ಗುಲ್ಬರ್ಗಾ

ಕುಡಿವ ನೀರಿನ ಸಮಸ್ಯೆಗೆ ಸ್ಪಂದಿಸಿ

Published On :

ಕ.ಪ್ರ. ವಾರ್ತೆ, ಜೇವರ್ಗಿ, ಮೇ 13
ತಾಲೂಕಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಸಿದ್ದು, ತಕ್ಷಣ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ತಾಪಂ ಅಧ್ಯಕ್ಷ ಮಲ್ಲನಗೌಡ ಪಾಟೀಲ್ ನೇದಲಗಿ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಕುರಿತ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕಿನ ವರ್ಚನಳ್ಳಿ ಗ್ರಾಮದಲ್ಲಿ ತೆರೆದಬಾವಿಯ ನೀರು ಕಲುಷಿತಗೊಂಡಿರುವ ಬಗ್ಗೆ ದೂರುಗಳಿದ್ದು, ಆ ನೀರನ್ನು ಪರೀಕ್ಷೆಗೆ ಒಳಪಡಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ನೇರಡಗಿ ಹಾಗೂ ಮಾರಡಗಿಯಲ್ಲಿ ಅಂತರ್ಜಲ ಮಟ್ಟ ಕುಸಿತದಿಂದ ತೆರೆದ ಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಕೊಳವೆಬಾವಿ ಕೊರೆಸುವಂತೆ ಸೂಚಿಸಲಾಯಿತು. ತೀವ್ರ ನೀರಿನ ಅಭಾವ ಎದುರಿಸುತ್ತಿರುವ ಯಾಳವಾರ ಹಾಗೂ ವರ್ಚನಳ್ಳಿಯಲ್ಲಿ ಟ್ಯಾಂಕರ್ ಮೂಲಕ ನೀರಿನ ಪೂರೈಸಲಾಗುತ್ತಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಭೆಗೆ ತಿಳಿಸಿದರು.
ಅಧಿಕಾರಿಗಳ ಗೈರು: ನೀರಿನ ಕುರಿತು ತುರ್ತು ಸಭೆ ನಡೆಸುವ ಬಗ್ಗೆ ಮುಂಚಿತವಾಗಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ, ಪಂಚಾಯತ್ ರಾಜ್ ಇಲಾಖೆಯ ಒಬ್ಬ ಅಧಿಕಾರಿಯೂ ಸಭೆಗೆ ಹಾಜರಾಗಿಲ್ಲ. ಕುಡಿವ ನೀರಿನ ವಿಷಯದಲ್ಲಿ ಮಹತ್ವದ ಸಭೆ ಇದಾಗಿರುವುದರಿಂದ ಅದಕ್ಕೆ ಸಂಬಂಧಪಟ್ಟ ಇಲಾಖೆಯೇ ಸಭೆಯಿಂದ ದೂರ ಉಳಿದಿತ್ತು. ಇದರಿಂದ ತಾಪಂ ಅಧ್ಯಕ್ಷರು, ಇಒಗೆ ತಾಲೂಕಿನ ಯಾವ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೋರಿದೆ. ಸಮಸ್ಯೆಗೆ ಪರಿಹಾರ ಕಂಡುಕೊಂಡ ಬಗ್ಗೆ ನಿಖರವಾದ ಮಾಹಿತಿ ಸಭೆಗೆ ದೊರಕಲಿಲ್ಲ.
ನೀತಿ ಸಂಹಿತೆ ಜ್ವರ: ಪಂಚಾಯತ್ ರಾಜ್ ಇಲಾಖೆಗೆ ತುರ್ತು ಸಭೆಯ ನೋಟಿಸ್ ನೀಡಿದ್ದರೂ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಖುದ್ದು ತಾವು ಮಾತನಾಡಿದರೂ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ತಾವು ಯಾವುದೇ ಸಭೆಗೆ ಹಾಜರಾಗುವುದಿಲ್ಲ ಎಂದು ಅವರು ತಿಳಿಸಿರುವುದಾಗಿ ತಾಪಂ ಅಧ್ಯಕ್ಷ ಮಲ್ಲನಗೌಡ ಪಾಟೀಲ್ ನೇದಲಗಿ ಸಭೆಯಲ್ಲಿ ಕಿಡಿಕಾರಿದರು.
ಅಧಿಕಾರಿಗಳ ಆದೇಶ ಉಲ್ಲಂಘನೆ: ಈ ವಿಷಯವಾಗಿ ತಾವು ಜಿಪಂ ಸಿಇಒಗೆ ಸಂಪರ್ಕಿಸಿದಾಗ ಕುಡಿವ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಸಭೆ ನಡೆಸಲು ಯಾವುದೇ ನೀತಿಸಂಹಿತೆ ಅಡ್ಡಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳ ಆದೇಶವನ್ನು ಉಲ್ಲಂಘಿಸಿ ತಾಲೂಕಿನ ಪಂಚಾಯತ್‌ರಾಜ್ ಇಲಾಖೆ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆ. ಕುಡಿಯುವ ನೀರಿಗಾಗಿ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಿದ್ದು, ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಇದರಿಂದ ಕ್ಷೇತ್ರದ ಶಾಸಕ ಡಾ. ಅಜಯಸಿಂಗ್ ಅವರಿಗೆ ಕಪ್ಪು ಚುಕ್ಕೆಯಾಗುತ್ತಿದ್ದು, ಕೂಡಲೇ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸುವಂತೆ ತಾಪಂ ಇಒಗೆ ಅಧ್ಯಕ್ಷರು ಸೂಚಿಸಿದರು.
ಸಭೆಯಲ್ಲಿ ತಾಪಂ ಇಒ ಪಲ್ಲಾನರಸಿಂಹರೆಡ್ಡಿ, ತಾಲೂಕಿನ 33 ಪಿಡಿಒಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.