ಎಲ್ಲದಕ್ಕೂ ಸೂಕ್ತ ಕ್ರಮ ಕೈಗೊಳ್ಳಿ
ಕ.ಪ್ರ. ವಾರ್ತೆ, ಯಾದಗಿರಿ, ಜೂ. 16
ಕುಡಿವ ನೀರಿನ ಯೋಜನೆಗಳಿಗಾಗಿ ಮಂಜೂರಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಆದ್ಯತೆ ಮೇಲೆ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಜವಳಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಬಾಬುರಾವ ಚಿಂಚನಸೂರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಕುಡಿಯುವ ನೀರಿನ ಸಮಸ್ಯೆಗಳಿಗೆ ತಕ್ಷಣ ಸ್ಪಂಧಿಸಿ ನೀರಿನ ಸಮಸ್ಯೆ ಬಗೆ ಹರಿಸಲು ಪ್ರಯತ್ನಿಸಬೇಕು. ಪಂಚಾಯತ್ ರಾಜ್ ಇಂಜನೀಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಖುದ್ಧಾಗಿ ಭೇಟಿ ನೀಡಿ ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು ಬರುವ ಮಳೆಗಾಲದ ಅವಧಿಯೊಳಗೆ ಪ್ರಗತಿಯಲ್ಲಿರುವ ಕುಡಿಯುವ ನೀರಿನ ಯೋಜನೆ ಪೂರ್ಣಗೊಳಿಸುವಂತೆ ಸೂಚಿಸಿದರು.
ಯಾದಗಿರಿ ಹಾಗೂ ಗುರುಮಿಠಕಲ್ ಕ್ಷೇತ್ರಗಳ ವ್ಯಾಪ್ತಿಯ ಸುಮಾರು 27 ಗ್ರಾಮಗಳಿಗೆ ಜಲ ಸಂಗ್ರಹಾಗಾರ ಮತ್ತು ಪೈಪ್ ಲೈನ್ ಮೂಲಕ ನೀರು ಕಲ್ಪಿಸುವ ಯೋಜನೆ ಕುರಿತಂತೆ ಸಮೀಕ್ಷೆ ನಡೆಸಿ ಯೋಜನೆ ಮತ್ತು ಖರ್ಚಿನ ಬಗ್ಗೆ ಕ್ರಿಯಾ ಯೋಜನೆ ರೂಪಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಗುರುಮಿಠಕಲ್ ಕ್ಷೇತ್ರದಲ್ಲಿ ಅವಶ್ಯಕತೆ ಇರುವ ಕಡೆ ಶುದ್ಧಕುಡಿಯುವ ನೀರಿನ ಘಟಕ ಸ್ಥಾಪನೆ ಕುರಿತಂತೆ ಪರಿಶೀಲನೆ ನಡೆಸಿ ಪ್ರಸ್ತಾವನೆ ಸಲ್ಲಿಸಲು ಸಚಿವರು ಸೂಚಿಸಿದರು.
ಯಾದಗಿರಿ ಬಸ್ ನಿಲ್ದಾಣ, ಗುರುಮಿಠಕಲ್ ಡಿಪೋ, ಹುಣಸಗಿ ಬಸ್ ನಿಲ್ದಾಣ ಕಾಮಗಾರಿ ತೀವ್ರಗತಿಯಲ್ಲಿ ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿ ಆಯುರ್ವೇಧಿಕ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ, ಕುರಿತು ವರದಿ ನೀಡಬೇಕು. ಜಿಲ್ಲೆಯಲ್ಲಿ ಹದಗೆಟ್ಟಿರುವ ಗ್ರಾಮೀಣ ರಸ್ತೆಗಳ ದುರಸ್ತಿಗೆ ತಕ್ಷಣ ಕ್ರಮಕೈಗೊಳ್ಳಬೇಕು. ಸಭೆಗಳಿಗೆ ಗೈರು ಹಾಜರಾಗುವ ಜೊತೆಗೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ಅರಣ್ಯ ಇಲಾಖೆ, ಅರಣ್ಯ ಸಂರಕ್ಷಣಾಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವಂತೆ ಪತ್ರ ಬರೆಯಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಕುಡಿಯುವ ನೀರಿಗೆ ಸಂಬಂಧಿಸಿದಂತೆ ಬಂದಿದ್ದ ಸುಮಾರು 83 ದೂರುಗಳ ಪೈಕಿ 71 ದೂರಗಳ ಮೇಲೆ ಅವಶ್ಯಕ ಕ್ರಮಕೈಗೊಳ್ಳಲಾಗಿದೆ. ಶುದ್ಧಕುಡಿಯುವ ನೀರಿನ ಘಟಕಗಳ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಹತ್ತು ಗ್ರಾಮಗಳಿಗೆ ಸದ್ಯಕ್ಕೆ 10 ಟ್ಯಾಂಕರ್ಗಳ ಮೂಲಕ ನೀರಿನ ಸರಬರಾಜು ಮಾಡಲಾಗುತ್ತಿದ್ದು ಈ ಮಾಹೆ ಅಂತ್ಯದವರೆಗೆ ಮುಂದುವರೆಸಲಾಗುತ್ತಿದೆ. ಜಿಲ್ಲೆಯಲ್ಲಿ 170 ಕೊಳವೆ ಬಾವಿ ಹಾಕಲಾಗಿದ್ದು, ಅವಶ್ಯಕತೆ ಇರುವ ಕಡೆ ಶಾಶ್ವತ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಸಿಆರ್ಎಫ್ ಅಡಿ ಇನ್ನೂ 5 ಕೋಟಿ ಅನುದಾನ ಬಾಕಿ ಇದೆ ಎಂದು ಜಿಲ್ಲಾಧಿಕಾರಿ ಎಸ್.ಎ.ಜಿಲಾನಿ ಅವರು ಸಚಿವರ ಗಮನಕ್ಕೆ ತಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

