ಸಾಗುವಳಿದಾರರನ್ನು ಒಕ್ಕಲು ಎಬ್ಬಿಸಲ್ಲ: ಸಚಿವರ ಭರವಸೆ
ಯಾದಗಿರಿ: ರಾಜ್ಯದ ವಿವಿಧ ಭಾಗಗಳಲ್ಲಿ 1, 2 ಮತ್ತು 3 ಎಕರೆಯಷ್ಟು ಜಮೀನನ್ನು ಜೀವನೋಪಾಯಕ್ಕಾಗಿ ಒತ್ತುವರಿ ಮಾಡಿಕೊಂಡಿರುವ ಸಣ್ಣ ಮತ್ತು ಭೂಹೀನ ರೈತರನ್ನು ಸರ್ಕಾರಿ ಜಮೀನು ಮತ್ತು ಅರಣ್ಯ ಭೂಮಿಯಿಂದ ತೆರವುಗೊಳಿಸುವುದಿಲ್ಲ ಎಂದು ಅರಣ್ಯ ಸಚಿವ ರಮಾನಾಥ್ ರೈ ಭರವಸೆ ನೀಡಿದ್ದಾರೆ.
ರೈತ- ಕೃಷಿ ಕಾರ್ಮಿಕರ ಸಂಘಟನೆ ರಾಜ್ಯ ಸಮಿತಿ ಅಧ್ಯಕ್ಷ ಡಾ. ಟಿ.ಎಸ್. ಸುನೀತಕುಮಾರ್, ಕಾರ್ಯದರ್ಶಿ ಎಚ್.ವಿ. ದಿವಾಕರ್ ನೇತೃತ್ವದಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ತಮ್ಮನ್ನು ಭೇಟಿ ಮಾಡಿದ ವಿವಿಧ ಜಿಲ್ಲೆಗಳ ರೈತ ಮುಖಂಡರ ನಿಯೋಗಕ್ಕೆ ಸಚಿವರು ಭರವಸೆ ನೀಡಿದ್ದಾರೆ.
ಸಕ್ರಮ ಸಮಿತಿ ರಚನೆ: ಕೃಷಿ ಜಮೀನು ಹಕ್ಕುಪತ್ರಗಳಿಗಾಗಿ ಫಾರ್ಮ್ ನಂ. 50 ಮತ್ತು 53ರಲ್ಲಿ ಹಲವು ವರ್ಷಗಳ ಹಿಂದೆ ಈಗಾಗಲೇ ಅರ್ಜಿ ಹಾಕಿರುವ ಬಡ ರೈತರ ಅರ್ಜಿಗಳನ್ನು ಮೊದಲಿಗೆ ಪರಿಶೀಲಿಸಿ, ಅರ್ಹ, ಬಡ, ಭೂಹೀನ ರೈತರ ಸಾಗುವಳಿಯನ್ನು ಸಕ್ರಮಗೊಳಿಸಿ, ಹಕ್ಕುಪತ್ರ ನೀಡಲು ನಿರ್ಧರಿಸಲಾಗಿದೆ. ಅದಕ್ಕಾಗಿ ವಿಧಾನಸಭಾ ಕ್ಷೇತ್ರವಾರು ಶಾಸಕರ ನೇತೃತ್ವದಲ್ಲಿ ಸಕ್ರಮ ಸಮಿತಿ ರಚಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಈ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ. ಅದಕ್ಕೆ ಇನ್ನಷ್ಟು ಸಮಯ ಬೇಕಿದೆ ಎಂದ ಅವರು, ಅಲ್ಲಿಯವರೆಗೆ ಈಗಾಗಲೇ ಉಪಜೀವನಕ್ಕಾಗಿ ಹಲವಾರು ವರ್ಷಗಳಿಂದ ಬಗರ್ಹುಕುಂ ಸಾಗುವಳಿ ಮಾಡುತ್ತಿರುವ ಸಣ್ಣ ರೈತರನ್ನು ತೆರವುಗೊಳಿಸದಂತೆ ಕ್ರಮ ಕೈಗೊಳ್ಳುವುದಾಗಿಯೂ ಭರವಸೆ ನೀಡಿದರು.
ಜಂಟಿ ಸಮೀಕ್ಷೆ: ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಪ್ರದೇಶವನ್ನು ಗುರುತಿಸಲು ಅರಣ್ಯ ಮತ್ತು ಕಂದಾಯ ಇಲಾಖೆಗಳ ಜಂಟಿ ಸಮೀಕ್ಷೆ ನಡೆಸಲು ಸಂಪುಟದ ಉಪ-ಸಮಿತಿಯನ್ನು ರಚಿಸಲಾಗಿದೆ. ಈ ಕುರಿತು ಶೀಘ್ರ ಜಂಟಿ ಸಮೀಕ್ಷೆ ನಡೆಸಲಾಗುವುದು ಎಂದರು. ಇದಕ್ಕೂ ಮೊದಲು ಸಚಿವರಿಗೆ ಮನವಿ ಸಲ್ಲಿಸಿದ ರೈತ -ಕೃಷಿ ಕಾರ್ಮಿಕರ ಸಂಘಟನೆ ರಾಜ್ಯ ಪದಾಧಿಕಾರಿಗಳ ನಿಯೋಗವು, ಈ ವಿಷಯದ ಹಲ ವಾರು ಸಂದರ್ಭಗಳಲ್ಲಿ ಮನವಿ ಸಲ್ಲಿಸಲಾಗಿತ್ತು. ಮತ್ತೆ ಮನವಿ ಸಲ್ಲಿಸಲಾಗುತ್ತಿದೆ. ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಅರಣ್ಯ ಸಚಿವರ ಹೇಳಿಕೆ ಸ್ವಾಗತಿಸಿರುವ ಸಂಘಟನೆ ರಾಜ್ಯ ಸಮಿತಿ, ಭರವಸೆಯು ಶೀಘ್ರ ಜಾರಿಗೆ ತರುವಂತೆ ಮನವಿ ಮಾಡಲಾಗಿದೆ ಎಂದು ಸಂಘಟನೆ ರಾಜ್ಯ ಸಮಿತಿ ಸದಸ್ಯ ಕೆ. ಸೋಮಶೇಖರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

