ಹಾಸನ

ಉಚಿತ ಆರೋಗ್ಯ ಸೌಲಭ್ಯ ಯೋಜನೆ ರೂಪಿಸಲಿ: ಎಚ್.ಡಿ. ರೇವಣ್ಣ

Published On :

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ ಡಿ.11
ಅಗ್ಗದ ದರದಲ್ಲಿ ಅಕ್ಕಿ ನೀಡುವುದಕ್ಕೂ ಮೊದಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಇರುವಂತೆ ಎಲ್ಲ ಜನರಿಗೂ ಸರ್ಕಾರವೇ ಆರೋಗ್ಯ ವಿಮೆ ಮಾಡಿಸಿ, ಉಚಿತವಾಗಿ ಆರೋಗ್ಯ ಸೌಲಭ್ಯಗಳನ್ನು ನೀಡುವ ಶಾಶ್ವತ ಯೋಜನೆಗಳನ್ನು ರೂಪಿಸಲಿ ಎಂದು ಶಾಸಕ ಎಚ್.ಡಿ. ರೇವಣ್ಣ ಇಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇತ್ತೀಚೆಗೆ  ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ವಾಜಪೇಯಿ ಆರೋಗ್ಯಶ್ರೀ ಯೋಜನೆಯಡಿಯಲ್ಲಿ ಸುವರ್ಣ ಆರೋಗ್ಯ ಟ್ರಸ್ಟ್ ಹಾಗೂ ಸುರಕ್ಷಾ ಟ್ರಸ್ಟ್‌ನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ  ಆರೋಗ್ಯ ತಪಾಸಣಾ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸವಲತ್ತು ನೀಡಬೇಕು: ಕೇವಲ ಮತಗಳಿಕೆಗಾಗಿ ಅಗ್ಗದ ದರದಲ್ಲಿ ಅಕ್ಕಿ ನೀಡುವುದು, ಇನ್ನಿತರ ಯೋಜನೆಗಳನ್ನು ರೂಪಿಸುವ ಬದಲಿಗೆ ಸರ್ಕಾರಗಳು ಎಲ್ಲರಿಗೂ ಸಮಾನವಾಗಿ ಉಚಿತವಾಗಿ ಶಿಕ್ಷಣ ಹಾಗೂ ಆರೋಗ್ಯದ ಸವಲತ್ತುಗಳು ದೊರಕುವಂತೆ ಮಾಡಬೇಕಾದ ಅವಶ್ಯಕತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರಲ್ಲದೇ, ಅತಿಯಾದ ರಾಸಾಯನಿಕಗಳ ಬಳಕೆಯಿಂದಾಗಿ ಇಂದು ಜನರ ಆರೋಗ್ಯ ಮೇಲೆ ತೀವ್ರವಾದ ಪರಿಣಾಮಗಳು ಉಂಟಾಗುತ್ತಿದ್ದು, ಸರ್ಕಾರಗಳು ಈ ನಿಟ್ಟಿನಲ್ಲಿ ಹೆಚ್ಚಿನ ಚಿಂತನೆ ನಡೆಸಿ ಸೂಕ್ತವಾದ ಯೋಜನೆಗಳನ್ನು ರೂಪಿಸುವಂತೆ ಕಿವಿಮಾತು ಹೇಳಿದರು.
ಆರೋಗ್ಯವಂತ ದೇಶ ರೂಪಿಸಲು ಸಾಧ್ಯ: ಶಿಬಿರವನ್ನು ಉದ್ಘಾಟಿಸಿದ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಿ.ವಿ. ಸನತ್ ಮಾತನಾಡಿ, ವಾಜಪೇಯಿ ಆರೋಗ್ಯಶ್ರೀ ಯೋಜನೆಯಂತಹ ಆರೋಗ್ಯ ಕಾರ್ಯಕ್ರಮಗಳಿಂದಾಗಿ ಅಶಕ್ತರಿಗೂ ಆರೋಗ್ಯದ ಸವಲತ್ತುಗಳು ಉಚಿತವಾಗಿ ದೊರೆಯುವಂತಾಗಿರುವುದು ಶ್ಲಾಘನೀಯ ಸಂಗತಿಯಾಗಿದ್ದು, ಇದರ ಉಪಯುಕ್ತತೆಯನ್ನು ಎಲ್ಲರೂ ಸದುಪಯೋಗಪಡಿಸಿಕೊಂಡಾಗ ನಮ್ಮ ದೇಶವನ್ನು ಆರೋಗ್ಯವಂತ ದೇಶವನ್ನಾಗಿ ರೂಪಿಸಲು ಸಾಧ್ಯ ಎಂದರು.
ವಾಜಪೇಯಿ ಆರೋಗ್ಯಶ್ರೀ ಯೋಜನೆಯ ಉಸ್ತುವಾರಿ ವೈದ್ಯರಾದ ಡಾ.ರಮೇಶ್ ಅವರು ಪ್ರಾಸ್ಥಾವಿಕವಾಗಿ ಮಾತನಾಡಿ, ಈ ಯೋಜನೆಯಡಿಯಲ್ಲಿ ರಾಜ್ಯದ ವಿವಿಧ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 51ರೀತಿಯ ವಿವಿಧ ಖಾಯಿಲೆಗಳಿಗೆ ಚಿಕಿತ್ಸೆ ಹಾಗೂ ಅಗತ್ಯವಿದ್ದಲ್ಲಿ ಶಸ್ತ್ರಚಿಕಿತ್ಸೆಯನ್ನೂ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವ ಬಡ ಕುಟುಂಬಳಿಗೆ ನಡೆಸಲಾಗುವುದು ಎಂದರು.
ಚಿಂತನೆ ನಡೆದಿವೆ: ಮುಂದಿನ ದಿನಗಳಲ್ಲಿ ಎಪಿಎಲ್ ಕಾರ್ಡ್‌ದಾರರಿಗೂ ಈ ಯೋಜನೆಯಲ್ಲಿ ಕೆಲವೊಂದು ಮಾರ್ಪಾಡುಗಳನ್ನು ತಂದು ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಚಿಂತನೆಗಳು ನಡೆದಿವೆ ಎಂದುಅವರು ಈ ಸಂದರ್ಭದಲ್ಲಿ ತಿಳಿಸಿದರು.
ಪ್ರತಿ ತಿಂಗಳ 21ನೇ ತಾರೀಕಿನಲ್ಲಿ ವಾಜಪೇಯಿ ಆರೋಗ್ಯಶ್ರೀ ಯೋಜನೆಯಡಿಯಲ್ಲಿ ರಾಜ್ಯದಲ್ಲಿನ ಪ್ರತಿ ಜಿಲ್ಲಾ ಕೇಂದ್ರದಲ್ಲಿನ ಆಸ್ಪತ್ರೆಗಳಲ್ಲಿ ಈ ಯೋಜನೆಯಡಿಯಲ್ಲಿ ಉಚಿತವಾದ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸುವುದಲ್ಲದೇ, ಅಗತ್ಯವಿದ್ದವರಿಗೆ ಶಸ್ತ್ರಚಿಕಿತ್ಸಾ ಸೌಲಭ್ಯಗಳನ್ನೂ ಕಲ್ಪಿಸಲಾಗುವುದು ಎಂದು ಡಾ.ರಮೇಶಶ್ತಿಳಿಸಿದರು.
ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 300ಕ್ಕೂ ಹೆಚ್ಚು ನಾಗರಿಕರು ಹೃದಯ ಸಂಬಂಧಿ ತಪಾಸಣೆಗಳನ್ನು ಮಾಡಿಸಿಕೊಂಡರು. ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷೆ ಕೆ.ಎಂ. ಪುಷ್ಪಾಗೌಡೇಗೌಡ, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಟಿ.ಮಲ್ಲೇಶ್, ಸರ್ಕಾರಿ ಆಸ್ಪತ್ರೆಯ ನೇತ್ರ ತಜ್ಞ ಡಾ.ಕೆ.ಶ್ರೀನಿವಾಸಮೂರ್ತಿ, ಎದೆರೋಗ ತಜ್ಞ ಡಾ.ಡಿ. ನಟರಾಜ್, ನಾರಾಯಣ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಾಶ್, ರೋಟರಿ ಅಧ್ಯಕ್ಷ  ರೊ. ಆರ್.ಬಿ. ಪುಟ್ಟೇಗೌಡ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.