ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ
ಕನ್ನಡಪ್ರಭ ವಾರ್ತೆ, ಯಾದಗಿರಿ, ಮೇ 31
ಕೇಂದ್ರ ಸರ್ಕಾರವು ಹಿಂದುಳಿದ ಪ್ರದೇಶಗಳ ಅನುದಾನ ನಿಧಿ ಯೋಜನೆಯಡಿ ನಿಗದಿಪಡಿಸಿರುವ ಅನುದಾನದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅನುಕೂಲವಾಗುವ ರೀತಿಯಲ್ಲಿ ಪರಿಣಾಮಕಾರಿಯಾದ ಕ್ರಿಯಾಯೋಜನೆ ರೂಪಿಸಲು ಜಿಪಂ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ನಿರ್ಧರಿಸಲಾಯಿತು.
ಜಿಲ್ಲಾ ಪಂಚಾಯಿತಿ, ಮೈಸೂರಿನ ಅಬ್ದುಲ್ ನಜೀರ್ಸಾಬ್ ರಾಜ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಜಿಪಂ, ತಾಪಂ ಹಾಗೂ ಗ್ರಾಪಂ ಅಧ್ಯಕ್ಷರು, ಜಿಪಂ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗಾಗಿ ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಬಿಆರ್ಜಿಎಫ್ ಅನುದಾನದ ಬಳಕೆ ಕುರಿತು ಕ್ರಿಯಾಯೋಜನೆ ರೂಪಿಸಲು ತೀರ್ಮಾನಿಸಲಾಯಿತು.
6 ಜಿಲ್ಲೆಗಳಲ್ಲಿ ಯೋಜನೆ: ಕೇಂದ್ರ ಸರ್ಕಾರವು ರಾಷ್ಟ್ರೀಯ ಸಮವಿಕಾಸ ಯೋಜನೆಯನ್ನು ಮಾರ್ಪಡಿಸಿ ಹಿಂದುಳಿದ ಪ್ರದೇಶಗಳ ಅನುದಾನ ನಿಧಿ ರೂಪದಲ್ಲಿ ರಾಜ್ಯದ 6 ಜಿಲ್ಲೆಗಳಾದ ಯಾದಗಿರಿ, ಬೀದರ್, ಗುಲ್ಬರ್ಗ, ಚಿತ್ರದುರ್ಗ, ದಾವಣಗೆರೆ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುತ್ತಿದೆ. ಜನರ ಸಹಭಾಗಿತ್ವದಲ್ಲಿ ಅಭಿವೃದ್ಧಿ ಯೋಜನೆಗಳ ತಯಾರಿ ಮತ್ತು ಅದರ ಅನುಷ್ಠಾನದ ಜೊತೆಗೆ ಸಾಮರ್ಥ್ಯಾಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿದೆ.
21 ಕೋಟಿ ನಿಗದಿ: ಈ ಯೋಜನೆಯಡಿ ಯಾದಗಿರಿ ಜಿಲ್ಲೆಗೆ 21 ಕೋಟಿ ನಿಗದಿಪಡಿಸಿದ್ದು, ಈ ಅನುದಾನ ಸಮರ್ಪಕವಾಗಿ ಬಳಸುವ ನಿಟ್ಟಿನಲ್ಲಿ ಪರಿಣಾಮಕಾರಿಯಾದ ಕ್ರಿಯಾಯೋಜನೆಯೊಂದನ್ನು ರೂಪಿಸುವ ಕುರಿತು ಕಾರ್ಯಾಗಾರದಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎ. ಜಿಲಾನಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಮಹತ್ವದ ಯೋಜನೆಗಳನ್ನು ಹಾಕಿಕೊಳ್ಳುವ ಅವಶ್ಯಕತೆ ಇದೆ. ಕಾರಣ ನಿಗದಿತ ಸಮಯದೊಳಗೆ ಕ್ರಿಯಾಯೋಜನೆ ರೂಪಿಸಿದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಅಧಿಕಾರಿಗಳು ಸಂಬಂಧಪಟ್ಟ ಚುನಾಯಿತ ಪ್ರತಿನಿಧಿಗಳ ಮಾರ್ಗದರ್ಶನದೊಂದಿಗೆ ಪರಿಣಾಮಕಾರಿಯಾದ ಕ್ರಿಯಾಯೋಜನೆ ರೂಪಿಸಲು ಸಹಕರಿಸುವಂತೆ ಸಲಹೆ ನೀಡಿದರು.
ಜನರ ಸಹಭಾಗಿತ್ವ ಅಗತ್ಯ: ಜಿಪಂ ಉಪ ಕಾರ್ಯದರ್ಶಿ ಬಿ.ವಿ. ಭೋಸಲೆ ಹಾಗೂ ಮುಖ್ಯ ಯೋಜನಾ ಅಧಿಕಾರಿ ಬಸವರಾಜ ಮಾತನಾಡಿ, 12ನೇ ಪಂಚವಾರ್ಷಿಕ ಯೋಜನೆ ಮತ್ತು ಜಿಲ್ಲೆಯ ಸಮಗ್ರ ಅಭಿವೃದ್ಧಿಯ ವಾರ್ಷಿಕ ಯೋಜನೆ ತಯಾರಿಸಲು ಯಾವ ಯೋಜನೆಯಡಿ ಯಾವ ಕಾರ್ಯ ಕೈಗೊಳ್ಳುವ ಕುರಿತು ಚಿಂತನೆ ನಡೆಸಬೇಕಾಗಿದೆ. ಜನರ ಸಹಭಾಗಿತ್ವದಲ್ಲಿ ಯೋಜನೆ ಜಾರಿಗೊಳಿಸುವ ಕ್ರಿಯಾಯೋಜನೆ ರೂಪಿಸಿ ಅನುಷ್ಠಾನ ಮಾಡಬೇಕಿದೆ ಎಂದು ತಿಳಿಸಿದರು.
ಕಾರ್ಯಾಗಾರವನ್ನು ಜಿಪಂ ಉಪಾಧ್ಯಕ್ಷ ಶರಣಿಕುಮಾರ ದೋಖಾ ಉದ್ಫಾಟಿಸಿದರು. ಎಸ್ಐಆರ್ಡಿ ಸಂಸ್ಥೆಯ ಬೋಧಕ ವಿಲ್ಫ್ರೆಡ್ ಡಿಸೋಜಾ, ಮನೋಜಕುಮಾರ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

