ಹಾಸನ

ಸಿಎಂ ನಿವಾಸದ ಬಳಿ ಪ್ರತಿಭಟನೆ ಇಂದು

Published On :

ಕ.ಪ್ರ.ವಾರ್ತೆ ಹಾಸನ ಆ. 24
ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ಹಿಂತೆಗೆದು ಕೊಂಡಿರುವುದನ್ನು ಖಂಡಿಸಿ ಆ.25ರಂದು ಮುಖ್ಯಮಂತ್ರಿ ಮನೆ ಮುಂದೆ ನಾನಾ ಹಿಂದು ಸಂಘಟನೆಗಳ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯ ಕಾರ್ಯಾಧ್ಯಕ್ಷ ಪ್ರಣವಾನಂದ ರಾಮಸ್ವಾಮೀಜಿ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ವಾಪಸ್ ಪಡೆದಿರುವ ಹಿಂದೂ ವಿರೋಧಿ ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರವನ್ನು ವಿಸರ್ಜಿಸಬೇಕು. ಹಿಂದುತ್ವ ವಿಧಾನಗಳನ್ನು ಕೆಡಿಸಿ ಅನ್ಯಧರ್ಮಿಯರ ಮತವನ್ನು ಸೆಳೆಯುವ ದೃಷ್ಟಿಯಿಂದ ಕಾಂಗ್ರೆಸ್‌ನವರು ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ತೆಗೆದು ಹಾಕುವ ಮೂಲಕ ರಾಜ್ಯದಲ್ಲಿ ಮತ್ತೆ ಗೋ ಹತ್ಯೆಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದರು.
ದೇಶವಿರೋಧಿಗಳಿಗೆ ಪರೋಕ್ಷವಾಗಿ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಇದರಿಂದ ದೇಶದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿ, ಜನರ ನೆಮ್ಮದಿಗೆ ಭಂಗ ಉುಂಟಾಗಿದೆ ಎಂದು ದೂರಿದರು.
ಜೈಲಿನಲ್ಲಿ ಭಯೋತ್ಪಾದಕರಿಗೆ ಬೇಕಾದ ಸವಲತ್ತು ನೀಡುವ ಮೂಲಕ ದೇಶ ವಿರೋಧಿ ಚಟುವಟಿಕೆ ನಡೆಸಲು ಕಾಂಗ್ರೆಸ್‌ನವರು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನು ತೀವ್ರವಾಗಿ ಖಂಡಿಸಿ ಆ.25ರಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದ ಮುಂದೆ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಯುವಕರಿಗೆ ಖಡ್ಗ ದೀಕ್ಷೆ:  ದೇಶದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ, ದೇಶ ವಿರೋಧಿ ಕೃತ್ಯಗಳು, ಹಿಂಸಾಚಾರದಂತಹ ಪ್ರಕರಣಗಳನ್ನು ತಡೆಗಟ್ಟಲು ಪ್ರತಿ ಜಿಲ್ಲೆಯಲ್ಲಿ ಯುವಕರಿಗೆ ಖಡ್ಗ ದೀಕ್ಷೆಯನ್ನು ನೀಡಲಾಗುತ್ತದೆ. ಇದನ್ನು ಸಹಕರಿಸುವಂತೆ ಮನವಿ ಮಾಡಿದರು.
ಸೆ.28ಕ್ಕೆ ರಾಜ್ಯಮಟ್ಟದ ಕಾರ್ಯಕ್ರಮ: ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸೆ.28ರಂದು ರಾಣಿಬೆನ್ನೂರಿನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಹಾಗೂ ಹಾಸನ ಜಿಲ್ಲೆಯಲ್ಲಿ ಅಕ್ಟೋಬರ್ ಮೊದಲ ವಾರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಎಂಪಿ ಚುನಾವಣೆಗೆ ಸ್ವಾಮೀಜಿ: ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದ 12 ಕ್ಷೇತ್ರಗಳಲ್ಲಿ ಹಿಂದೂ ಮಹಾಸಭಾದಿಂದ ನಾನಾ ಸ್ವಾಮೀಜಿಗಳು ಸ್ಪರ್ಧಿಸಲಿದ್ದಾರೆ. ಮಂಗಳೂರು ಕ್ಷೇತ್ರದಲ್ಲಿ ತಾವು ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ಪ್ರಣವಾನಂದ ರಾಮಸ್ವಾಮೀಜಿ ತಿಳಿಸಿ, ಹಾಸನ ಲೋಕಸಭಾ ಕ್ಷೇತ್ರದಲ್ಲಿಯೂ   ಸ್ವಾಮೀಜಿಯೊಬ್ಬರನ್ನು ಕಣಕ್ಕೆ ಇಳಿಸಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಸವರಾಜ ಸ್ವಾಮೀಜಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.