ತೆರೆದ ಕೊಳವೆಬಾವಿ: ಪುರಸಭೆ ದಿವ್ಯ ನಿರ್ಲಕ್ಷ್ಯ
ಶಹಾಪುರ: ಪಟ್ಟಣದ ರಾಕಂಗೇರಾ ಸೀಮಾಂತರದಲ್ಲಿನ ಹೆದ್ದಾರಿ ರಸ್ತೆ ಸಮೀಪ ಕೋಲ್ಡ್ ಸ್ಟೋರೇಜ್ ಪಕ್ಕದಲ್ಲಿ ಇತ್ತೀಚೆಗೆ ಕೊಳವೆಬಾವಿ ಕೊರೆಸಿದ್ದು ಅದನ್ನು ಮುಚ್ಚದೆ ಹಾಗೆಯೇ ಬಿಟ್ಟಿದ್ದು ಪುರಸಭೆಯ ಬೇಜವಾಬ್ದಾರಿಗೆ ಸಾಕ್ಷಿಯಾಗಿದೆ. ರಾಜ್ಯಾದ್ಯಂತ ತೆರೆದ ಕೊಳವೆಬಾವಿಗಳಿಂದ ಉಂಟಾದ ಅನಾಹುತಗಳ ಬಗ್ಗೆ ಅರಿವಿದ್ದರೂ ಪಟ್ಟಣದಲ್ಲಿ ಮಕ್ಕಳು ಓಡಾಡುವ ಸ್ಥಳದಲ್ಲಿ ತೆರೆದ ಕೊಳವೆಬಾವಿಯನ್ನು ಹಾಗೆಯೇ ಬಿಟ್ಟಿದ್ದು ಅಪಾಯಕ್ಕೆ ಆಹ್ವಾನಿಸಿದಂತಾಗಿದೆ. ತಕ್ಷಣವೇ ಅಪಾಯ ಸಂಭವಿಸುವ ಮುಂಚೆ ಪುರಸಭೆ ಅದನ್ನು ಪರಿಶೀಲಿಸಿ ಕೊಳವೆಬಾವಿ ಮುಚ್ಚಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಆಟೋ ಘಟಕದ ನಗರ ಅಧ್ಯಕ್ಷ ದೇವಿಂದ್ರಪ್ಪ ಆಗ್ರಹಿಸಿದ್ದಾರೆ.
ವೀರಶೈವ ಮಹಾಸಭೆಗೆ ಅಂಗಡಿ ನೇಮಕ
ಯಾದಗಿರಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಯುವ ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ಪ್ರಕಾಶ ಅಂಗಡಿ ಕನ್ನಳ್ಳಿ ಅವರನ್ನು ಮಹಾಸಭೆಯ ರಾಜ್ಯ ಘಟಕದ ಅಧ್ಯಕ್ಷ ಎನ್.ತಿಪ್ಪಣ್ಣ ನೇಮಕ ಮಾಡಿದ್ದಾರೆ. ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷರ ಮಾರ್ಗದರ್ಶನದಲ್ಲಿ ಜಿಲ್ಲಾದ್ಯಂತ ಮಹಾಸಭೆಯ ಗುರಿ ಮತ್ತು ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದರ ಜೊತೆಗೆ ಸಮಾಜದ ಯುವಕರನ್ನ ಒಂದುಗೂಡಿಸುವುದರ ಮೂಲಕ ಸಮಾಜದ ಸಂಘಟನೆಯನ್ನು ಬಲಪಡಿಸಬೇಕು. ಬರುವ ದಿನಗಳಲ್ಲಿ ಜಿಲ್ಲೆಯ ಎಲ್ಲ ತಾಲೂಕು, ಹೋಬಳಿ ಹಾಗೂ ನಗರ ಘಟಕಗಳನ್ನು ಶೀಘ್ರವಾಗಿ ರಚಿಸಿ, ಸಮಾಜ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಆದೇಶದ ಮೂಲಕ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ, ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಮಾಜಿ ಅಧ್ಯಕ್ಷ ಭಿಮಣ್ಣ ಖಂಡ್ರೆ, ಮಹಾಸಭೆ ಉಪಾಧ್ಯಕ್ಷ ಲಿಂಗನಗೌಡ ಮಲ್ಹಾರ್, ಕಾರ್ಯದರ್ಶಿ ಪ್ರಸನ್ನಕುಮಾರ ಹಾಗೂ ಬಸವರಡ್ಡಿ ಪಾಟೀಲ ಎಂ.ಟಿ. ಹಳ್ಳಿ ಸೇರಿದಂತೆ ಇತರರು ಇದ್ದರು.
ಗ್ರಾಮ ನ್ಯಾಯಾಲಯ ಸ್ಥಾಪನೆಗೆ ಒತ್ತಾಯ
ಯಾದಗಿರಿ: ಗ್ರಾಮಗಳ ಜನರ ಸಮಸ್ಯೆ ನಿವಾರಣೆ ಕುರಿತು ಕ್ರಮ ಕೈಗೊಳ್ಳಲು ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಬೇಕೆಂದು ಶಾಸಕ ಡಾ. ಎ.ಬಿ. ಮಾಲಕರಡ್ಡಿ ವಿಧಾನಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಈ ಕುರಿತ ಮಾಲಕರಡ್ಡಿಯವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಖಾತೆ ಸಚಿವ ಟಿ.ಬಿ. ಜಯಚಂದ್ರ, ಈ ಕುರಿತು ಸರ್ಕಾರ ನಿರ್ಧಾರ ಕೈಗೊಂಡಿದ್ದು, ಇಂತಹ ನ್ಯಾಯಾಲಯಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಗ್ರಾಮ ನ್ಯಾಯಾಲಯಗಳ ಸ್ಥಾಪನೆ ಮಾಡಬೇಕೆಂಬ ಕಾನೂನಿದೆ. ಆದರೂ ಸರ್ಕಾರ ಇದುವರೆಗೆ ಗ್ರಾಮ ನ್ಯಾಯಾಲಯಗಳ ಸ್ಥಾಪಿಸಲು ಮುಂದಾಗಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ 60 ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ಉದ್ದೇಶಿದ್ದು, ಮೊದಲ ಹಂತದಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 26 ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಚಿಕ್ಕಬಳ್ಳಾಪುರ ಮತ್ತು ಗೌರಿಬಿದನೂರು ತಾಲೂಕುಗಳಲ್ಲಿ 2 ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಿ ಉದ್ಘಾಟನೆ ಮಾಡಲಾಗಿದೆ ಎಂದು ಸಚಿವರು ಸದನಕ್ಕೆ ತಿಳಿಸಿದ್ದಾರೆ. ಎಲ್ಲ ಗ್ರಾಮಗಳಲ್ಲೂ ಗ್ರಾಮ ನ್ಯಾಯಾಲಯ ಸ್ಥಾಪನೆ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದ್ದು, ಪರಿಶೀಲನೆ ನಂತರ ಗ್ರಾಮ ನ್ಯಾಯಾಲಯ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಯಚಂದ್ರ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

