ಹಾಸನ

ಲೋಡ್ಶೆಡ್ಡಿಂಗ್ ವಿರುದ್ಧ ಅಹೋರಾತ್ರಿ ಧರಣಿ: ಎಚ್ಚರಿಕೆ

Published On :

ಕ.ಪ್ರ.ವಾರ್ತೆ   ಅರಸೀಕೆರೆ   ಡಿ. 24
ಸತತ ಬರಗಾಲ ಎದುರಿಸಿ ಕುಡಿಯುವ ನೀರಿಗೂ ಹಾಹಾಕಾರ ಎದುರಿಸುತ್ತಿರುವ ತಾಲೂಕಿನ ಕೆರೆ ಕಟ್ಟೆಗಳಿಗೆ ನೀರು ಹರಿಸಲು ರಾಜ್ಯ ಸರ್ಕಾರ ಕೂಡಲೇ ಯೋಜನೆ ರೂಪಿಸಬೇಕು ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ಲೋಡ್ಶೆಡ್ಡಿಂಗ್ ತಕ್ಷಣವೇ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ತಾಲೂಕು ಕಚೇರಿ ಎದುರು ಅಹೋರಾತ್ರಿ ಧರಣಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಮೇಳೇನಹಳ್ಳಿ ನಾಗರಾಜ್ ಎಚ್ಚರಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ತೆಂಗಿನ ಬೆಳೆ ಸಂಪೂರ್ಣ ನಾಶವಾಗಿದ್ದು ಸಾಲ ಸೋಲ ಮಾಡಿ ಬೀಜ ಗೊಬ್ಬರ ತಂದು ಬಿತ್ತನೆ ಮಾಡಿದ ಬೆಳೆಗಳು ಇನ್ನಿಲ್ಲದಂತೆ ನೆಲಕಚ್ಚಿವೆ. ಮಳೆಯ ಅಭಾವದಿಂದ ಕೆರೆ ಕಟ್ಟೆಗಳು ಸಂಪೂರ್ಣ ಒಣಗಿ ಹೋಗಿವೆ.
ಅಂತರ್ಜಲ ಕುಸಿತದಿಂದ 1000-1200 ಅಡಿ ಕೊಳಬೆ ಬಾವಿ ಕೊರೆದರೂ ನೀರು ಸಿಗದ ಕಾರಣ ಜನ ಜಾನುವಾರುಗಳು ಹನಿಹನಿ ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ. ಸರ್ಕಾರ ಈಗಲಾದರೂ ಎಚ್ಚೆತ್ತು ಕೆರೆ ಕೆರೆಗಳಿಗೆ ನೀರು ಹರಿಸಿ ರೈತರನ್ನು ಸ್ಪಂದಿಸದಿರುವುದು ದುರದೃಷ್ಟಕರ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಮನ ಬಂದಂತೆ ವಿದ್ಯುತ್ ಕಡಿತಮಾಡಲಾಗುತ್ತಿದೆ. ಲೋಡ್ ಶೆಡ್ಡಿಂಗ್ ಹೆಸರಿನಲ್ಲಿ ಗ್ರಾಮಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಅಧಿಕಾರಿಗಳು ಕೂಡಲೇ ಲೋಡ್ ಶೆಡ್ಡಿಂಗ್ ಸ್ಥಗಿತಗೊಳಿಸಬೇಕು. ಸುಳಿ ಒಣಗಿ ಬಿದ್ದಿರುವ ಪ್ರತಿ ತೆಂಗಿನ ಮರಕ್ಕೆ 15 ಸಾವಿರ ರು. ಪರಿಹಾರ ಧನ ವಿತರಿಸಬೇಕು. ರೈತರ ಜಮೀನು ಸರ್ವೇಗೆ 400 ರು. ನಿಗಧಿ ಮಾಡಬೇಕು. ಗೋಶಾಲೆಗಳನ್ನು ತೆರೆದು ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದ ಅವರು ಬೇಡಿಕೆ ಈಡೇರದಿದ್ದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.
ತಾಲೂಕು ರೈತ ಸಂಘದ ಕಾರ್ಯದರ್ಶಿ ಅಣ್ಣಾಯ್ಕನಹಳ್ಳಿ ಶಿವಮೂರ್ತಿ, ಶಿವಲಿಂಗಪ್ಪ, ಜವನಹಳ್ಳಿ ನಿಂಗಪ್ಪ, ರವೀಶ್ಬಾಬು ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.