ಸಮಗ್ರ ಅಭಿವೃದ್ಧಿಗೆ ಜಿಲ್ಲಾ ಯೋಜನಾ ಸಮಿತಿ ಸಭೆ ತೀರ್ಮಾನ
ಕ.ಪ್ರ. ವಾರ್ತ್ಣೆ ಹಾಸನ , ಆ. 25
ಜಿಲ್ಲೆಯ ಸಮಗ್ರ ಅಭಿವೃದ್ಧಿ ಗಮನದಲ್ಲಿರಿಸಿಕೊಂಡು ಪೂರಕ ಯೋಜನೆಗಳನ್ನು ರೂಪಿಸಿ ಅನುಮೋದನೆ ಹಾಗೂ ಅನುದಾನ ಪಡೆದು ಅನುಷ್ಠಾನಗೊಳಿಸಲು ಜಿಲ್ಲಾ ಯೋಜನಾ ಸಮಿತಿ ಸಭೆ ತೀರ್ಮಾನಿಸಿದೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಅಂಬಿಕಾ ರಾಮಣ್ಣ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಜಿಲ್ಲಾ ಯೋಜನಾ ಸಮಿತಿ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಆದ್ಯತೆಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಯಿತು.
ಪ್ರಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ಅವರು ಮಾತನಾಡಿ, ಅಭಿವೃದ್ಧಿ ದೃಷ್ಟಿಯಲ್ಲಿ ಯೋಜನೆಗಳನ್ನು ರೂಪಿಸುವ ಮೂಲಕ ಗ್ರಾಮೀಣ ಹಂತದಿಂದ ನಗರ ಪ್ರದೇಶಗಳವರೆಗಿನ ಪ್ರಗತಿಯ ದಿಕ್ಕನ್ನು ನಿರ್ಧರಿಸುವ ನಿಟ್ಟಿನಲ್ಲಿ ಜಿಲ್ಲಾ ಯೋಜನಾ ಸಮಿತಿಯ ಜವಾಬ್ದಾರಿ ಮಹತ್ವದ್ದಾಗಿದೆ. ಸಮಿತಿ ಸಭೆ ಇನ್ನು ಮುಂದೆ ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ನಡೆಯಬೇಕು ಎಂದರು.
ಅರಸೀಕೆರೆ ತಾಲೂಕಿನ ಕೆಲ ಗೊಲ್ಲರ ಹಟ್ಟಿ ಗ್ರಾಮಗಳಲ್ಲಿ ಸಂಪ್ರದಾಯದ ಹೆಸರಿನಲ್ಲಿ ಮುಟ್ಟು ಮತ್ತು ಹೆರಿಗೆ ಸಂದರ್ಭ ಹೆಣ್ಣು ಮಕ್ಕಳು, ಮಹಿಳೆಯರನ್ನು ಗ್ರಾಮದಿಂದ ಹೊರಗಿಡುವ ಪರಿಸ್ಥಿತಿ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚಿದಾನಂದ್ ಅವರು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಪಟೇಲ್ ಶಿವರಾಂ ಇದರ ತಡೆಗೆ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.
ಹಾಸನ ನಗರ ಹಾಗೂ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು, ಮೂಲ ಸೌಕರ್ಯಗಳನ್ನು ಸರಿಯಾಗಿ ಯೋಜಿಸಿ ರೋಪಿಸಿ ಕಾರ್ಯರೂಪಕ್ಕೆ ತರಬೇಕು ಎಂದರು. ಜಿಲ್ಲೆಯಲ್ಲಿ ಆಲೂಗೆಡ್ಡೆ ಬೆಳೆಗಾರರು ಕಳೆದ ಹಲವು ವರ್ಷಗಳಿಂದ ನಷ್ಟ ಅನುಭವಿಸುತ್ತಿದ್ದಾರೆ. ಜಿಲ್ಲೆಯಲ್ಲಿಯೇ ಆಲೂ ಬಿತ್ತನೆ ಬೀಜ ತಯಾರಿಕೆ ಮತ್ತು ಸಂಶೋದನಾ ಕೇಂದ್ರ ಸ್ಥಾಪನೆಯಾಗಬೇಕು. ಹಿಂದೆ ಎರಡು ಬಾರಿ ಸ್ಥಳ ಪರಿಶೀಲನೆ ನಡೆದಿತ್ತು. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು ಎಂದು ಹೇಳಿದರು.
ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಶಕೀಲ್ ಅಹಮದ್ ಮಾತನಾಡಿ, ಸದ್ಯದಲ್ಲೇ ತೋಟಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆಯಾಗಲಿದ್ದು, ಅದರ ಶಾಖೆ ಜಿಲ್ಲೆಯಲ್ಲಿ ಪ್ರಾರಂಭವಾಗಲಿದೆ. ಆಗ ಆಲೂಗೆಡ್ಡೆ ಬಗ್ಗೆ ಹೆಚ್ಚಿನ ಸಂಶೋಧನೆ ಸಾಧ್ಯವಾಗುತ್ತದೆ ಎಂದರು.
ಬರ ಪೀಡಿತ ಪ್ರದೇಶ ಘೋಷಣೆಗೆ ಆಗ್ರಹ: ಜಿಲ್ಲೆಯ ಅರಸೀಕೆರೆ ಮತ್ತು ಚನ್ನರಾಯಪಟ್ಟಣ ತಾಲೂಕುಗಳಲ್ಲಿ ಮಳೆಯ ಅಭಾವವಿದ್ದು ಸಂಪೂರ್ಣ ಬರ ಪೀಡಿತ ಪ್ರದೇಶಗಳೆಂದು ಘೋಷಿಸಬೇಕು. ಅದಕ್ಕೆ ಸೂಕ್ತ ಪ್ರಸ್ತಾವ ಸಲ್ಲಿಸುವಂತೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾದ ಅಂಬಿಕಾ ರಾಮಣ್ಣ, ಉಪಾಧ್ಯಕ್ಷರಾದ ಬಿಳಿ ಚೌಡಯ್ಯ, ಸದಸ್ಯರಾದ ಕೃಷ್ಣಾನಾಯಕ, ಎಂ.ವಿ ಹೇಮಾವತಿ, ಮತ್ತಿತರರು ಒತ್ತಾಯಿಸಿದರು. ಜಂಟಿ ಕೃಷಿ ನಿರ್ದೇಶಕ ಶಿವರಾಜ್ ಮಾತನಾಡಿ, ಜಾವಗಲ್ ಮತ್ತು ಹಳೇಬೀಡು ಹೋಬಳಿಗಳಲ್ಲಿ ತೀವ್ರ ಮಳೆ ಕೊರತೆ ಎದುರಾಗಿದೆ. ಚನ್ನರಾಯಪಟ್ಟಣ ತಾಲೂಕಿನಲ್ಲಿ ಅಂತಹ ಪರಿಸ್ಥಿತಿ ಇಲ್ಲ. ವಾಡಿಕೆ ಮಳೆಗಿಂತ ಶೇ.20 ಕ್ಕಿಂತ ಅಧಿಕ ಪ್ರಮಾಣದ ಕೊರತೆ ಹಾಗೂ ತೇವಾಂಶ ಕೊರತೆ ಇದ್ದಲ್ಲಿ ಮಾತ್ರ ಬರ ಎಂದು ಘೋಷಿಸಲಾಗುತ್ತದೆ ಎಂದರು. ವಿಧಾನ ಪರಿಷತ್ ಸದಸ್ಯರಾದ ಪಟೇಲ್ ಶಿವರಾಂ ಹಾಗೂ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಸ್ವಾಮಿಗೌಡ ಅವರು ಸತ್ಯಮಂಗಲ ಸೇರಿದಂತೆ ಹಾಸನ ನಗರಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ನಗರಸಭೆ ವ್ಯಾಪ್ತಿಗೆ ಸೇರಿಸಬೇಕೆಂದುರು.
ಇದಕ್ಕೆ ಉತ್ತರಿಸಿದ ನಗರಸಭೆ ಅಧಿಕಾರಿ ನಾಗೇಂದ್ರ ಅವರು ಈಗಾಗಲೇ ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸೇರ್ಪಡೆಗೊಳ್ಳದ ಅಕ್ಕಪಕ್ಕದ ಪ್ರದೇಶಗಳನ್ನು ಪುನರ್ ಪರಿಶೀಲಿಸಿ ಪ್ರಸ್ತಾವ ಸಲ್ಲಿಸುವಂತೆ ವಾಪಸ್ ಕಳುಹಿಸಲಾಗಿದ್ದು, ಅದಕ್ಕೆ ಕ್ರಮವಹಿಸಲಾಗುತ್ತಿದೆ ಎಂದರು.
ಸದಸ್ಯರಾದ ನಂಜುಂಡಸ್ವಾಮಿ ಘನತ್ಯಾಜ್ಯಗಳನ್ನು ಬಳಸಿ 20 ಎಚ್.ಪಿ.ಮೋಟಾರ್ ಯಂತ್ರದ ಸಹಾಯದಿಂದ ಗೊಬ್ಬರ ತಯಾರಿಸುವ ಘಟಕಗಳನ್ನು ಸ್ಥಾಪಿಸಲು ಪ್ರಾಯೋಗಿಕವಾಗಿ ತಾಲೂಕಿಗೆ ಒಂದರಂತೆ 8 ಗ್ರಾಮಗಳನ್ನು ಆಯ್ಕೆ ಮಾಡುವಂತೆ ಒತ್ತಾಯಿಸಿದರು.
ಜಿಲ್ಲೆಯಲ್ಲಿ ವೈದ್ಯಕೀಯ ಎಂಜಿನಿಯರಿಂಗ್ ಹಾಗೂ ನರ್ಸಿಂಗ್ ಕಾಲೇಜುಗಳಿಗೆ ಮೂರು ಪ್ರತ್ಯೇಕ 100 ವಿದ್ಯಾರ್ಥಿಗಳ ಹಾಸ್ಟೆಲ್ ಮಂಜೂರಾಗಿದ್ದು ಅನುಷ್ಠಾನ ಕಾರ್ಯ ಪ್ರಗತಿಯಲ್ಲಿದೆ ಎಂದು ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಗದೀಶ್ಕುಮರ್ ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸದಸ್ಯರಾದ ದೇವೇಗೌಡ (ಪಾಪಣಿ)ಅವರು ಕೇವಲ 100 ಸೀಟುಗಳ ಹಾಸ್ಟೆಲ್ಗಳನ್ನು ತೆರೆಯುವುದರಿಂದ ಗ್ರಾಮೀಣ ಪ್ರದೇಶದ ಹೆಚ್ಚಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲಾರದು. ಇದರ ಪ್ರಮಾಣ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಬೇಕೆಂದರು. ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವಶಂಕರ್ ಕುಂಟೆ, ಸದಸ್ಯರು ನಾನಾ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಇದ್ದರು.
ಸಭೆಯಲ್ಲಿ ಬೆಂಗಳೂರಿನ ಇಂಟರ್ಪೇಸ್ ಇಂಡಿಯಾ ಡೆವಲಂಪ್ಮೆಂಟ್ ಕನ್ಸಲ್ಟೆಂಟ್ ಸಂಸ್ಥೆಯ ನಿರ್ದೇಶಕರಾದ ಡಾ. ಕೀರ್ತಿ ಶೇಖರ್, ಯಾವ ಯಾವ ಮಾನದಂಡಗಳನ್ನು ಇಟ್ಟುಕೊಂಡು ಜಿಲ್ಲಾ ಅಭಿವೃದ್ಧಿ ಯೋಜನೆಗಳನ್ನು ರೂಪಿಸಬೇಕು ಅಭಿವೃದ್ಧಿಯ ಮಾನದಂಡಗಳೇನು ಎಂಬುದನ್ನು ಪವರ್ ಪಾಯಿಂಟ್ ಪ್ರೆಸೆಂಟೇಷನ್ ಮೂಲಕ ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

