ಕುಡಿಯುವ ನೀರು, ಮೇವು ಗೋಶಾಲೆ ಒದಗಿಸದಿದ್ದರೆ ಪ್ರತಿಭಟನೆ
ಕ.ಪ್ರ.ವಾರ್ತೆ ಹಾಸನ ಏ. 3
ಭೀಕರ ಬರಗಾಲದ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರು, ಎರಡು ಗೋಶಾಲೆ ಹಾಗೂ ಮೇವನ್ನು ಒದಗಿಸುವಂತೆ ಜೆಡಿಎಲ್ಪಿ ನಾಯಕ ಎಚ್.ಡಿ.ರೇವಣ್ಣ ಒತ್ತಾಯಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಇಲ್ಲದೆ ರೈತರು ಕಂಗಾಲಾಗಿದ್ದು, ಜಾನುವಾರುಗಳು ಮೇವಿಲ್ಲದೆ ಸಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಬೇರೆ ಜಿಲ್ಲೆಗೆ ಸರ್ಕಾರ ಅನುದಾನ ನೀಡಿದೆ. ಆದರೆ ಹಾಸನ ಜಿಲ್ಲೆಗೆ ಮಾತ್ರ ಅನುದಾನ ಬಂದಿಲ್ಲ. ಕೂಡಲೇ ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಅವರು ಸಭೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜಿಲ್ಲೆಯಲ್ಲಿ ರೈತರು ಬೆಳೆದ ಆಲೂಗಡ್ಡೆ ಬೆಳೆಗೆ ಅಂಗಮಾರಿ ರೋಗ ತಗಲಿ ಬೆಳೆ ಸಂಪೂರ್ಣ ನಾಶವಾಗಿದ್ದು, ರೈತರು ಕೈಸುಟ್ಟು ಕೊಂಡಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಪ್ಯಾಕೇಜ್ ನೀಡುವುದಾಗಿ ಹೇಳಿ ವರ್ಷಗಳೇ ಕಳೆದರೂ ಇದುವರೆಗೂ ಪ್ಯಾಕೇಜ್ ಬಿಡುಗಡೆಯಾಗಿಲ್ಲ. ಸೂಕ್ತ ಪರಿಹಾರವಿಲ್ಲದೆ ರೈತರು ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಪ್ಯಾಕೇಜ್ರೂಪದಲ್ಲಿ ಹಣ ನೀಡುವ ಬದಲು ಗೊಬ್ಬರ ನೀಡುತ್ತಿದೆ ಎಂದು ಆರೋಪಿಸಿದರು.
ಜೊತೆಗೆ ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಬೇಕಾದ ಬಾಕಿ ಹಣ ಇದುವರೆಗೂ ಬಾರದ ಕಾರಣ ಈ ಯೋಜನೆಯಡಿ ಕೂಲಿ ಕೆಲಸಗಾರರಿಗೆ ಕೂಲಿ ನೀಡಲು ಸಾಧ್ಯವಾಗಿಲ್ಲ. ಕೂಡಲೇ ಹಣ ನೀಡಬೇಕು ಎಂದು ಒತ್ತಾಯಿಸಿದ ಅವರು, ಪ್ರಸ್ತುತ ನೀರು ನಿಲ್ಲಿಸಿರುವುದರಿಂದ ಬೇಸಿಗೆಯಲ್ಲಿ ರಾಗಿ ಬೆಳೆ ಬೆಳೆದುಕೊಳ್ಳಲು ಕಷ್ಟವಾಗಿದೆ. ನೀರಾವರಿ ಎಂಜಿನಿಯರ್ಗಳು ತಕ್ಷಣ ನೀರು ಬೀಡಬೇಕು. ಇಲ್ಲವಾದಲ್ಲಿ ಈ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಆಲೂಗಡ್ಡೆ ಪ್ಯಾಕೇಜ್
ಜಿಲ್ಲೆಯ ರೈತರು ಕಳೆದು ನಾಲ್ಕೈದು ವರ್ಷಗಳಿಂದ ಆಲೂಗಡ್ಡೆ ಬೆಳೆಯಿಂದ ಅನುಭವಿಸುತ್ತಿರುವ ನಷ್ಟದ ಬಗ್ಗೆ ಬಿಜೆಪಿ ಸರ್ಕಾರ ಸೂಕ್ತ ಪರಿಹಾರ ನೀಡಲಿಲ್ಲ. ಮುಂದೆ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನಾಡಿನ ಜಲ ನೆಲ ಮತ್ತು ಜನಕ್ಕಾಗಿ ಇರುವ ಪಕ್ಷ ಅಂದ್ರೆ ಅದು ಜೆಡಿಎಸ್ ಮಾತ್ರ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

