ಗುಲ್ಬರ್ಗಾ

ನೀರಿನ ಕಾಮಗಾರಿ ತುರ್ತು ಪೂರ್ಣಗೊಳಿಸಿ

Published On :

ಕ.ಪ್ರ. ವಾರ್ತೆ   ಗುಲ್ಬರ್ಗ   ಏ.25
ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿವಿಧ ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಬೇಕು. ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಿ ಜನರಿಗೆ ನೀರನ್ನು ಒದಗಿಸಬೇಕೆಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ. ರವಿಕುಮಾರ್ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ನಗರದಲ್ಲಿ ಶುಕ್ರವಾರ ಪ್ರಸ್ತುತ ಬೇಸಿಗೆ ಬರ ಪರಿಸ್ಥಿತಿಯ ಪರಿಹಾರ ಕಾಮಗಾರಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕುಡಿಯುವ ನೀರಿನ ಯೋಜನೆಗಳು ಪೂರ್ಣಗೊಳ್ಳದಿರುವ ಹಾಗೂ ಪೂರ್ಣಗೊಂಡ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಪ್ರಸ್ತುತ ಬೇಸಿಗೆಯಲ್ಲಿ ನೀರಿನ ಸಮಸ್ಯೆ ತೀವ್ರಗೊಳ್ಳಲಿರುವ ಹಿನ್ನೆಲೆಯಲ್ಲಿ ಮುಂದುವರಿದ ಕುಡಿವ ನೀರಿನ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಮುಗಿಸಬೇಕು. ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಕ್ಷೇತ್ರಮಟ್ಟದಲ್ಲಿ ನಿರಂತರವಾಗಿ ಪ್ರವಾಸದಲ್ಲಿದ್ದು, ನೀರಿನ ಸಮಸ್ಯೆಗಳತ್ತ ತೀವ್ರ ನಿಗಾ ವಹಿಸಿ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಲು ಕ್ರಮ ಕೈಗೊಳ್ಳಬೇಕೆಂದು ಎಚ್ಚರಿಸಿದರು.
ಗಮನಿಸಬೇಕಾದ ಅಂಶಗಳು: ನೀರಿನ ಯೋಜನೆ ಮತ್ತು ವಿದ್ಯುತ್ ಸಂಪರ್ಕ ಕಾಮಗಾರಿಗಳು ಏಕಕಾಲಕ್ಕೆ ಪೂರ್ಣಗೊಳಿಸಬೇಕು. ಇದಕ್ಕಾಗಿ ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಗುಲ್ಬರ್ಗ ಮಹಾನಗರ ಪಾಲಿಕೆ, ಜಿಲ್ಲೆಯ ಪೌರ ಸಂಸ್ಥೆಗಳ ಅಧಿಕಾರಿಗಳು ಮತ್ತು ಜೆಸ್ಕಾಂ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಕುಡಿವ ನೀರಿನ ಕಾಮಗಾರಿಗಳಿಗೆ ತುರ್ತಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಮಾಡಬೇಕು. ಜಾನುವಾರುಗಳಿಗೆ ಮೇವು, ರೈತರಿಗೆ ಅಗತ್ಯ ಬಿತ್ತನೆ ಬೀಜದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಕಾಲಕಾಲಕ್ಕೆ ತಾಲೂಕು ಮಟ್ಟದ ಬರ ಪರಿಹಾರ ಸಮಿತಿಗಳ ಸಭೆಗಳನ್ನು ನಡೆಸಿ ಜಿಲ್ಲಾ ಸಮಿತಿಗೆ ಸೂಕ್ತ ಪ್ರಸ್ತಾವನೆಗಳನ್ನು ಸಲ್ಲಿಸಬೇಕೆಂದು ಸೂಚಿಸಿದರು.
ಸಹಾಯವಾಣಿ ಕೇಂದ್ರ: ಜಿಲ್ಲಾಧಿಕಾರಿ ಡಾ. ಎನ್.ವಿ. ಪ್ರಸಾದ್, ಜಿಪಂ ಸಿಇಒ ಟಿಎಚ್‌ಎಂ ಕುಮಾರ್ ಚರ್ಚೆಯಲ್ಲಿ ಪಾಲ್ಗೊಂಡು ತಾಲೂಕು ಮತ್ತು ಜಿಲ್ಲಾ ಮಟ್ಟದ ಕುಡಿವ ನೀರಿನ ಸಮಸ್ಯೆ ಮತ್ತು ಬರ ನಿರ್ವಹಣೆಗಾಗಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಚಿಂಚೋಳಿ ತಾಲೂಕಿನ ಗಡಿಲಿಂಗದಳ್ಳಿ, ಸೇರಿಬಡಾ ತಾಂಡಾ, ಜಂಗ್ಲೀಪುರ ತಾಂಡಾ ಹಾಗೂ ಜೇವರ್ಗಿ ತಾಲೂಕಿನ ಯಲಗೂಡ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಕಳೆದ ವರ್ಷ ರಾಷ್ಟ್ರೀಯ ಗ್ರಾಮೀಣ ಕುಡಿವ ನೀರು ಕಾರ್ಯಕ್ರಮದಡಿ ಕೈಗೆತ್ತಿಕೊಂಡ 1,353 ನೀರಿನ ಕಾಮಗಾರಿಗಳ ಪೈಕಿ 944 ಕಾಮಗಾರಿಗಳನ್ನು 52.65 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ. ಜಿಲ್ಲೆಯಲ್ಲಿ ಲಭ್ಯವಿರುವ ಜಾನುವಾರು ಮೇವು ಮತ್ತು ಬಿತ್ತನೆ ಬೀಜ, ಆಲಿಕಲ್ಲು ಮಳೆಯಿಂದ ಉಂಟಾದ  ಹಾನಿಯ ಬಗ್ಗೆ ಕಾರ್ಯದರ್ಶಿಗಳಿಗೆ ವಿವರಿಸಿದರು. ಅಪರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಇದ್ದರು.



3.33 ಕೋಟಿ ಬಿಡುಗಡೆ: ಪ್ರಸಾದ್


ತಾಲೂಕು ಮಟ್ಟದ ಪ್ರಕೃತಿ ವಿಕೋಪ ಪರಿಹಾರ ಸಮಿತಿಗಳ ಶಿಫಾರಸ್ಸಿನ ಮೇರೆಗೆ ಜಿಲ್ಲೆಯ ಬರಪೀಡಿತ ತಾಲೂಕುಗಳಲ್ಲಿ ತಲೆದೋರಿರುವ ಕುಡಿವ ನೀರಿನ ಸಮಸ್ಯೆಯ ಪರಿಹಾರಕ್ಕಾಗಿ ಒಟ್ಟು 3.33 ಕೋಟಿ ಮಂಜೂರು ಮಾಡಲಾಗಿದೆ. ಈ ಪೈಕಿ ನಗರ ಪ್ರದೇಶದಲ್ಲಿನ ಕುಡಿವ ನೀರಿನ ಕಾಮಗಾರಿಗಳಿಗಾಗಿ 73.92 ಲಕ್ಷ, ಗ್ರಾಮೀಣ ನಗರ ಪ್ರದೇಶ ಕಾಮಗಾರಿಗಳಿಗಾಗಿ 1.72 ಕೋಟಿ ಮತ್ತು ಮಳೆ ಹಾನಿಗೀಡಾದ ಪ್ರದೇಶಗಳಲ್ಲಿ ಮೂಲ ಸೌಕರ್ಯಗಳ ದುರಸ್ತಿ ಪರಿಹಾರಕ್ಕಾಗಿ 87.50 ಲಕ್ಷ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್.ವಿ. ಪ್ರಸಾದ್ ತಿಳಿಸಿದರು.
ಕುಡಿವ ನೀರಿನ ಮತ್ತು ಬರ ನಿರ್ವಹಣೆಗಾಗಿ ಹಣದ ಕೊರತೆಯಿಲ್ಲ. ಒಟ್ಟು ಮಂಜೂರು ಮಾಡಲಾದ 162 ಕಾಮಗಾರಿಗಳ ಪೈಕಿ 159 ಕಾಮಗಾರಿಗಳನ್ನು ಪ್ರಾರಂಭಿಸಿದ್ದು, 145 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಈ ಕಾಮಗಾರಿಗಳ ಅನುಷ್ಠಾನಕ್ಕೆ ಬಿಡುಗಡೆ ಮಾಡಿದ 2.64 ಕೋಟಿ ಪೈಕಿ 2.18 ಕೋಟಿ ಖರ್ಚು ಮಾಡಲಾಗಿದೆ. ಬಾಕಿ ಉಳಿದ 17 ಕಾಮಗಾರಿಗಳಿಗಾಗಿ 73.37 ಲಕ್ಷ ಬಿಡುಗಡೆ ಮಾಡಲಾಗುವುದು ಎಂದರು.
ಮಳೆ ಹಾನಿಗೆ ಪರಿಹಾರ: ಆಲಿಕಲ್ಲು ಮಳೆ ಹಾನಿ ಪರಿಹಾರಕ್ಕಾಗಿ ಸರ್ಕಾರ 50 ಲಕ್ಷ ಮತ್ತು ಬರ ನಿರ್ವಹಣೆಗಾಗಿ 2 ಕೋಟಿ ಹಣವನ್ನು ಮಾರ್ಚ್‌ನಲ್ಲಿ ಬಿಡುಗಡೆ ಮಾಡಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಯಲು ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಸರ್ಕಾರ ಈ ವರ್ಷ 30.69 ಲಕ್ಷ ರೂ. ಬಿಡುಗಡೆ ಮಾಡಿದೆ. ಇದಕ್ಕಾಗಿ ಈಗಾಗಲೇ 45 ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕುಡಿವ ನೀರಿನ 220 ಕಾಮಗಾರಿಗಳನ್ನು ಕೈಗೊಳ್ಳಲು ಅನುವಾಗುವಂತೆ 4.83 ಕೋಟಿಯ ಅನುಶಂಗಿಕ(ಕಂಟಿನ್‌ಜೆನ್ಸಿ) ಕ್ರಿಯಾಯೋಜನೆ ರೂಪಿಸಲಾಗಿದೆ. ಇದಲ್ಲದೆ ರಾಷ್ಟ್ರೀಯ ಗ್ರಾಮೀಣ ಕುಡಿವ ನೀರು ಕಾರ್ಯಕ್ರಮದಡಿ ಕುಡಿವ ನೀರಿನ ಹೆಚ್ಚುವರಿ ಕ್ರಿಯಾಯೋಜನೆ ರೂಪಿಸಿ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ ಎಂದು ಜಿಪಂ ಸಿಇಒ ಕುಮಾರ್ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.