ಹಾಸನ

'ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಕೊಳ್ಳಿ'

Published On :

ಕ.ಪ್ರ.ವಾರ್ತೆ   ಹೊಳೆನರಸೀಪುರ   ಡಿ.3
ಕೇವಲ ಅಂಕಗಳನ್ನು ಗಳಿಸುವುದಷ್ಟೇ ವಿದ್ಯಾರ್ಥಿಗಳ ಗುರಿಯಾಗದೇ, ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ತೊಡಗಿಸಿಕೊಂಡು ತಮ್ಮ ಪ್ರತಿಭೆಯನ್ನು ಹೊರಹೊಮ್ಮಿಸುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆಯಾಗಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಶಿವಮಾದಪ್ಪ ಕಿವಿಮಾತು ಹೇಳಿದರು.
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ತಾಲೂಕು ಘಟಕ ಪಟ್ಟಣದ ಕೋಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ  ಹಮ್ಮಿಕೊಳ್ಳಲಾಗಿದ್ದ ಮಕ್ಕಳ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ ಆಚರಣಾ ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾಗಿದ್ದು, ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತೆಗೆಯುವ ಹಾಗೂ ಮಕ್ಕಳ ಉತ್ತಮ ವ್ಯಕ್ತಿತ್ವ ನಿರ್ಮಾಣಗೊಳ್ಳುವಲ್ಲಿ ಶಿಕ್ಷಕರ ಹಾಗೂ ಪಠ್ಯೇತರ ಚಟುವಟಿಕೆಗಳ ಪಾತ್ರ ಕೂಡ ಮಹತ್ವದ್ದು ಎಂದರು.
ಕೆಜಿವಿಎಸ್ ತಾಲೂಕು ಘಟಕದ ಅಧ್ಯಕ್ಷ ಆರ್. ಉಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಿತಿಯು ಮಕ್ಕಳಿಗಾಗಿ ಹಲವಾರು ಕ್ರಿಯಾಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅವರಲ್ಲಿನ ಸುಪ್ತ ಪ್ರತಿಭೆಯನ್ನು ಹೊರತೆಗೆಯುವ ಕೆಲಸ ಮಾಡುತ್ತಿದ್ದು, ಈ ಕಾರ್ಯಕ್ಕೆ ತಾಲೂಕಿನ ಶಿಕ್ಷಕರು ನೀಡುತ್ತಿರುವ ಸಹಕಾರ ಕೂಡ ಅಭಿನಂಧನಾರ್ಹ ಎಂದರು. ಸಮಿತಿಯ ಈ ಕಾರ್ಯಗಳಿಗೆ ಮಕ್ಕಳು ಹಾಗೂ ಪೋಷಕರಿಂದ ಉತ್ತಮ ಪ್ರತಿಕ್ರಿಯೆ ಹಾಗೂ ಸಹಕಾರ ವ್ಯಕ್ತವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಮಿತಿಯು ಮಕ್ಕಳಿಗಾಗಿ ವಿಜ್ಞಾನ ಗೋಷ್ಠಿಗಳು, ಪವಾಡ ರಹಸ್ಯ ಬಯಲು ಕಾರ್ಯಕ್ರಮ ಹಾಗೂ ವಿಶೇಷ ಬೇಸಿಗೆ ಶಿಬಿರಗಳನ್ನು ಆಯೋಜಿಸುವ ಆಲೋಚನೆಯನ್ನು ಹೊಂದಿದೆ ಎಂದರು.
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ  ಟಿ.ಎಸ್. ರೇವತಿ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ನಾನಾ  ಶಾಲೆಯ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಸಮಿತಿಯ ಹಿರಿಯ ಸದಸ್ಯ  ಬಿ.ಆರ್. ರಮೇಶ್, ಹಳ್ಳಿಮೈಸೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ  ಪ್ರಭುಶಂಕರ್, ಮುಖ್ಯೋಪಾಧ್ಯಾಯಿನಿ ಪ್ರಭಾವತಿ ಹಾಗೂ ಕೆಜಿವಿಎಸ್ ಗೆಳೆಯರು ಇದ್ದರು.
ಇದೇ ಸಂದರ್ಭದಲ್ಲಿ ಕೆಜಿವಿಎಸ್ ಘಟಕದ ವತಿಯಿಂದ ನಡೆಸಲಾಗಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಮಿತಿಯ ಎಚ್.ವಿ. ಷಣ್ಮುಖಯ್ಯ ಸ್ವಾಗತಿಸಿದರು, ಕೆ. ಶಿವಕುಮಾರಾಚಾರ್ ವಂದಿಸಿದರು. ಧರ್ಮರಾಜು ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.