ಡಕೋಟಾ ಬಸ್ ಸಂಚಾರಕ್ಕೆ ಆಕ್ರೋಶ
ಕ.ಪ್ರ.ವಾರ್ತೆ ಅರಸೀಕೆರೆ ಆ. 8
ಸಂಚರಿಸಲಾರದಷ್ಟು ದುಸ್ಥಿತಿಯಲ್ಲಿರುವ ಬಸ್ಗಳನ್ನು ಗ್ರಾಮಾಂತರ ಪ್ರದೇಶದಲ್ಲಿ ಓಡಿಸುವ ಮೂಲಕ ಜನರು ಹಾಗೂ ವಿದ್ಯಾರ್ಥಿಗಳ ಪ್ರಾಣದೊಂದಿಗೆ ಚೆಲ್ಲಾಟವಾಡುತ್ತಿರುವ ರಸ್ತೆ ಸಾರಿಗೆ ಸಂಸ್ಥೆ ನೀತಿ ಖಂಡಿಸಿ ಗುರುವಾರ ವಿದ್ಯಾರ್ಥಿಗಳು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಚಿಕ್ಕಮಗಳೂರು ವಿಭಾಗದ ಡಿಟಿಓ ಬಸವರಾಜು ಮತ್ತು ಉಪತಹಸೀಲ್ದಾರ್ ವೈ.ಪಿ. ಪಾಲಾಕ್ಷ ಅವರಿಗೆ ಮನವಿ ಸಲ್ಲಿಸಿದರು.
ಹೊಯ್ಸಳೇಶ್ವರ ಕಾಲೇಜಿನಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಸಾವಿರಾರು ವಿದ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿಯ ಮೂಲಕ ಸಾಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿ ಸಂಸ್ಥೆಯ ನೀತಿಯನ್ನು ಖಂಡಿಸಿ ಘೋಷಣೆ ಕೂಗಿದರು.
ಅಲ್ಲದೇ ಗ್ರಾಮಾಂತರ ಪ್ರದೇಶಗಳಿಗೆ ಪ್ರಯಾಣಕ್ಕೆ ಯೋಗ್ಯವಲ್ಲದ ಹಳೆಯ ಗುಜುರಿ ಬಸ್ಸುಗಳನ್ನು ಕಳುಹಿಸುತ್ತಿರುವುದನ್ನು ಖಂಡಿಸಿದ ಅವರು ಕೆಲ ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ಒದಗಿಸುವಲ್ಲಿ ಇಲಾಖೆ ವಿಫಲವಾಗಿದೆ ಎಂದು ದೂರಿದರು.
ಅನುಚಿತ ವರ್ತನೆ: ಚಾಲಕರು ಹಾಗೂ ನಿರ್ವಾಹಕರು ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಇರುವ ಬಸ್ಗಳನ್ನು ದುರಸ್ತಿಪಡಿಸಿ ಸಂಚಾರಕ್ಕೆ ಅನುವುಗೊಳಿಸುವ ಬದಲು ಹಳೆಯ ಬಸ್ಗಳನ್ನೇ ಅರಸೀಕೆರೆ ಡಿಪೋಗೆ ತರಲಾಗುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆಯ ಸುದ್ಧಿ ತಿಳಿದ ಚಿಕ್ಕಮಗಳೂರು ವಿಭಾಗದ ಸಂಚಾರ ನಿಯಂತ್ರಕ ಅಧಿಕಾರಿ ಬಸವರಾಜು ಸ್ಥಳಕ್ಕೆ ಆಗಮಿಸಿ ಎಬಿವಿಪಿ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಯಾವುದೇ ಕಾರಣಕ್ಕೂ ಅನ್ಯ ಡಿಪೋಗಳಿಂದ ಹಳೆಯ ಬಸ್ಗಳನ್ನು ಪಡೆಯುವ ಪ್ರಶ್ನೆಯೇ ಇಲ್ಲ. ಗ್ರಾಮಾಂತರ ಪ್ರದೇಶಗಳಿಗೆ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಲಾಗುವುದೆಂದು ಭರವಸೆ ನೀಡಿದರು.
ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸುವ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಸಮಸ್ಯೆಗೆ ಸಂಬಂಧಿಸಿದಂತೆ ಕ್ಷೇತ್ರದ ಜನಪ್ರತಿನಿಧಿಗಳು, ಪ್ರಗತಿಪರ ಸಂಘಟನೆಗಳ ಮುಖಂಡರು, ವಿದ್ಯಾರ್ಥಿ ಮುಖಂಡರನ್ನು ಆಹ್ವಾನಿಸಿ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಿಳಿಸಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಬೇಡಿಕೆಗಳ ಮನವಿ ಪತ್ರ: ಇದೇ ವೇಳೆ ಭಾರತದ ಗಡಿಭಾಗದಲ್ಲಿ ಸೈನಿಕರ ಮೇಲೆ ಗುಂಡು ಹಾರಿಸಿ ಹತ್ಯೆಗೈದಿರುವ ದ್ರೋಹಿಗಳಿಗೆ ಶಿಕ್ಷೆ ನೀಡಬೇಕು, ತಾಲೂಕನ್ನು ಬರಪೀಡಿತ ಪಟ್ಟಿಯಲ್ಲಿ ಸೇರಿಸಬೇಕು, ರಸ್ತೆ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವುದು, ಡಿಪ್ಲೋಮಾ ಕಾಲೇಜು ಆರಂಭಕ್ಕೆ ಒತ್ತಾಯ ಸೇರಿದಂತೆ ನಾನಾ ಬೇಡಿಕೆಗಳ ಮನವಿ ಪತ್ರವನ್ನು ಉಪತಹಸೀಲ್ದಾರ್ ವೈ.ಪಿ.ಪಾಲಾಕ್ಷ ಅವರಿಗೆ ಸಲ್ಲಿಸಿದರು.
ಪ್ರತಿಭಟನೆಯ ನೇತೃತ್ವವನ್ನು ತಾಲೂಕು ಪ್ರಮುಖ ಪೂಲ್ಚಂದ್, ಗಿರೀಶ್, ಪ್ರದೀಪ್, ನಿರಂಜನ್, ಪವನ್, ಮೇಘನಾ, ತ್ರಿವೇಣಿ, ಜಿಲ್ಲಾ ಸಂಚಾಲಕ ಕಣಕಟ್ಟೆ ಮಂಜು ಇನ್ನಿತರರು ವಹಿಸಿ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

