ಹಾಸನ

'ಆಶಾ ಕಾರ್ಯಕರ್ತೆಯರು ಮತದಾರರಲ್ಲಿ ಜಾಗೃತಿ ಮೂಡಿಸಲಿ'

Published On :

ಕ.ಪ್ರ. ವಾರ್ತೆ  ಹಾಸನ  ಏ 18
ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ಹಾಸನ ನಗರ ಸೇರಿದಂತೆ ಪಟ್ಟಣ ಪ್ರದೇಶ ವ್ಯಾಪ್ತಿಯಲ್ಲಿ ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮತದಾರರಲ್ಲಿ ಜಾಗೃತಿ ಮೂಡಿಸಲು ಸಹಕರಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಹಾಸನ ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಅಧ್ಯಕ್ಷ ಉಪೇಂದ್ರ ಪ್ರತಾಪ ಸಿಂಗ್ ಕರೆ ನೀಡಿದ್ದಾರೆ.
ಹಾಸನ ತಾಪಂ ಸಭಾಂಗಣ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತ್ಯೇಕವಾಗಿ ಏರ್ಪಡಿಸಿದ್ದ ಮತದಾರರ ಜಾಗೃತಿಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮತದಾನ ನಮ್ಮ ಹಕ್ಕು ಅದನ್ನು ಚಲಾಯಿಸಬೇಕು. ಸ್ವಯಂ ಪ್ರೇರಣೆಯಿಂದ ಪ್ರತಿಯೊಬ್ಬರು ಮತದಾನದಲ್ಲಿ ಪಾಲ್ಗೊಂಡಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳ್ಳಲು ಸಾಧ್ಯ. ಇದನ್ನು ಎಲ್ಲರೂ ಮನಗಾಣಬೇಕು.
ಸುಶಿಕ್ಷಿತರೂ ಮತದಾನದಲ್ಲಿ ಪಾಲ್ಗೊಂಡು ಚುನಾವಣಾ ವ್ಯವಸ್ಥೆಯನ್ನು ಸದೃಢಗೊಳಿಸಬೇಕು ಎಂದರು. ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿಯಿಂದ ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಆದರೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಜನಸಾಮಾನ್ಯರಿಗೆ ಅತ್ಯಂತ ಹತ್ತಿರದಲ್ಲಿದ್ದು ಪ್ರತಿ ಗ್ರಾಮ ಪ್ರತಿ ಮನೆಯ ಸಂಪರ್ಕ ಹೊಂದಿರುತ್ತಾರೆ.
ಎಲ್ಲರೂ ಪ್ರತಿಯೊಂದು ಮನೆ ಮನೆಗೂ ಭೇಟಿ ಮಾಡಿ ಮತದಾನದ ಮಹತ್ವದ ಬಗ್ಗೆ ತಿಳಿಸಿ ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು. ಇದು ಚುನಾವಣಾ ಆಯೋಗದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮ ಎಂದು ತಿಳಿಸಿದರು. ಜಿಪಂ ಉಪಕಾರ್ಯದರ್ಶಿ ಮಾತನಾಡಿ, ಮತದಾನ ಶ್ರೇಷ್ಠ ಕಾರ್ಯ. ಆಯೋಗ ಈ ಬಾರಿ ಮತ ಪಟ್ಟಿಯಲ್ಲಿರುವ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲು ಬಹುಮಾಧ್ಯಮ ಪ್ರಚಾರಾಂದೋಲನದ ಜೊತೆಗೆ ಹಳ್ಳಿ ಹಳ್ಳಿಗಳಲ್ಲಿರುವ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ತಮ್ಮ ಜವಾಬ್ದಾರಿ ಅರಿತು ಪ್ರತಿಯೊಬ್ಬರೂ ಕೆಲಸ ನಿರ್ವಹಿಸಿ ಯಾವುದೇ ಆಮಿಷಗಳಿಲ್ಲದೆ ಮತದಾನ ಮಾಡಲು ಪ್ರೇರೇಪಿಸಿ ಎಂದು ಹೇಳಿದರು.
ಜಿಪಂ ಸಹಾಯಕ ಯೋಜನಾಧಿಕಾರಿ ಜಯಶೀಲರೆಡ್ಡಿ, ಜಿಲ್ಲಾ ವಾರ್ತಾಧಿಕಾರಿ ವಿನೋದ್‌ಚಂದ್ರ, ಸಿಡಿಪಿಓ ಕೆ.ಸಿ. ದೇವರಾಜೇಗೌಡ, ತಾಪಂ ಸಹಾಯಕ ನಿರ್ದೇಶಕ ಧನಂಜಯ ಎನ್.ಎಸ್. ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.