ಎಸ್ಸಿ ಎಸ್ಟಿ ಅನುದಾನ ಬಳಕೆಯಾಗದಿದ್ದರೆ ಅಧಿಕಾರಿಗಳೇ ಹೊಣೆ
ಯಾದಗಿರಿ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನಾಂಗಕ್ಕಾಗಿ ಮೀಸಲಾಗಿ, ಮಂಜೂರಾದ ಅನುದಾನವನ್ನು ಸಮರ್ಪಕವಾಗಿ ಬಳಸದಿದ್ದರೆ ಆ ಜನಾಂಗದ ಮೇಲೆ ಆಗುವ ದೌರ್ಜನ್ಯಕ್ಕೆ ಸಮಾನ ಲೋಪವೆಂದು ಪರಿಗಣಿಸಲಾಗುವುದೆಂದು ಜಿಲ್ಲಾಧಿಕಾರಿ ಮನೋಜ್ ಜೈನ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಬುಧವಾರ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅನುಷ್ಠಾನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನಾಂಗಕ್ಕಾಗಿ ಮಂಜೂರಾದ ಅನುದಾನ ಸಂಪೂರ್ಣ ಬಳಕೆಯಾಗಬೇಕು. ಮಂಜೂರಾದ ಅನುದಾನ ಬಳಕೆಯಾಗದಿದ್ದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಎಚ್ಚರಿಸಿದರು.
ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳಿಸಿ: ವಿವಿಧ ಯೋಜನೆಗಳ ಮಾಹಿತಿ ವ್ಯವಸ್ಥಿತವಾಗಿ ತಲುಪುವಂತೆ ನೋಡಿಕೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಗಳು, ಜಿಪಂ ಹಾಗೂ ತಾಪಂ ವ್ಯಾಪ್ತಿಯ ಯೋಜನೆಗಳಡಿ ಮಂಜೂರಾದ ಅನುದಾನಕ್ಕೆ ಸಂಬಂಧಿಸಿದಂತೆ ಆಯಾ ಸ್ಥಾಯಿ ಸಮಿತಿಗಳಲ್ಲಿ ಮತ್ತು ಸಾಮಾನ್ಯ ಸಭೆಗಳಲ್ಲಿ ಕ್ರಿಯಾಯೋಜನೆಗಳಿಗೆ ಮಂಜೂರಾತಿ ಪಡೆದು ನಿಗದಿಪಡಿಸಿದ ಅವಧಿಯೊಳಗೆ ಯೋಜನೆಗಳ ಅನುಷ್ಠಾನ ಮತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದರು.
ವಿತರಿಸಲಾಗುವ ಜಮೀನು, ವಿವಿಧ ಕೊಳವೆಬಾವಿ ಸೌಲಭ್ಯ, ಮೂಲ ಸೌಕರ್ಯ, ಉದ್ಯಮಶೀಲತಾ ತರಬೇತಿ, ಸ್ವಯಂ ಉದ್ಯೋಗ ಕಾರ್ಯಕ್ರಮ, ವಿವಿಧ ಪರಿಕರಗಳ ವಿತರಣೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ತಪ್ಪದೇ ಕಲ್ಪಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಪರಿಶಿಷ್ಟ ಜಾತಿ, ಪಂಗಡ ಅಭಿವೃದ್ಧಿ ನಿಗಮ, ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಪಂ ಮತ್ತು ತಾಪಂ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಮಿತಿ ಸಭೆ: ಜಿಲ್ಲೆಯಲ್ಲಿ ಒಟ್ಟು 223 ಸಂತ್ರಸ್ತರಿಗೆ ಒಟ್ಟು 1.24 ಕೋಟಿ ಪರಿಹಾರಧನವನ್ನು ವಿತರಿಸಲಾಗಿದೆ. ಈ ಕುರಿತು ಜಿಲ್ಲಾ ಜಾಗೃತಿ ಸಮಿತಿ ಸಭೆ ನಡೆಸಿದ ಜಿಲ್ಲಾಧಿಕಾರಿ ಮನೋಜ್ ಜೈನ್ ಅವರು, ಈ ಜನಾಂಗದ ಮೇಲಾಗುವ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಯಾವುದೇ ಫಲಾನುಭವಿ ಪರಿಹಾರ ಪಡೆಯುವಲ್ಲಿ ವಂಚಿತವಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

