ಹಾಸನ

ಕೃಷಿ ಪೂರಕ ಚಟುವಟಿಕೆಗಳಿಂದ ಆರ್ಥಿಕ ಅಭಿವೃದ್ಧಿ: ನಾರಾಯಣಗೌಡ

Published On :

ಕ.ಪ್ರ.ವಾರ್ತೆ೤ ಹಾಸನ೤ ಮಾ. 15
ರೈತರು ಏಕ ಬೆಳೆ ಆಧಾರಿತ ಪದ್ಧತಿಯನ್ನು ಕಡಿಮೆ ಮಾಡಿ ಕೃಷಿಗೆ ಪೂರಕವಾದ ಹೈನುಗಾರಿಕೆ, ತರಕಾರಿ ಕೃಷಿ, ಕೋಳಿ ಸಾಕಾಣಿಕೆ, ರೇಷ್ಮೆ ಒಳಗೊಂಡ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ನೈಸರ್ಗಿಕ ಸಂಪತ್ತನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಆದಾಯ ಪಡೆಯಬಹುದಾಗಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಕೆ. ನಾರಾಯಣಗೌಡ ಅಭಿಪ್ರಾಯಪಟ್ಟರು.
 ಹಾಸನದ ಕಾರೆಕೆರೆಯಲ್ಲಿರುವ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ನಡೆದ ಕೃಷಿ ಮಹಾವಿದ್ಯಾಲಯ  ಹಾಗೂ ವಿದ್ಯಾರ್ಥಿ ನಿಲಯಗಳ ವಾರ್ಷಿಕೋತ್ಸವ ಮುಂಗಾರು - 2013 ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕೃಷಿಕರ ಯಶೋಗಾಥೆ:   ಯಶಸ್ವಿ ಪ್ರಗತಿಪರ ಕೃಷಿಕರ ಯಶೋಗಾಥೆಗಳನ್ನು ಅಂಕಿ ಅಂಶಗಳೊಂದಿಗೆ ವಿವರಿಸಿ ದೇಶ ವಿದೇಶಗಳಲ್ಲಿ ಕೃಷಿಗೆ ಸಂಬಂಧಿಸಿದಂತೆ ಆಗುತ್ತಿರುವ ಬೆಳವಣಿಗೆಗಳು, ಸಂಶೋಧನಾ ಆದ್ಯತೆಗಳು ಮತ್ತು ವಿಸ್ತರಣ ಶಿಕ್ಷಣದ ಅವಶ್ಯಕತೆಗಳನ್ನು ಮನವರಿಕೆ ಮಾಡಿಕೊಟ್ಟರು. ಇಂದಿನ ಗ್ರಾಮೀಣ ಯುವಕ ಯುವತಿಯರು  ಆಧುನಿಕ ಕೃಷಿ ತಂತ್ರಜ್ಞಾನ ಅಳವಡಿಸಿಕೊಂಡು ಕೃಷಿಯಲ್ಲಿ ಉತ್ತಮವಾದ ಜೀವನವನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದರು.
  ಕೃಷಿ ಕಾಲೇಜಿನ ವಾರ್ಷಿಕ ಸ್ಮರಣ ಸಂಚಿಕೆ ಮುಂಗಾರು - 2013 ರನ್ನು ಖ್ಯಾತ ಸಾಹಿತಿ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ದೊಡ್ಡರಂಗೇಗೌಡ ಬಿಡುಗಡೆ ಮಾಡಿ, ತಮ್ಮ ಜವಾಬ್ದಾರಿ ಅರಿತುಕೊಂಡು ನಿಷ್ಠೆಯಿಂದ, ಹಾಗೂ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
 ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವ್ಯವಸ್ಥಾಪನಾ ಮಂಡಳಿ ಸದಸ್ಯ ಹಾಗೂ ಮೂಡಿಗೆರೆಯ ಪ್ರಗತಿಪರ ರೈತ ಬಿ.ಸಿ. ಅರವಿಂದ್ ಮಾತನಾಡಿ, ರೈತರು ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿ ಭೂಮಿಯ ಫಲವತ್ತತೆಯನ್ನು ಹೆಚ್ಚಿಸುವಂತೆ ತಿಳಿಸಿದರು.
ಸಾವಯವ ಕೃಷಿ:  ಸಾವಯವ ಕೃಷಿ ವಿಧಾನದಲ್ಲಿ ನಿರ್ವಹಣೆ ಮಾಡುತ್ತಿರುವ ಅವರ ತೋಟದ ಬಗ್ಗೆ ತಿಳಿಸಿದ ಅವರು ಸಾವಯವ ಕೃಷಿಗೆ ಅವಶ್ಯಕ ಜೈವಿಕ ಗೊಬ್ಬರಗಳಾದ ಟ್ರೈಕೋಡರ್ಮ, ಎರೆಹುಳು ಗೊಬ್ಬರಗಳನ್ನು ಪೂರೈಸುತ್ತಿದ್ದು, ವಿದ್ಯಾರ್ಥಿಗಳಿಗೂ ಪ್ರಾಯೋಗಿಕವಾಗಿ ತಿಳಿದುಕೊಳ್ಳಲು ನೆರವಾಗುತ್ತದೆ ಎಂದರು.
 ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ  ಡಾ.ಕೆ.ಆರ್. ಶ್ರೀರಾಮುಲು  ಮಾತನಾಡಿ, ವಿದ್ಯಾರ್ಥಿಗಳು ಆತ್ಮಸ್ಥೈರ್ಯ  ಹೆಚ್ಚಿಸಿಕೊಂಡು ಸಮಾಜದಲ್ಲಿ ಉತ್ತಮ ಕೃಷಿ ವಿಜ್ಞಾನಿಗಳಾಗಿ ರೂಪುಗೊಳ್ಳುವಂತೆ ಕರೆ  ನೀಡಿದರು.
 ಅಧ್ಯಕ್ಷತೆ ವಹಿಸಿದ್ದ ಕೃಷಿ ಮಹಾವಿದ್ಯಾಲಯದ ಡೀನ್ ಹಾಗೂ ಆವರಣದ ಮುಖ್ಯಸ್ಥ ಡಾ. ಎಲ್. ಮಂಜುನಾಥ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸುವ ವೇದಿಕೆ ಇದಾಗಿದೆ. ವಿದ್ಯಾರ್ಥಿಗಳು ಪ್ರಾಧ್ಯಾಪಕರ ಮಾರ್ಗದರ್ಶನದಿಂದ ಶಿಸ್ತು ಹಾಗೂ ಪರಿಶ್ರಮ ರೂಢಿಸಿಕೊಂಡು ಉತ್ತಮ ಹಾಗೂ ಜೀವನ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.  
ಡಾ. ವೆಂಕಟೇಶ್, ಸಹಾಯಕ ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ ಡಾ. ಎನ್.ಉಮಾಶಂಕರ್, ವಿದ್ಯಾರ್ಥಿ  ನಿಲಯಗಳ ಮುಖ್ಯಪಾಲಕ ಡಾ. ಮಹದೇವು, ಡಾ. ಎ. ನಟರಾಜ, ಡಾ. ಎನ್. ನಾಗೇಶ್ ಇದ್ದರು.
ವಾರ್ಷಿಕೋತ್ಸವ ಅಂಗವಾಗಿ ಏರ್ಪಡಿಸಿದ್ದ ಹಲವಾರು ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೃಷಿ ಮಹಾವಿದ್ಯಾಲಯ ಹಾಗೂ ವಿದ್ಯಾರ್ಥಿ ನಿಲಯಗಳ ವಾರ್ಷಿಕ ವರದಿ ಹಾಗೂ ಕನ್ನಡ ಸಂಘದ ವರದಿ ಮಂಡಿಸಲಾಯಿತು.
 ಹಾಸನ ಕೃಷಿ ವಿಜ್ಞಾನ ಕೇಂದ್ರ, ಕಂದಲಿ, ಜೈವಿಕ ಇಂಧನ ಉದ್ಯಾನ, ಕೃಷಿ ಸಂಶೋಧನಾ ಕೇಂದ್ರ, ಮಡೆನೂರಿನ ಎಲ್ಲಾ ಮುಖ್ಯಸ್ಥರು, ವಿದ್ಯಾರ್ಥಿಗಳು ಇದ್ದರು. ಸುನೀಲ್‌ನಾಯಕ್ ಸ್ವಾಗತಿಸಿದರು. ಪ್ರಶಾಂತಿ  ವಂದಿಸಿದರು.  ಮಿಯಾರ್ಕ ಡಿಸೋಜಾ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.