ಹಾಸನ

ಡಾಬಾದಲ್ಲಿ ಅಕ್ರಮ ಮದ್ಯ ಮಾರಾಟ ನಿಲ್ಲಿಸಿ

Published On :

ಹಾಸನ: ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ತಾಲೂಕಿನ ಕಸ್ತೂರವಳ್ಳಿ ಹಾಗೂ ವರಟಿಕೊಪ್ಪಲು ಗ್ರಾಮದ ಮಹಿಳೆಯರು ಸೋಮವಾರ ಪ್ರತಿಭಟನೆ ನಡೆಸಿದರು.
ತಾಲೂಕಿನ ಕಸ್ತೂರವಳ್ಳಿ ಹಾಗೂ ವರಟಿಕೊಪ್ಪಲು ಗ್ರಾಮದ ಮಹಿಳೆಯರು ಕೂಡಲೇ ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸುವಂತೆ ಒತ್ತಾಯಿಸಿ ಡಾಬಾದ ಮುಂದೆ ನಿಂತು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪೊಲೀಸರೊಂದಿಗೆ ಮಹಿಳೆಯರು ವಾಗ್ವಾದ ನಡೆಸಿ ಕೂಡಲೇ ಮದ್ಯ ಮಾರಾಟವನ್ನು ನಿಲ್ಲಿಸದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಈ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 48ರ ಮುಖ್ಯರಸ್ತೆಯಲ್ಲಿ ಇರುವ ಡಾಬಾ ಹಾಗೂ ಮೂರ್ನಾಲ್ಕು ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ. ಗ್ರಾಮದ ಗಂಡಸರು ಇಲ್ಲಿ ಮದ್ಯವನ್ನು ಸೇವಿಸಲು ಹೋಗುವ ಸಂರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುವಾಗ ವಾಹನಕ್ಕೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೆ ಇನ್ನೂ ಕೆಲವರು ಅಪಘಾತಕ್ಕೆ ಸಿಲುಕಿ ಅಂಗಾಂಗ ಕಳೆದುಕೊಂಡಿದ್ದಾರೆ. ಹೆದ್ದಾರಿಯಲ್ಲೇ ಮದ್ಯದ ಅಂಗಡಿಗಳನ್ನು ಅಕ್ರಮವಾಗಿ ನಡೆಸುತ್ತಿರುವುದರಿಂದ ಅನಾಹುತಗಳು ಹೆಚ್ಚಾಗಿ ಸಂಭವಿಸುತ್ತಿವೆ ಎಂದು ಆರೋಪಿಸಿದರು.
ಗ್ರಾಮದ ಯುವತಿಯರು, ಮಹಿಳೆಯರು ಮತ್ತು ಮಕ್ಕಳು ಹೆದ್ದಾರಿಯಲ್ಲಿ ಈ ಮದ್ಯದ ಅಂಗಡಿಗಳಿಂದ ಬಸ್‌ಗಾಗಿ ನಿಲ್ಲಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸದಾ ಕಾಲ ಮದ್ಯವ್ಯಸನಿಗಳು ಕುಡಿದ ಅಮಲಿನಲ್ಲಿ ಯುವತಿಯರು ಹಾಗೂ ಮಹಿಳೆಯರನ್ನು ಛೇಡಿಸುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಜಿಲ್ಲಾಧಿಕಾರಿ ಸೇರಿ ಹಲವರಿಗೆ ಮನವಿ ನೀಡಿದರು ಸಹ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ನಿಲ್ಲಿಸಲೇಳಿದರೆ ಬೆದರಿಕೆ: ಮದ್ಯ ಮಾರಾಟವನ್ನು ನಿಲ್ಲಿಸುವಂತೆ ಕೇಳಲು ಹೋದ ಸಂದರ್ಭದಲ್ಲಿ ಅಂಗಡಿ ಮಾಲೀಕರು ಮಹಿಳೆಯರನ್ನೇ ಬೈದು ಕಳುಹಿಸುತ್ತಾರೆ. ಅಲ್ಲದೆ ಮಹಿಳೆಯರು ರಸ್ತೆಯಲ್ಲಿ ಓಡಾಡದಂತೆ ಹೆದರಿಸಲಾಗುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆಯ ಗಮನಕ್ಕೂ ತಂದಿದ್ದರೂ ಅವರು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ಕಿಡಿಕಾರಿದರು.
ಎರಡು ದಿನಗಳ ಹಿಂದೆಯಷ್ಟೇ ತಾಲೂಕಿ ಕಾಟೀಹಳ್ಳಿ ಕೊಪ್ಪಲಿನ ವಾಸಿ ತಾಂಡವೇಶ್ವರ (45) ಎಂಬವರು ಮದ್ಯ ಸೇವಿಸುವ ಸಲುವಾಗಿ ಕಸ್ತೂರವಳ್ಳಿ ಗೇಟ್ ಬಳಿ ರಸ್ತೆಯನ್ನು ದಾಟುತ್ತಿದ್ದ ಸಂದರ್ಭದಲ್ಲಿ ಬಸ್ ಡಿಕ್ಕಿ ಮಾಡಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಾಬಾಗಳಲ್ಲಿ ಫ್ಯಾಮಿಲಿ ರೆಸ್ಟೂರೆಂಟ್ ಎಂದು ಬೋರ್ಡ್‌ಗಳನ್ನು ಹಾಕಿಕೊಂಡು ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ದೂರಿದರು.
ಕೂಡಲೇ ಅಕ್ರಮ ಮದ್ಯ ಮಾರಾಟ ತಡೆಗಟ್ಟದಿದ್ದಲ್ಲಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆ ತಡೆ ಉಗ್ರ ಹೋರಾಟ ನಡೆಸುವುದಾಗಿ ಮಹಿಳೆಯರು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮದ ಮಹಿಳೆಯರಾದ ರಾಧ, ತಂಗಮ್ಮ, ಗೀತ, ಸುನಂದ, ಗೌರಮ್ಮ, ಲಕ್ಷ್ಮಮ್ಮ, ಸರೋಜಾ, ಪಾರ್ವತಿ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.