ಅರಸೀಕೆರೆ: ಶೀಘ್ರವೇ ವಿಧಾನಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಈಗಾಗಲೇ ಚುನಾವಣಾ ಪರ್ವ ಆರಂಭವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಹೇಳಿದ್ದಾರೆ.
ಪುರಸಭಾ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಪಟ್ಟಣಕ್ಕೆ ಆಗಮಿಸಿದ ಅವರು 22ನೇ ವಾರ್ಡಿನ ಬಿಜೆಪಿ ಅಭ್ಯರ್ಥಿ ಎನ್.ಡಿ. ಪ್ರಸಾದ್ ಪರ ಮತಯಾಚನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ವಿಧಾನಸಭೆಗೆ ಏಪ್ರಿಲ್, ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇದರಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಹಾಗೂ ಕೇಂದ್ರ ಸರ್ಕಾರದ ಭ್ರಷ್ಟಾಚಾರ ಈ ಬಾರಿಯ ಪ್ರಮುಖ ವಿಷಯಗಳಾಗಿವೆ ಎಂದರು.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ಹಣಾಹಣಿ ನಡೆಯಲಿದೆ. ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಮತದಾರರಿಗೆ ಮನದಟ್ಟು ಮಾಡುವ ಮೂಲಕ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಭವಿಷ್ಯದ ಪ್ರಧಾನಿ ಎಂದು ಗುಜರಾತಿನ ಮುಖ್ಯಮಂತ್ರಿ ನರೇಂದ್ರಮೋದಿಯನ್ನು ಬಿಜೆಪಿ ಬಿಂಬಿಸಿದೆ. ಕಾಂಗ್ರೆಸ್ ಕೂಡ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವ ಕನಸು ಕಂಡಿದೆ. ಟಿಪ್ಪು ವಿ.ವಿ ಸ್ಥಾಪನೆಯ ಸಂಬಂಧ ತಾವು ಹಿಂದೆ ನೀಡಿದ್ದ ಹೇಳಿಕೆಗೆ ಈಗಲೂ ಬದ್ದನಿದ್ದೇನೆ. ಯಡಿಯೂರಪ್ಪನವರು ಪಕ್ಷ ತೊರೆದಿರುವುದರಿಂದ ಹಾನಿಯೂ ಇಲ್ಲ, ಲಾಭವು ಇಲ್ಲ. ಧನಂಜಯಕುಮಾರ್ ಒಬ್ಬ ಸುಳ್ಳುಗಾರ ಅವರ ಮಾತಿಗೆ ಮಹತ್ವ ನೀಡುವ ಅಗತ್ಯವಿಲ್ಲ ಎಂದರು.