ಗುಲ್ಬರ್ಗಾ

ಅಕ್ರಮ ಸಂಗ್ರಹ: 320 ಚೀಲ ಅಕ್ಕಿ, ಗೋದಿ ಜಪ್ತಿ

Published On :

ಜೇವರ್ಗಿ: ಪಟ್ಟಣದಲ್ಲಿರುವ ಮಳಿಗೆಯೊಂದರ ಮೇಲೆ ಪೊಲೀಸ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 320 ಚೀಲ ಅಕ್ಕಿ ಹಾಗೂ ಗೋದಿಯನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಗೋದಿ ಹಾಗೂ ಅಕ್ಕಿಯನ್ನು ವಶಪಡಿಸಿಕೊಳ್ಳುವುದರ ಮೂಲಕ ದಂಧೆಯಲ್ಲಿ ತೊಡಗಿಸಿಕೊಂಡವರಿಗೆ ಬಿಸಿ ಮುಟ್ಟಿಸಿದ್ದಾರೆ. ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಆವರಣದ ಮಳಿಗೆಯೊಂದರ ಮೇಲೆ ದಾಳಿ ಮಾಡಿದ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಲಾಗಿದ್ದ 210 ಚೀಲ ಅಕ್ಕಿ ಹಾಗೂ 110 ಚೀಲ ಗೋದಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಇಲ್ಲಿನ ಸಿಪಿಐ ಬಾಸು ಚವ್ಹಾಣ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸ್ಥಳೀಯ ಠಾಣೆಯ ಪಿಎಸ್‌ಐ ಪರಶುರಾಮ ಮನಗೂಳಿ, ಆಹಾರ ಇಲಾಖೆಯ ಉಪ ತಹಸೀಲ್ದಾರ್ ಶಿವಶರಣಪ್ಪ, ಆಹಾರ ನಿರೀಕ್ಷಕ ಡಿ.ಬಿ. ಪಾಟೀಲ್ ಹಾಗೂ ಹುಸೇನಪಾಷಾ, ಪೊಲೀಸ್ ಇಲಾಖೆ ಸಿಬ್ಬಂದಿ ಮಲ್ಲಿಕಾರ್ಜುನ ಸ್ವಾಮಿ, ವಿಶ್ವನಾಥ ಶಿವರಾಯ ಭಾಗವಹಿಸಿದ್ದರು.
  ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ಕಿ ಹಾಗೂ ಗೋದಿ ಸಂಗ್ರಹಿಸಿಟ್ಟಿದ್ದ ಎಪಿಎಂಸಿ ಶಾಪ್ ಮಾಲೀಕನ ಸಹೋದರರೊಬ್ಬರನ್ನು ಬಂಧಿಸಲಾಗಿದೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡ ಜಾಲ: ಅಕ್ರಮವಾಗಿ ಅಕ್ಕಿ, ಗೋದಿ ಮಾರಾಟದ ಜಾಲ ತಾಲೂಕಿನಲ್ಲಿ ಕೆಲಸ ಮಾಡುತ್ತಿದೆಯೇ ಎಂಬ ಪ್ರಶ್ನೆ ಇದೀಗ ಎದುರಾಗಿದೆ.
  ಇಂತಹ ಪ್ರಕರಣಗಳು ಹಿಂದೆಯೂ ಅನೇಕ ಬಾರಿ ನಡೆದಿರುವುದೇ ಈ ಪ್ರಶ್ನೆ ಎದುರಾಗಲು ಕಾರಣ. ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿಯಲ್ಲಿ ಒಂದು ರು.ಗೆ ಒಂದು ಕೆ.ಜಿ. ಅಕ್ಕಿ ನೀಡುತ್ತಿದ್ದು, ಈ ಯೋಜನೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ಬೆಳಕಿಗೆ ಬರುತ್ತಿವೆ. ಈ ಅಕ್ಕಿಯನ್ನು ದುಬಾರಿ ಬೆಲೆಗೆ ಮಾರಾಟ ಮಾಡುವ ಜಾಲವೇ ಕೆಲಸ ಮಾಡಲಾಗುತ್ತಿದೆ ಎನ್ನಲಾಗಿದೆ.
ಕಡಿಮೆ ದರದಲ್ಲಿ ಖರೀದಿಸಿದ ಅಕ್ಕಿಯನ್ನು ಪಕ್ಕದ ರಾಜ್ಯಗಳಿಗೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ. ಪೊಲೀಸ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸಿದರೆ, ಇಂತಹ ಅಕ್ರಮ ದಂಧೆಗಳಿಗೆ ಕಡಿವಾಣ ಹಾಕಬಹುದು ಎಂಬುದು ನಾಗರಿಕರ ಅಭಿಪ್ರಾಯವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.