20 ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ!
ಚಿಂಚೋಳಿ: ತಾಲೂಕಿನ ಪ್ರಾಥಮಿಕ ಶಾಲೆಗಳಲ್ಲಿ 520 ಶಿಕ್ಷಕರ ಹುದ್ದೆ, ಪ್ರೌಢಶಾಲೆಗಳಲ್ಲಿ 96 ಶಿಕ್ಷಕರ ಹುದ್ದೆಗಳು ಖಾಲಿಯಿದ್ದು ಪ್ರಸಕ್ತ ಸಾಲಿನಲ್ಲಿ ಒಟ್ಟು 616 ಶಿಕ್ಷಕರ ಕೊರತೆಯಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಬಡವರ ಮಕ್ಕಳು ಶಿಕ್ಷಣದಿಂದ ವಂಚಿತಗೊಳ್ಳುವಂತಾಗಿದೆ. ತಾಲೂಕಿನಲ್ಲಿ 281 ಸರ್ಕಾರಿ ಕಿರಿಯ- ಹಿರಿಯ ಪ್ರಾಥಮಿಕ ಹಾಗೂ 29 ಸರ್ಕಾರಿ ಪ್ರೌಢಶಾಲೆಗಳಿವೆ. ತಾಲೂಕಿಗೆ ಒಟ್ಟು 1,761 ಶಿಕ್ಷಕರ ಹುದ್ದೆಗಳ ಮಂಜೂರಾತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆ 1,145 ಮಾತ್ರ.
ಬಿಇಒ ಹಣಮಂತರಾವ ನಾಟೀಕಾರ ಅವರನ್ನು ಶಿಕ್ಷಕರ ಕೊರತೆಯ ಬಗ್ಗೆ ಮಾತನಾಡಿಸಿದಾಗ, ತಾಲೂಕಿನಲ್ಲಿ 41 ಶಾಲೆಗಳು ಏಕೋಪಾಧ್ಯಾಯ ಶಾಲೆಗಳಾಗಿ ಮತ್ತು 20 ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಹೀಗಾಗಿ ತಾಲೂಕಿನಲ್ಲಿ ಶಿಕ್ಷಕರ ಸಮಸ್ಯೆ ಹೆಚ್ಚಾಗುತ್ತಿದೆ. ಕಳೆದ ವರ್ಷ ತಾಲೂಕಿನಲ್ಲಿ 430 ಶಿಕ್ಷಕರ ಕೊರತೆ ಎದುರಿಸಬೇಕಾಗಿತ್ತು. ಇದೀಗ ಶಿಕ್ಷಕರ ಕೊರತೆ 616ಕ್ಕೆ ತಲುಪಿದೆ ಎಂದರು.ನೇಮಕಕ್ಕೆ ಆಹ್ವಾನ: ತಾಲೂಕಿನಲ್ಲಿ ಸರ್ಕಾರಿ ಕಿರಿಯ- ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆಯ ಬಗ್ಗೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಗಮನಕ್ಕೆ ತರಲಾಗಿದೆ. ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ನಡೆಯುತ್ತಿದೆ. ಇದರ ಪ್ರಕ್ರಿಯೆ ಪೂರ್ಣಗೊಂಡ ನಂತರ ನಮ್ಮ ತಾಲೂಕಿಗೆ ಶಿಕ್ಷಕರು ಎಷ್ಟು ಜನ ಬಂದಿದ್ದಾರೆಂದು ತಿಳಿಯುತ್ತದೆ ಎಂದು ಅವರು ತಿಳಿಸಿದರು.
ಶಿಕ್ಷಕರ ನಿಯೋಜನೆ ಮಾಡುವಂತೆ ಕಚೇರಿಗೆ ನಿತ್ಯ ಅನೇಕ ಗ್ರಾಮಗಳಿಂದ ಸಾಕಷ್ಟು ಮೊಬೈಲ್ ಕರೆಗಳು ಬರುತ್ತಿವೆ. ಆದರೆ ಪ್ರಸಕ್ತ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ ಗೌರವ ಶಿಕ್ಷಕರನ್ನು ಕೇವಲ 140 ಮತ್ತು ಪ್ರೌಢಶಾಲೆಗೆ 10 ಶಿಕ್ಷಕರನ್ನು ನೇಮಿಸಿಕೊಳ್ಳುವಂತೆ ಡಿಡಿಪಿಐ ತಿಳಿಸಿದ್ದಾರೆ. ಪ್ರಾಥಮಿಕ- ಪ್ರೌಢಶಾಲಾ ಗೌರವ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿಗಳನ್ನು ಕರೆಯಲಾಗಿದೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಬೇಕಾಗಿದೆ ಎಂದು ಬಿಇಒ ಹೇಳಿದರು.
ಗುಣಮಟ್ಟದ ಶಿಕ್ಷಣ ಮರೀಚಿಕೆ: ಜಿಲ್ಲೆಯ ಅತ್ಯಂತ ಹಿಂದುಳಿದ ತಾಲೂಕಿನಲ್ಲಿ ಶಿಕ್ಷಕರ ಕೊರತೆಯಿಂದಾಗಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ. ಹೈ.ಕ. ಪ್ರದೇಶಕ್ಕೆ ಸಂವಿಧಾನದ 371(ಜೆ) ಪ್ರಕಾರ ಶಿಕ್ಷಕರ ನೇಮಕಾತಿ ನಡೆಯಬೇಕಾಗಿದೆ. ಆದರೆ ಶಿಕ್ಷಕರ ನೇಮಕಾತಿ ನಡೆಯುತ್ತಿಲ್ಲವೆಂದು ಸಮಾಜ ಸೇವಕ ಭೀಮಶೆಟ್ಟಿ ಮುಕ್ಕಾ ಅತೃಪ್ತಿ ವ್ಯಕ್ತಪಡಿಸಿದ್ದಾರೆ.ತಾಲೂಕಲ್ಲಿ ಶಿಕ್ಷಕರ ಕೊರತೆಯಿಂದಾಗಿ ಮಧ್ಯಾಹ್ನ ಬಿಸಿಯೂಟ, ಕ್ಷೀರಭಾಗ್ಯ ಯೋಜನೆ ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ. ಜನಪ್ರತಿನಿಧಿಗಳು ಶಿಕ್ಷಣದ ಪ್ರಗತಿಯ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗಿದೆ ಎಂಬುದು ಇಲ್ಲಿನ ಪಾಲಕರ ಒತ್ತಾಯ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

