ಹಾಸನ

ಹೋಬಳಿ ಕೇಂದ್ರಗಳಲ್ಲೂ ನಾನಾ ಶಿಕ್ಷಣ ಕೋರ್ಸ್: ರೇವಣ್ಣ ಆಗ್ರಹ

Published On :

ಕ.ಪ್ರ.ವಾರ್ತೆ , ಹೊಳೆನರಸೀಪುರ , ಆ.20
ಸರ್ಕಾರಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವಂತೆ ತಾಲೂಕು ಹಾಗೂ ಹೋಬಳಿ ಕೇಂದ್ರಗಳಲ್ಲೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಂತಹ ವಿವಿಧ ಶಿಕ್ಷಣ ಕೋರ್ಸ್‌ಗಳನ್ನು ಆರಂಭಿಸುವಂತೆ ಶಾಸಕ  ಎಚ್.ಡಿ.ರೇವಣ್ಣ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್‌ಎಸ್, ಎನ್‌ಸಿಸಿ ಮತ್ತು ಪರಂಪರಾಕೂಟದ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲ ಮಕ್ಕಳಿಗೂ ಸಮಾನ ಶಿಕ್ಷಣ ದೊರೆಯುವ ನಿಟ್ಟಿನಲ್ಲಿ ಗ್ರಾಮೀಣ ಹಾಗೂ ಹೊರ ಊರುಗಳಿಂದ ಬರುವ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್‌ಗಳಲ್ಲಿ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸಿ, ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ಮೂಲಕ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸುವ ಕುರಿತಂತೆ ಸರ್ಕಾರ ಚಿಂತನೆ ನಡೆಸುವಂತೆ ಅವರು ಒತ್ತಾಯಿಸಿದರು.
ಶೈಕ್ಷಣಿಕ ಕ್ಷೇತ್ರದಲ್ಲಿ ಹಾಸನ ಜಿಲ್ಲೆ ಹಾಗೂ ತಾಲೂಕಿನಲ್ಲಿ ತಮ್ಮ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಕ್ರಾಂತಿಕಾರಿ ಬದಲಾವಣೆಗಳನ್ನು ತರುವಲ್ಲಿ ತಾವು ಯಶಸ್ವಿಯಾಗಿದ್ದು, ಈ ಮೂಲಕ ಗ್ರಾಮೀಣ ವಿದ್ಯಾರ್ಥ್ಥಿಗಳಿಗೂ ನಗರ ಪ್ರದೇಶ ವಿದ್ಯಾರ್ಥಿಗಳಷ್ಟೇ ಸಮಾನ ಶಿಕ್ಷಣ ದೊರಕುವ ನಿಟ್ಟಿನಲ್ಲಿ ಯಶಸ್ಸು ಸಾಧಿಸಿರುವುದಾಗಿ  ಹೇಳಿದರು.
ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಸರ್ಕಾರಿ ಕಾನೂನು ಕಾಲೇಜು ಹಾಗೂ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹೆಚ್ಚುವರಿ ಕೊಠಡಿಗಳು ಇನ್ನು ಆರು ತಿಂಗಳುಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಕಾಲೇಜು ಕ್ಷೇಮಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಟಿ.ಮಲ್ಲೇಶ್ ಮಾತನಾಡಿದರು. ಪುರಸಭೆ ಸದಸ್ಯ ಹಾಗೂ ಸಿಡಿಸಿ ಸದಸ್ಯ ಎ.ಆರ್.ರವಿಕುಮಾರ್ ಮಾತನಾಡಿ, ಪ್ರಗತಿ ಸಾಧಿಸುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಬಳಗ ಅಧ್ಯಕ್ಷ ಎಂ.ಎನ್.ಜೈಪ್ರಕಾಶ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಇತರೆ ವಿಷಯಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡದೆ ಶಿಕ್ಷಣ ಪಡೆಯುವತ್ತ ಹೆಚ್ಚಿನ ಪ್ರಾಮುಖ್ಯತೆ ನೀಡಿ ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.
ಕಾಲೇಜಿನ ಆಂಗ್ಲ ವಿಭಾಗದ ಮುಖ್ಯಸ್ಥರಾದ ಪ್ರೊ. ನಯನತಾರಾಮಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಆಲೂರು ನಾಗರಾಜ್ ಅವರಿಂದ ವಿಶೇಷ ಹಾಸ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ.ಬಿ.ಇರ್ಷಾದ್ ಅಧ್ಯಕ್ಷತೆ ವಹಿಸಿದ್ದರು. ಸಾಂಸ್ಕೃತಿಕ ಸಮಿತಿ ಸಂಚಾಲಕಿ ಸಹಾಯಕ ಪ್ರಾಧ್ಯಾಪಕಿ ಪಿ.ಆರ್.ಶಾಂತ ಸ್ವಾಗತಿಸಿದರು. ಮಧು ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಕಿರಣ್‌ರಾವತ್, ಎನ್‌ಎಸ್‌ಎಸ್ ಅಧಿಕಾರಿ ಮಧುಸೂದನ್, ಎನ್‌ಸಿಸಿ ಅಧಿಕಾರಿ ಎನ್.ವಿ.ಶ್ರೀನಿವಾಸ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.