ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ...
ಕನ್ನಡಪ್ರಭ ವಾರ್ತೆ ಹಾಸನ ಆ. 24
ಮುಂಬೈನ ಪತ್ರಿಕೆಯೊಂದರ ಛಾಯಾಗ್ರಾಹಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ನಗರದಲ್ಲಿ ಶನಿವಾರ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಅನ್ಬುಕುಮಾರ್ಗೆ ಮನವಿ ನೀಡಿದರು.
ಎಸ್ಎಫ್ಐ ನೇತೃತ್ವ: ಪತ್ರಕರ್ತೆಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಭಾರಿ ಪ್ರತಿಭಟನೆ ನಡೆಸಿದರು. ನಗರದ ಹೇಮಾವತಿ ಪ್ರತಿಮೆಯಿಂದ ಪ್ರತಿಭಟನಾಕಾರರು ಮೆರವಣಿಗೆ ಪ್ರಾರಂಭಿಸಿ ಎನ್.ಆರ್.ವೃತ್ತ, ಬಿ.ಎಂ.ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದು ಕೆಲ ಸಮಯ ಧರಣಿ ನಡೆಸಿದರು. ನಂತರ ಜಿಲ್ಲಾಧಿಕಾರಿಗೆ ಮನವಿ ನೀಡಿ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಯನ್ನು ವಿಧಿಸುವಂತೆ ಒತ್ತಾಯಿಸಿ ಮನವಿ ನೀಡಿದರು.
ದೇಶದ ಮುಖ್ಯ ವಾಣಿಜ್ಯ ನಗರಿ ಮುಂಬೈನ ಪತ್ರಿಕೆಯೊಂದರ ಮಹಿಳಾ ಛಾಯಾಗ್ರಾಹಕಿ ಮೇಲಿನ ಸಾಮೂಹಿಕ ಅತ್ಯಾಚಾರ ಖಂಡನೀಯವಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು. ದೇಶದಲ್ಲಿ ಯಾವುದೇ ವಿಭಾಗದಲ್ಲಿ ಕೆಲಸ ಮಾಡುವ ಮಹಿಳೆಯರು ಮತ್ತು ಮಹಿಳಾ ಉದ್ಯೋಗಿಗಳಿಗೆ ಭತ್ರದೆ ಇಲ್ಲದೆ ಇರುವುದು ಇಂತಹ ಘಟನೆಗಳು ಹೆಚ್ಚಾಗಲು ಕಾರಣವಾಗಿದೆ ಎಂದು ಆರೋಪಿಸಿದರು. ಮಹಿಳೆಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ದೆಹಲಿಯಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಇಡೀ ಜಗತ್ತಿನಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಈ ಘಟನೆ ಮಾಸುವ ಮುನ್ನವೇ ಅಂಥದ್ದೇ ಮತ್ತೊಂದು ಘಟನೆ ನಡೆದಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಪತ್ರಕರ್ತರ ಮೇಲಿನ ದೌರ್ಜನ್ಯ ಹಾಗೂ ಬೆದರಿಕೆ ಕೂಡ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಪತ್ರಕರ್ತರು ನಿರ್ಭಯವಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರ್ಕಾರ ಕಠಿಣ ಕಾನೂನು ರಚಿಸಿ ಪತ್ರಕರ್ತರಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು. ಅತ್ಯಾಚಾರಕ್ಕೆ ಒಳಗಾದ ಪತ್ರಕರ್ತೆಗೆ ಕಾನೂನಿನ ರಕ್ಷಣೆ ನೀಡಬೇಕು ಹಾಗೂ ಅಪರಾಧಿಗಳನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಪೃಥ್ವಿ, ಸಹ ಕಾರ್ಯದರ್ಶಿ ಪ್ರದೀಪ್, ವಿದ್ಯಾರ್ಥಿನಿಯರ ಉಪಸಮಿತಿ ಸಂಚಾಲಕ ಗೌತಮಿ, ಸದಸ್ಯರಾದ ಲಾವಣ್ಯ, ಪವಿತ್ರ, ಸಿತಾರಾ, ಜಿಲ್ಲಾ ಕಾರ್ಯದರ್ಶಿ ಕೆ.ಎಸ್.ಮಂಜುನಾಥ್, ಸಂತೋಷ್, ಪ್ರವೀಣಕುಮಾರ್, ಸಂದೇಶ್ ಇತರರು ಇದ್ದರು.
ಪತ್ರಕರ್ತರ ಮೌನ ಮೆರವಣಿಗೆ: ಪತ್ರಕರ್ತೆ ಮೇಲಿನ ಅತ್ಯಾಚಾರ ಪ್ರಕರಣ ಖಂಡಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ಮೌನ ಪ್ರತಿಭಟನೆ ನಡೆಸಲಾಯಿತು. ನಗರ ಪತ್ರಕರ್ತರ ಸಂಘದಿಂದ ಮೌನ ಪ್ರತಿಭಟನೆ ಪ್ರಾರಂಭಿಸಿದ ಪತ್ರಕರ್ತರು, ಜಿಲ್ಲಾಧಿಕಾರಿ ಕಚೇರಿಗೆ ಬಂದು ಜಿಲ್ಲಾಧಿಕಾರಿ ಅನ್ಬುಕುರಮಾರ್ ಅವರಿಗೆ ಮನವಿ ನೀಡಿ, ಅತ್ಯಾಚಾರ ಎಸಗಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.
ಮಹಿಳೆಯರು ಹಾಗೂ ಪತ್ರಕರ್ತೆಯರಿಗೆ ಸಮಾಜದಲ್ಲಿ ಸೂಕ್ತ ರಕ್ಷಣೆ ಇಲ್ಲವಾಗಿದೆ. ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಹಿಳೆಯರು ಮನೆಯಿಂದ ಹೊರಗಡೆ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸೂಕ್ತ ಭದ್ರತೆ ಇಲ್ಲವಾಗಿದ್ದು, ಇದರಿಂದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರಗಳು, ಲೈಂಗಿಕ ದೌರ್ಜನ್ಯಗಳು ಎಚ್ಚಾಗುತ್ತಿದೆ ಎಂದು ದೂರಿದರು. ಈ ಹಿನ್ನೆಲೆಯಲ್ಲಿ ಸರ್ಕಾರಗಳು ಕೂಡಲೇ ಇದರ ವಿರುದ್ಧ ಕಠಿಣ ಕಾನೂನು ರಚಿಸಿ ಮಹಿಳೆಯರಿಗೆ ಸೂಕ್ತ ಭದ್ರತೆ ಹಾಗೂ ರಕ್ಷಣೆ ಒದಗಿಸುವಂತೆ ಪತ್ರಕರ್ತ ಸಮೂಹ ಒತ್ತಾಯಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

