ಅವಧಿಯೊಳಗೆ ಮಾಹಿತಿ ಪೂರೈಸಿ
ಯಾದಗಿರಿ: ಆಡಳಿತದಲ್ಲಿ ಪಾರದರ್ಶಕತೆ ತರಲು ಹಾಗೂ ಭ್ರಷ್ಟಾಚಾರ ನಿರ್ಮೂಲನೆಗಾಗಿ ಜಾರಿಯಾಗಿರುವ ಮಾಹಿತಿ ಹಕ್ಕು ಕಾಯ್ದೆಯ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ನಿಗದಿತ ಅವಧಿಯೊಳಗೆ ಸಾರ್ವಜನಿಕರಿಗೆ ಮಾಹಿತಿ ಒದಗಿಸಬೇಕೆಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ಜಿಪಂ ಸಭಾಂಗಣದಲ್ಲಿ ಮೈಸೂರು ಆಡಳಿತ ತರಬೇತಿ ಸಂಸ್ಥೆ ವತಿಯಿಂದ ಮಂಗಳವಾರ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಸಹಾಯಕ ಮಾಹಿತಿ ಅಧಿಕಾರಿಗಳು, ಒಂದನೇ ಮೇಲ್ಮನವಿ ಪ್ರಾಧಿಕಾರಿಗಳು(ಎ ಮತ್ತು ಬಿ ಅಧಿಕಾರಿಗಳು) ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿಗಳಿಗೆ ಏರ್ಪಡಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರ ಉದ್ಫಾಟಿಸಿ ಮಾತನಾಡಿದರು.
ಅವಧಿಯೊಳಗೆ ಮಾಹಿತಿ ಪೂರೈಸಿ: ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ ತರಲು, ಭ್ರಷ್ಟಾಚಾರ ನಿರ್ಮೂಲನೆ, ಅಭಿವೃದ್ಧಿ ಮಹತ್ವ ಹೆಚ್ಚಿಸುವ ದಿಶೆಯಲ್ಲಿ ಮಾಹಿತಿ ಹಕ್ಕು ಕಾಯ್ದೆ ಜಾರಿಯಲ್ಲಿದೆ. ಅಧಿಕಾರಿಗಳು ಪಾರದರ್ಶಕವಾಗಿ ಮತ್ತು ನ್ಯಾಯಸಮ್ಮತವಾಗಿ ಕಾರ್ಯನಿರ್ವಹಿಸಲು ಮಾಹಿತಿ ಹಕ್ಕು ಕಾಯ್ದೆಯ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಿಕೊಂಡು ಆಯಾ ಇಲಾಖೆಗಳಿಗೆ ಸಂಬಂಧಪಟ್ಟ ಸಮಗ್ರ ಮಾಹಿತಿಯನ್ನು ಇಟ್ಟುಕೊಂಡು ಸಾರ್ವಜನಿಕರು ಕೋರಿದಾಗ ನಿಗದಿಪಡಿಸಿದ ಅವಧಿಯೊಳಗೆ ಮಾಹಿತಿ ಪೂರೈಸಬೇಕೆಂದು ಅವರು ಸಲಹೆ ನೀಡಿದರು. ಅಭಿವೃದ್ಧಿ ಪರ ಇಲಾಖೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಅನುದಾನವನ್ನು ವಿವಿಧ ಕಾಮಗಾರಿಗಳಿಗೆ ಬಳಸಲಾಗಿರುತ್ತದೆ. ಕಾರಣ ಈ ಕುರಿತು ಮಾಹಿತಿ ಕೋರಿ ಸಾರ್ವಜನಿಕರಿಂದ ಅರ್ಜಿ ಬಂದಾಗ ಸೂಕ್ತ ಮಾಹಿತಿಯನ್ನು ಸಕಾಲಕ್ಕೆ ನೀಡಬೇಕು. ಇದರಿಂದ ಅಭಿವೃದ್ಧಿ ಇಲಾಖೆಗಳ ಮತ್ತು ಅಧಿಕಾರಿಗಳ ಬಗ್ಗೆ ಉತ್ತಮ ಅಭಿಪ್ರಾಯ ಬರುವ ಜೊತೆಗೆ ಸಾರ್ವಜನಿಕರಲ್ಲಿಯೂ ಆತ್ಮವಿಶ್ವಾಸ ಹೆಚ್ಚುಗೊಳ್ಳಲು ಸಹ ಸಹಕಾರಿಯಾಗುತ್ತದೆ ಎಂದು ಹೇಳಿದರು.
ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿ: ಜಿಲ್ಲೆಯಲ್ಲಿ ಹುದ್ದೆಗಳ ಕೊರತೆ ಮಧ್ಯೆಯೂ ಇರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದಾಗ್ಯೂ ಸರ್ಕಾರಿ ಕರ್ತವ್ಯವನ್ನು ಎಲ್ಲರೂ ಸಂಘಟಿತರಾಗಿ ಕಾರ್ಯನಿರ್ವಹಿಸಬೇಕಾಗಿದೆ. ಅಧಿಕಾರಿಗಳು ಈ ಕಾಯ್ದೆಯಡಿ ಎಂತಹ ರೂಪದ ಮಾಹಿತಿ ನೀಡುವ ಬಗ್ಗೆ ಅಧಿಕೃತ ಮಾಹಿತಿ ಇಟ್ಟುಕೊಂಡು ಸಕಾಲಕ್ಕೆ ಮಾಹಿತಿ ನೀಡಿ ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಕನಿಷ್ಠ ಶೇ.90ರಷ್ಟು ಸಾಧನೆಯನ್ನು ತಮ್ಮ ತಮ್ಮ ಇಲಾಖೆಗಳ ವ್ಯಾಪ್ತಿಯಲ್ಲಿ ಮಾಡಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎ. ಜಿಲಾನಿ, ಆಡಳಿತದಲ್ಲಿ ಪಾರದರ್ಶಕ ತರುವ ನಿಟ್ಟಿನಲ್ಲಿ ಮತ್ತು ಕಾನೂನು ಪಾರವಾಗಿ ಕಾರ್ಯನಿರ್ವಹಿಸಲು ಹಾಗೂ ಸಾರ್ವಜನಿಕ ಭರವಸೆಗಳಿಗೆ ತಕ್ಕಂತೆ ಕಾರ್ಯನಿರ್ವಹಿಸಲು ಈ ಕಾಯ್ದೆ ಸಹಕಾರಿಯಾಗಲಿದ್ದು, ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕೆಂದು ಅವರು ಸಲಹೆ ನೀಡಿದರು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಚಿಕ್ಕಮಂಗಳೂರಿನ ಬಿ. ಮಲ್ಲೇಶಪ್ಪ ಅವರು ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಮೈಸೂರು ಆಡಳಿತ ತರಬೇತಿ ಸಂಸ್ಥೆಯ ಬೋಧಕ ಅಶೋಕ ಸ್ವಾಗತಿಸಿ ನಿರೂಪಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಾಗಾರದಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

