ಕಳಂಕಿತರಿಗೆ ಸಚಿವ ಸ್ಥಾನ; ಬಿಜೆಪಿ ಪ್ರತಿಭಟನೆ
ಕ.ಪ್ರ. ವಾರ್ತೆ, ಗುಲ್ಬರ್ಗ, ಜ.7
ರಾಜ್ಯದ ಕಾಂಗ್ರೆಸ್ ಸರ್ಕಾರದ ಸಂಪುಟಕ್ಕೆ ಕಳಂಕಿತ ಶಾಸಕರಿಗೆ ಸಚಿವ ಸ್ಥಾನ ನೀಡಿದ ಕ್ರಮ ಖಂಡಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸಚಿವ ಸಂಪುಟಕ್ಕೆ ಡಿ.ಕೆ. ಶಿವಕುಮಾರ್ ಮತ್ತು ರೋಷನ್ ಬೇಗ್ ಅವರನ್ನು ಸೇರಿಸಿಕೊಳ್ಳುವ ಮೂಲಕ ಸಿದ್ದರಾಮಯ್ಯನವರು ಜನತೆಗೆ ಕೊಟ್ಟ ಮಾತನ್ನು ತಪ್ಪಿ ನಡೆಯುತ್ತಿದ್ದಾರೆ. ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ತನ್ನದು ಪರಿಶುದ್ಧ ಪ್ರಾಮಾಣಿಕ ಮಂತ್ರಿಮಂಡಲ. ಕಳಂಕಿತರಿಗೆ ಸ್ಥಾನವಿಲ್ಲ ಎಂದು ರಾಜಾರೋಷವಾಗಿ ಸಾರ್ವಜನಿಕರ ಎದುರು ಹೇಳಿದ್ದರು. ಆದರೆ ತಮ್ಮ ಹೇಳಿಕೆಯನ್ನು ಮರೆತು ಈಗಾಗಲೇ ಗಂಭೀರ ಆರೋಪಗಳನ್ನು ಹೊತ್ತಿರುವ ಡಿ.ಕೆ. ಶಿವಕುಮಾರ್ ಮತ್ತು ರೋಷನ್ ಬೇಗ್ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡು ತಾವು ನಡೆಯುತ್ತಿರುವ ದಾರಿಯನ್ನು ಸಷ್ಟವಾಗಿ ತೋರಿಸಿದ್ದಾರೆ ಎಂದರು.
ಅಕ್ರಮ ಗಣಿಗಾರಿಕೆಯ ವಿರುದ್ಧ ಬಳ್ಳಾರಿಯವರೆಗೆ ಪಾದಯಾತ್ರೆ ಮಾಡಿದ ಮುಖ್ಯಮಂತ್ರಿ ಅದಕ್ಕಿಂತಲೂ ಮಿಗಿಲಾಗಿ ಆರೋಪಗಳನ್ನು ಹೊತ್ತಿರುವ ವ್ಯಕ್ತಿಗಳನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವುದರ ಕ್ರಮವನ್ನು ಬಿಜೆಪಿ ಉಗ್ರವಾಗಿ ಖಂಡಿಸಿದೆ.
ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಯಾವುದಾದರೂ ಬಿಜೆಪಿ ಸಚಿವರ ಮೇಲೆ ಸಣ್ಣ ಆರೋಪ ಬಂದರೂ ಹರಿಹಾಯುತ್ತಿದ್ದ ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಿ ಕಳಂಕಿತ ಸಚಿವರನ್ನು ಸಂಪುಟದಿಂದ ಕೈಬಿಡಲು ಮುಖ್ಯಮಂತ್ರಿಗಳಿಗೆ ಸೂಚಿಸಬೇಕೆಂದು ಬಿಜೆಪಿ ಒತ್ತಾಯಿಸುತ್ತಿದೆ. ಕಳಂಕಿತ ಸಚಿವರಿಬ್ಬರನ್ನು ಕೈಬಿಡುವವರೆಗೂ ಬಿಜೆಪಿ ತನ್ನ ಹೋರಾಟವನ್ನು ಕೈಬಿಡುವುದಿಲ್ಲವೆಂದು ರಾಜ್ಯಪಾಲರಿಗೆ ಸಲ್ಲಿಸಿದ ಮನವಿ ಪತ್ರದಲ್ಲ ಎಚ್ಚರಿಕೆ ನೀಡಿದೆ.
ಪ್ರತಿಭಟನೆಯಲ್ಲಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ರೇವೂನಾಯಕ ಬೆಳಮಗಿ, ವಿದ್ಯಾಸಾಗರ ಶಹಾಬಾದಿ, ದೊಡ್ಡಪ್ಪಗೌಡ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಬಗಲಿ ಸೇರಿದಂತೆ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

