಳಿಸಿದರು.
ಕಸಾಪ ಜಿಲ್ಲಾ ಪದಾಧಿಕಾರಿಗಳಾದ ಡಾ. ರಾಜೇಂದ್ರ ಯರನಾಳೆ, ಸುರೇಶ ಬಡಿಗೇರ, ಬಿ.ಎಚ್. ನಿರಗುಡಿ, ಸಂಧ್ಯಾ ಹೊನಗುಂಟಿಕರ್ ಇತರರು ಇದ್ದರು.

ಸಮ್ಮೇಳನ ಅಧ್ಯಕ್ಷರಾಗಿ ಆಲ್ದಾಳ ನೇಮಕ
ಗುಲ್ಬರ್ಗ: ಜೂನ್ 15 ಮತ್ತು 16 ರಂದು ಗುಲ್ಬರ್ಗದಲ್ಲಿ ನಡೆಯುವ 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಎಲ್.ಬಿ.ಕೆ. ಆಲ್ದಾಳ ಸರ್ವಾನುಮತದಿಂದ ನೇಮಕಗೊಂಡಿದ್ದಾರೆ.
ಗುರುವಾರ ಸಂಜೆ ಗುಲ್ಬರ್ಗದ ಕನ್ನಡ ಭವನದಲ್ಲಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಷತ್ತಿನ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಬಿ.ಎಚ್. ನಿರಗುಡಿ, ಸುರೇಶ ಬಡಿಗೇರ, ಕೋಶಾಧ್ಯಕ್ಷ ರಾಜೇಂದ್ರ ಯರನಾಳ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕಿನ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಹಲವಾರು ಸಾಹಿತಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.