ಕಾಂಗ್ರೆಸ್ನಿಂದ ರೈತನ ಕಗ್ಗೊಲೆ
ಗುಲ್ಬರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೇಜವಾಬ್ದಾರಿತನವೇ ರೈತ ವಿಠಲ್ ಅರಬಾವಿ ಆತ್ಮಹತ್ಯೆಗೆ ಕಾರಣವಾಗಿದ್ದು, ಇದು ಆತ್ಯಹತ್ಯೆ ಅಲ್ಲ; ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಿರುವ ಕಗ್ಗೊಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
ಗುಲ್ಬರ್ಗದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ವಿಳಂಬ ಧೋರಣೆ ಮತ್ತು ಬೇಜವಾಬ್ದಾರಿತನದಿಂದ ವರ್ತಿಸುತ್ತಿದೆ. ಪ್ರತಿ ಟನ್ ಕಬ್ಬಿಗೆ 2,650 ನಿಗದಿಪಡಿಸುವಂತೆ ಕಬ್ಬು ಬೆಳೆಗಾರರು ನಿರಂತರವಾಗಿ ಹೋರಾಟ ನಡೆಸುತ್ತಲೇ ಬಂದಿದ್ದರೂ ಸಿಎಂ ಅವರ ಬೇಡಿಕೆಗೆ ಸ್ಪಂದಿಸಲಿಲ್ಲ. ಹೀಗಾಗಿ ರೈತರು ಬೆಳಗಾವಿ ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸುವರ್ಣಸೌಧದ ಎದುರು ಧರಣಿ ನಡೆಸಿದರೂ ಆಗಲೂ ಯಾವುದೇ ಸ್ಪಂದನೆ ದೊರೆಯದೇ ಹೋದಾಗ ಬೇಸತ್ತು ರೈತನೊಬ್ಬ ಆತ್ಮಹತ್ಯೆ ಮಾಡಿಕೊಳ್ಳಬೇಕಾಯಿತು ಎಂದರು.
ಇತಿಹಾಸ ನಿರ್ಮಿಸಿದ ಸಿಎಂ ಸಿದ್ದರಾಮಯ್ಯ: ವಿಧಾನಸಭೆ ನಡೆಯುವ ಅಧಿವೇಶನದ ಸಂದರ್ಭದಲ್ಲಿ ಅಧಿವೇಶನದ ಮುಖ್ಯ ಕೇಂದ್ರದ ಮುಂದೆ ರೈತನ ಆತ್ಮಹತ್ಯೆ ಯಾವ ಸರ್ಕಾರದ ಅವಧಿಯಲ್ಲೂ ನಡೆದಿರಲಿಲ್ಲ. ಆದರೆ, ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ನಡೆಯುವ ಮೂಲಕ ಇತಿಹಾಸ ಸೃಷ್ಟಿಯಾಗಿದೆ. ಈ ಶ್ರೇಯಸ್ಸು ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.
ಕೂಡಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಕಬ್ಬು ಬೆಳೆಗಾರರಿಗೆ 2,600 ಬೆಂಬಲ ಬೆಲೆ ಘೋಷಣೆ ಮಾಡಿ ಅದನ್ನು ಅನುಷ್ಠಾನಗೊಳಿಸಬೇಕು. ತಮ್ಮ ಸಚಿವ ಸಂಪುಟದ ಮೂವರು ಸಚಿವರು ತಮ್ಮ ಸಕ್ಕರೆ ಕಾರ್ಖಾನೆಗಳಲ್ಲಿ ಪ್ರತಿ ಟನ್ ಕಬ್ಬಿಗೆ ಕೇವಲ 1,800 ನಿಗದಿಪಡಿಸಿ ಎಲ್ಲ ರೈತರಿಂದ ಕರಾರು ಪತ್ರಗಳಿಗೆ ಸಹಿ ಪಡೆಯುವ ಮೂಲಕ ವಂಚನೆ ಮಾಡುತ್ತಿದ್ದಾರೆ. ಕೂಡಲೇ ಸಿದ್ದರಾಮಯ್ಯ ಅವರು ತಮ್ಮ ಸಚಿವರಿಗೆ 2,600 ಬೆಲೆ ನೀಡುವಂತೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.
ತೊಗರಿ ಬೆಂಬೆಲೆಗೆ ಖರ್ಗೆ ಯತ್ನಿಸಲಿ: ಹೈ-ಕ ಪ್ರಮುಖ ಬೆಳೆಯಾಗಿರುವ ತೊಗರಿಗೆ 6,500 ಬೆಂಬಲ ಬೆಲೆ ನೀಡುವಂತೆ ಈ ಭಾಗದ ಪ್ರಮುಖ ಕೇಂದ್ರ ಸಚಿವರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಒತ್ತಾಯಿಸಬೇಕೆಂದು ಪ್ರಹ್ಲಾದ್ ಜೋಶಿ ಆಗ್ರಹಿಸಿದರು.
ಮಾಜಿ ಸಚಿವ ಬೆಳಮಗಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಕುಮಾರ ತೇಲ್ಕೂರ್, ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ರಾಜಗೋಪಾಲ ರೆಡ್ಡಿ, ಶಶೀಲ್ ನಮೋಶಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

