ಅಂಗವಿಕಲರಿಗೆ ಸೌಲಭ್ಯ ಒದಗಿಸಬೇಕು
ಕ.ಪ್ರ.ವಾರ್ತೆ ಹಾಸನ ಡಿ 3
ದೇಶದ ಜನಸಂಖ್ಯೆಯಲ್ಲಿ ಶೇ.10 ರಷ್ಟು ಮಂದಿ ಅಂಗವೈಕಲ್ಯತೆ ಹೊಂದಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂತವರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಪ್ಯಾರಾಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಎಚ್.ಎನ್. ಗಿರೀಶ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರಿ ಕಲಾ ಕಾಲೇಜು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಗ ವೈಕಲ್ಯವನ್ನು ಶಾಪವೆಂದು ಪರಿಗಣಿಸದೇ ದಿಟ್ಟತನದಿಂದ ಮುನ್ನಡೆಯಬೇಕು, ಅಂಗವೈಕಲ್ಯ ಎಂಬುವುದು ದೇವರು ನೀಡಿರುವ ವರವೆಂದು ಭಾವಿಸಬೇಕು ಎಂದರು.
ಅಂಗವಿಕಲರು ದೈಹಿಕವಾಗಿ ಮಾತ್ರ ಇತರರಿಗಿಂತ ಭಿನ್ನವಾಗಿದ್ದು, ಮಾನಸಿಕವಾಗಿ ಎಲ್ಲರಂತೆ ಸದೃಢರಾಗಿ ಸಾಧನೆ ಮಾಡಬೇಕು. ಮನುಷ್ಯನಿಗೆ ಯಾವುದಾದರೂ ಒಂದು ನ್ಯೂನತೆ ಇದ್ದಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ. ಈ ನಿಟ್ಟಿನಲ್ಲಿ ಅಂಗವಿಕಲರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕು. ರಾಜ್ಯ ಸರ್ಕಾರ ಅಂಗವಿಕಲರಿಗೆ ಉದ್ಯೋಗ ರಂಗದಲ್ಲಿ ನೀಡಿರುವ ವಿಶೇಷ ಸ್ಥಾನಮಾನ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಹಾಗಾಗಿ ಯೋಜನೆಗಳು ಸಮರ್ಪಕವಾಗಿ ಬಳಕೆಯಾದಲ್ಲಿ ಮಾತ್ರ ಅಂಗವಿಕಲರು ಅಭಿವೃದ್ಧಿ ಕಾಣಲು ಸಾಧ್ಯ ಎಂದು ಹೇಳಿದರು.
ಕ್ರೀಡಾ ಕ್ಷೇತ್ರದಲ್ಲಿ ಅಂಗವಿಕಲರು ಹೆಚ್ಚು ಆಸಕ್ತಿ ತೋರುತ್ತಿದ್ದು, ಅವರಿಗೆ ಬೇಕಾಗುವ ಸೌಲಭ್ಯಗಳನ್ನು ಸರ್ಕಾರ ನೀಡಬೇಕಾದ ಅವಶ್ಯಕತೆ ಇದೆ. ಸರ್ಕಾರ ನೀಡಿರುವಂತಹ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸರಿಯಾಗಿ ಲಭ್ಯವಾಗುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.
ಅಂಗವಿಕಲರ ದಿನಾಚರಣೆ ಅಂಗವಾಗಿ ಅಂಗವಿಕಲ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅಲ್ಲದೇ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅಂಗವಿಕಲ ಕ್ರೀಡಾಪಟುಗಳನ್ನು ಸನ್ಮಾನ ಮಾಡಲಾಯಿತು. ಆರ್ಥಿಕವಾಗಿ ಹಿಂದುಳಿದ ಅಂಗವಿಕಲರಿಗೆ ಗಾಲಿ ಕುರ್ಚಿಗಳನ್ನು ಇದೇ ಸಂದರ್ಭದಲ್ಲಿ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶಿವಾನಂದ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಎ.ಟಿ. ಮಲ್ಲೇಶ್, ಅಂಗವಿಕಲರಾದ ಗೋಪಾಲಾಚಾರ್, ಚಂದ್ರೇಗೌಡ, ಮುತ್ತಯ್ಯ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

