16ರಂದು ಗುವಿವಿ ಕಟ್ಟಡಗಳಲ್ಲಿ ಮತ ಎಣಿಕೆ
ಕ.ಪ್ರ. ವಾರ್ತೆ, ಗುಲ್ಬರ್ಗ, ಮೇ 13
ಗುಲ್ಬರ್ಗ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ನಡೆದ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಗುಲ್ಬರ್ಗ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಕಟ್ಟಡಗಳಲ್ಲಿ ಮೇ 16ರಂದು ಬೆಳಗಿನ 8ರಿಂದ ಪ್ರಾರಂಭವಾಗಲಿದ್ದು, ಇದಕ್ಕಾಗಿ ಸಕಲ ಸಿದ್ಧತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ಎನ್.ವಿ. ಪ್ರಸಾದ್ ಹೇಳಿದರು.
ನಗರದಲ್ಲಿ ಮಂಗಳವಾರ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳ, ಚುನಾವಣಾ ಏಜೆಂಟರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದಲ್ಲಿ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಮತಎಣಿಕೆ ಕೇಂದ್ರವಿದ್ದು, ಬೆ.8ಕ್ಕೆ ಸರಿಯಾಗಿ ಮೊದಲಿಗೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚಲಾಯಿಸಲಾದ ಅಂಚೆ ಮತಪತ್ರಗಳ ಎಣಿಕೆ ನಡೆಸಲಾಗುವುದು. ನಂತರ 8.30 ಗಂಟೆಗೆ ಈ ಕೇಂದ್ರ ಸೇರಿದಂತೆ ಎಲ್ಲ ಮತಎಣಿಕೆ ಕೇಂದ್ರಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳಲ್ಲಿನ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ ಎಂದು ತಿಳಿಸಿದರು.
ಬಸ್ ವ್ಯವಸ್ಥೆ: ಬೆ.7 ಗಂಟೆಯೊಳಗೆ ಕೌಂಟಿಂಗ್ ಏಜೆಂಟ್ ಮತ್ತು ಸಿಬ್ಬಂದಿ ಗುಲ್ಬರ್ಗ ವಿಶ್ವವಿದ್ಯಾಲಯದ ಮುಖ್ಯದ್ವಾರದಲ್ಲಿ ಹಾಜರಿರಬೇಕು. ಅಲ್ಲಿಂದ ವಿವಿಧ ಮತಎಣಿಕೆ ಕೇಂದ್ರಗಳಿಗೆ ಕರೆದೊಯ್ಯಲು ಬಸ್ ವ್ಯವಸ್ಥೆ ಮಾಡಲಾಗಿದೆ. ಯಾರೂ ಮೊಬೈಲ್ ತರುವಂತಿಲ್ಲ ಹಾಗೂ ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮತಎಣಿಕೆ ಪ್ರಯುಕ್ತ ಗುಲ್ಬರ್ಗ ವಿಶ್ವವಿದ್ಯಾಲಯದ ಎಲ್ಲ ವಿಭಾಗಗಳಿಗೆ ಮೇ 15 ಮತ್ತು 16ರಂದು ರಜೆ ನೀಡಲಾಗಿದೆ ಎಂದು ಹೇಳಿದರು.
ಇಂದು ತರಬೇತಿ: ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳ ಮತ್ತು ಚುನಾವಣಾ ಏಜೆಂಟರ ವಾಹನಗಳಿಗೆ ಅನುಮತಿ ಇರುವುದು. ಅಭ್ಯರ್ಥಿಗಳು ಮತ್ತು ಚುನಾವಣಾ ಏಜೆಂಟರು ಎಲ್ಲ ಮತ ಎಣಿಕೆ ಕೇಂದ್ರಗಳಿಗೆ ಭೇಟಿ ನೀಡಿ ಮತ ಎಣಿಕೆ ಪ್ರಕ್ರಿಯೆಯನ್ನು ವೀಕ್ಷಿಸಬಹುದು. ಮತ ಎಣಿಕೆ ಪ್ರಯುಕ್ತ ಕೌಂಟಿಂಗ್ ಸೂಪರ್ವೈಜರ್, ಕೌಂಟಿಂಗ್ ಅಸಿಸ್ಟೆಂಟ್ ಮತ್ತು ಮೈಕ್ರೋ ಅಬ್ಸರ್ವರ್ ಅವರಿಗೆ ಮೇ 14ರಂದು ಬೆ.11ಕ್ಕೆ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮತಎಣಿಕೆ ಪ್ರಕ್ರಿಯೆಯನ್ನು ಸುಗಮ ಹಾಗೂ ಶಾಂತಿಯುತವಾಗಿ ಕೈಗೊಳ್ಳಲು ಎಲ್ಲ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳ ಮುಖಂಡರು, ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಸಂಪೂರ್ಣ ಸಹಕಾರ ನೀಡಬೇಕೆಂದು ಕೋರಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಸಹಾಯಕ ಚುನಾವಣಾಧಿಕಾರಿ ಇಲಿಯಾಸ್ ಅಹ್ಮದ್, ಭೀಮಾಶಂಕರ್ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

