ಯುವಜನೋತ್ಸವಕ್ಕೆ ಚಾಲನೆ
ಕ.ಪ್ರ. ವಾರ್ತೆ ಗುಲ್ಬರ್ಗ ಜ.18
ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ನಿಷ್ಠೆ ಹಾಗೂ ಮಾನವೀಯತೆಯನ್ನು ಅಳವಡಿಸಿಕೊಳ್ಳುವುದರ ಮೂಲಕ ಜೀವನದಲ್ಲಿ ಯಶಸ್ಸನ್ನು ಸಾಧಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಕರೆ ನೀಡಿದ್ದಾರೆ.
ಇಲ್ಲಿನ ಜ್ಞಾನಗಂಗೆ ಅಂಗಳದಲ್ಲಿ ಶನಿವಾರ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ಎನ್ನೆಸ್ಸೆಸ್ ಕಾರ್ಯಕರ್ತರೆಲ್ಲರೂ ಸೇರಿ ತರಹೇವಾರಿ ವೇಷ ಭೂಷಣಗಳನ್ನೊಳಗೊಂಡ ಜನಪದ ಶೈಲಿಯ ಕುಣಿತ, ವೇಷಗಳನ್ನು ಧರಿಸಿ ಸಭಿಕರ ಮನಸೆಳೆದರು.
ಗುಲ್ಬರ್ಗ-ಮಂಗಳೂರಿಗೆ ಪುರಸ್ಕಾರ: ರಾಷ್ಟ್ರೀಯ ಸೇವಾ ಯೋಜನೆ ಕೋಶದ ರಾಜ್ಯ ಸಂಪರ್ಕಾಧಿಕಾರಿ ಡಾ. ಕೆ.ಬಿ. ಧನಂಜಯ ಮಾತನಾಡಿ ದೇಶದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ 33 ಲಕ್ಷ ಯುವಕರಿದ್ದು, ರಾಜ್ಯದಲ್ಲಿ 3 ಲಕ್ಷ ಯುವಕರು ಹಾಗೂ ಮೂರು ಸಾವಿರ ಅಧಿಕಾರಿಗಳಿದ್ದಾರೆ ಎಂದ ಮಾಹಿತಿ ನೀಡಿದರು.
ರಾಷ್ಟ್ರೀಯ ಸೇವಾ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಧನಸಹಾಯ ಲಭ್ಯವಾಗುತ್ತಿದ್ದು 615 ವಿಶ್ವವಿದ್ಯಾಲಯಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಜಾರಿಯಲ್ಲಿದೆ. 2012-13 ಹಾಗೂ 2013-14ರಲ್ಲಿ ರಾಷ್ಟ್ರೀಯ ಸೇವಾ ಯೋಜನೆಗೆ ರಾಷ್ಟ್ರ ಪ್ರಶಸ್ತಿ ದೊರೆತಿದ್ದು ಗುಲ್ಬರ್ಗ ಪ್ರಥಮ ಹಾಗೂ ಮಂಗಳೂರು ವಿಶ್ವವಿದ್ಯಾಲಯ ದ್ವಿತೀಯ ಸ್ಥಾನ ಗಳಿಸಿವೆ ಎಂದರು.
ಗುಲ್ಬರ್ಗ ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಸಂಘಟನಾ ಕಾರ್ಯದರ್ಶಿ ಪ್ರೊ. ಜಿ. ಶ್ರೀರಾಮಲು ಪ್ರಾಸ್ತಾವಿಕ ಮಾತನಾಡಿ ರಾಜ್ಯಮಟ್ಟದ ರಾಷ್ಟ್ರೀಯ ಸೇವಾ ಯೋಜನೆ ಯುವಜನೋತ್ಸವ ಐದು ದಿನಗಳ ಕಾಲ ನಡೆಯಲಿದೆ ಎಂದರು.
ಯುವಜನೋತ್ಸವದಲ್ಲಿ 32 ವಿದ್ಯಾಲಯಗಳ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು ಎರಡು ಬಗೆಯ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ ಎಂದು ಅವರು ವಿವರಿಸಿದರು. ಮಧ್ಯಾಹ್ನದವರೆಗೆ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು, ಶ್ರಮದಾನ, ಉಪನ್ಯಾಸ ಹಾಗೂ ಯೋಗ ಶಿಬಿರಗಳು ನಡೆಯುವವು. ಸಂಜೆ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ ಎಂದು ಅವರು ಹೇಳಿದರು.
ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಈ.ಟಿ. ಪುಟ್ಟಯ್ಯ, ಕುಲಸಚಿವ ಪ್ರೊ. ಚಂದ್ರಕಾಂತ ಎಂ. ಯಾತನೂರ, ಪ್ರೊ. ಎಸ್.ವಿ. ಹಲಸೆ, ಸಿಂಡಿಕೇಟ್ ಸದಸ್ಯರಾದ ಸುಭಾಷ ರಾಠೋಡ, ಶಾಂತಲಿಂಗ ಸಾವಳಗಿ ಮತ್ತಿತರರು ಪಾಲ್ಗೊಂಡಿದ್ದರು. ಶಿಬಿರದ ಆರಂಭಕ್ಕೂ ಮುನ್ನ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದಿಂದ ಕಾರ್ಯಸೌಧದವರೆಗೆ ಯುವಜನೋತ್ಸವ ಮೆರವಣಿಗೆ ನಡೆಸಲಾಯಿತು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಕೋಶ, ಕರ್ನಾಟಕ ಸರ್ಕಾರ ರಾಷ್ಟ್ರೀಯ ಸೇವಾ ಯೋಜನೆ ಕೋಶ ಹಾಗೂ ಗುಲ್ಬರ್ಗ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

