ಗುಲ್ಬರ್ಗಾ

ಜನಾಂಗದಿಂದ ಬೃಹತ್ ಪ್ರತಿಭಟನೆ

Published On :

ಯಾದಗಿರಿ: ವಾಲ್ಮೀಕಿ ಜನಾಂಗದ ಮೇಲೆ ಜಿಲ್ಲೆಯಲ್ಲಿ ನಿರಂತರ ದೌರ್ಜನ್ಯ, ದಬ್ಬಾಳಿಕೆ, ಜಾತಿ ನಿಂದನೆ ನಡೆಯುತ್ತಿದ್ದು, ಕೂಡಲೇ ಜಿಲ್ಲಾಡಳಿತ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾ ವಾಲ್ಮೀಕಿ ನಾಯಕ ಪದಾಧಿಕಾರಿಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮರೆಪ್ಪ ನಾಯಕ ಮೊಗಂದಫರ ಮಾತನಾಡಿ, ಜಿಲ್ಲೆಯಲ್ಲಿ ಸಮಾಜದ ಮೇಲೆ ಹೆಣ್ಣು ಮಕ್ಕಳ ಅಪಹರಣ ಅತ್ಯಾಚಾರ ನಡೆಯುತ್ತಿದ್ದರು ಸಂಬಂಧಿಸಿದ ಅಧಿಕಾರಿಗಳು ಮಾತ್ರ ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸಚಿವರು ಹಾಗೂ ಶಾಸಕರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯ ಅಡಿಯಲ್ಲಿ ಮೀಸಲಿಟ್ಟ ಹಣವನ್ನು ಆಯಾ ಇಲಾಖೆಯ ಅಧಿಕಾರಿಗಳು ಮಾರ್ಚ್ ಅಂತ್ಯವಾದರು ಹಣ ಬಳಕೆ ಮಾಡದೇ ಇರುವುದು ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸೇವೆಯಿಂದ ವಜಾಗೊಳಿಸಬೇಕು. ಪ್ರತಿ ವರ್ಷದಂತೆ ಅಯಾವ್ಯಯದ ಪ್ರಕಾರ ಯೋಜನೆ ಸಂಬಂಧಿಸಿದ ಹಣವನ್ನು ಖರ್ಚು ಮಾಡಲು ಆದೇಶಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಜನಸಂಖ್ಯಾವಾರು ಪರಿಶಿಷ್ಟ ಪಂಗಡದ ಜನರು ಶೇ.8.5 ಪ್ರತಿಶತ ಇದ್ದಾರೆ. ಆದರೆ ರಾಜ್ಯ ಸರ್ಕಾರವು ಕೇವಲ ಮೂರು ಪ್ರತಿಶತ ಮೀಸಲಾತಿ ನೀಡುತ್ತಿರುವುದನ್ನು ನೋಡಿದರೆ ನಮ್ಮ ಜನಾಂಗಕ್ಕೆ ಘೋರ ಅನ್ಯಾಯ ಮಾಡುತ್ತಿದೆ. ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ 50 ಜಾತಿಗಳು ಸೇರಿವೆ. ಹೀಗಿರುವಾಗ ಶೇ.3 ರಷ್ಟು ಯಾರಿಗೆ ಸಾಲುತ್ತದೆ. ಆದ್ದರಿಂದ ಕೇಂದ್ರದ ಮಾದರಿಯಂತೆ ಶೇ.7.5 ಪ್ರತಿಶತ ಮೀಸಲಾತಿಯನ್ನು ರಾಜ್ಯದಲ್ಲಿ ಜಾರಿಗೆ ತರಲು ಆದೇಶಿಸಬೇಕು ಎಂದು ಮನವಿ ಮಾಡಿದರು.  
ಕರ್ನಾಟಕ ಸರ್ಕಾರ ಇತ್ತೀಚೆಗೆ ರಾಜಕೀಯ ಸ್ವಾರ್ಥಕ್ಕಾಗಿ ಅನಾವಶ್ಯಕ ಸುಳ್ಳು ಜಾತಿ ಪ್ರಮಾಣ ನೀಡುತ್ತಿದೆ. ಹಿಂದುಳಿದ ವರ್ಗಗಳಲ್ಲಿ ಬರುವ ಕುರುಬ, ಕಬ್ಬಲಿಗ, ಜಾತಿಯವರು ಪರಿಶಿಷ್ಟ ಪಂಗಡದ ಜಾತಿ ಪತ್ರಗಳನ್ನು ಗೊಂಡ, ಟೋಕರಿ ಕೋಳಿ, ಕಾಡು ಕುರುಬ ಎಂದು ಪ್ರಮಾಣ ಪತ್ರ ಪಡೆಯುತ್ತಿದ್ದಾರೆ. ಇದಕ್ಕೆಲ್ಲಾ ಗುಲ್ಬರ್ಗ ಮತ್ತು ಬೀದರ್ ಜಿಲ್ಲಾಧಿಕಾರಿಗಳೇ ನೇರ ಹೊಣೆ ಎಂದು ಆರೋಪಿಸಿದ್ದಾರೆ. ತಾಲೂಕಿನ ಖಾನಳ್ಳಿ ಗ್ರಾಮದ ವಾಲ್ಮೀಕಿ ಜನಾಂಗದ ವ್ಯಕ್ತಿ ಹಣಮಂತ ಏಸಿಡ್ ದಾಳಿಗೆ ಒಳಪಟ್ಟು ಜೀವನ ಮರಣದೊಂದಿಗೆ ಆಸ್ಪತ್ರೆಯಲ್ಲಿ ಹೋರಾಟ ಮಾಡುತ್ತಿದ್ದಾನೆ. ಯಾದಗಿರಿ ಗ್ರಾಮೀಣ ಠಾಣೆಯ ಪಿಎಸ್‌ಐ ಲಂಚದ ಆಸೆಗೆ ಒಳಪಟ್ಟು ಆರೋಪಿಯ ಪರವಾಗಿ ನಿಂತು ಆಕೆಯನ್ನು ಬಂಧಿಸದೇ ರಕ್ಷಣೆ ಮಾಡುತ್ತಿದ್ದಾನೆ ಎಂದು ಆರೋಪಿಸಿದ್ದಾರೆ.
ಅಪರಾಧಿಗಳಿಗೆ ಸಹಾಯ ಮಾಡುತ್ತಿರುವ ಅಧಿಕಾರಿಗಳನ್ನು ಕೂಡಲೇ ಸೇವೆಯಿಂದ ಅಮಾನತ್ತು ಮಾಡಬೇಕೆಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ನಗರದ ಬಸ್ ನಿಲ್ದಾಣದಿಂದ ಪದಯಾತ್ರೆಯ ಮೂಲಕ ಆಗಮಿಸಿದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಜಮಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.