ಗುಲ್ಬರ್ಗಾ

ಸದಾಶಿವ ಆಯೋಗ ವರದಿ ಜಾರಿಗೊಳಿಸಿ

Published On :


ಯಾದಗಿರಿ: ನ್ಯಾ. ಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಒತ್ತಾಯಿಸಿ ನಗರ ಶಾಸಕ ಡಾ. ಎ.ಬಿ. ಮಾಲಕರಡ್ಡಿ ಅವರ ನಿವಾಸದ ಮುಂದೆ ಸೋಮವಾರ ತಾಲೂಕು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಪದಾಧಿಕಾರಿಗಳು ಧರಣಿ ನಡೆಸಿದರು.
ಈ ಸಂದರ್ಭದಲ್ಲಿ ಸಮಾಜದ ಹಿರಿಯ ಮುಖಂಡ ಖಂಡಪ್ಪ ದಾಸನ ಮಾತನಾಡಿ, ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಸಮಾಜವು ರಾಜ್ಯದಲ್ಲಿ ಹಲವಾರು ಪ್ರತಿಭಟನೆ, ಹೋರಾಟ ಹಮ್ಮಿಕೊಳ್ಳುವ ಮೂಲಕ ಸರ್ಕಾರದ ಗಮನಕ್ಕೆ ತಂದರೂ ಸರಿಯಾಗಿ ಸ್ಪಂದಿಸಿಲ್ಲ ಎಂದು ಆರೋಪಿಸಿದರು.
ಏಕೈಕ ಬೇಡಿಕೆ: ರಾಜ್ಯದ 224 ಕ್ಷೇತ್ರಗಳ ಶಾಸಕರ ಮನೆಯ ಮುಂದೆ ಮಾದಿಗ ಹೋರಾಟ ಸಮಿತಿ ಕಾರ್ಯಕರ್ತರು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ನ. 25ರಂದು ಬೆಳಗಾವಿಯಲ್ಲಿ ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ಮಾದಿಗರ ಏಕೈಕ ಬೇಡಿಕೆಯಾದ ಒಳ ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಪಟ್ಟ ನ್ಯಾ. ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿ ಎಂಬ ಉದ್ದೇಶದಿಂದ ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಲಾಗಿದೆ ಎಂದು ಹೇಳಿದರು.
ಸಮಿತಿಯ ತಾಲೂಕು ಅಧ್ಯಕ್ಷ ಶಾಂತಪ್ಪ ಖಾನಳ್ಳಿ ಮಾತನಾಡಿ, ಸರ್ಕಾರ ಸಮಾಜದ ಚರ್ಮ, ಕುಶಲಕರ್ಮಿ ಕೆಲಸಗಾರರಿಗೆ ವಿಶೇಷ ಸಾಲ ಸೌಲಭ್ಯವನ್ನು ಒದಗಿಸಿ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿದರು.
ಸಮುದಾಯ ಭವನ: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಜೀವನ ನಡೆಸುತ್ತಿರುವ ಪರಿಶಿಷ್ಟ ಜಾತಿ ಓಣಿಗಳಲ್ಲಿ ಶುದ್ಧ ಕುಡಿಯುವ ನೀರು ಸರಬರಾಜಿಗೆ ಕ್ರಮ ಕೈಗೊಳ್ಳಬೇಕು. ಡಾ. ಬಾಬು ಜಗಜೀವನರಾಂ ಸಮುದಾಯ ಭವನಗಳನ್ನು ನಿರ್ಮಾಣ ಮಾಡಬೇಕೆಂದು ಆಗ್ರಹಿಸಿದರು.
ಧರಣಿ ಸ್ಥಳಕ್ಕೆ ಶಾಸಕರ ಪರವಾಗಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪಗೌಡ ಮಲ್ಹಾರ ಆಗಮಿಸಿ ಮನವಿ ಪತ್ರ ಸ್ವೀಕರಿಸಿ ಶಾಸಕರ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದರು.
ಧರಣಿಯಲ್ಲಿ ಸ್ವಾಮಿದೇವ ದಾಸನಕೇರಿ, ಎಂ.ಕೆ. ಬೀರನೂರ, ಶಂಕರ ಸಿದ್ದಿ, ಶೇಖರ, ದುರ್ಗಪ್ಪ ಯರಗೋಳ, ಮಾರ್ತಂಡಪ್ಪ ಮುಷ್ಟೂರ್, ಮಹಾದೇವಪ್ಪ ಚಾಮನಳ್ಳಿ, ಶರಣು ಗಾಡಿ, ಯೇಸು ಹೊಸಳ್ಳಿಕರ್, ಆನಂದ ಗೋಡಿಯಾಳ, ಲಕ್ಷ್ಮಣ ಬಾಚವಾರ, ವಿಶ್ವರಾಧ್ಯ ಖಾನಳ್ಳಿ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.