ಸಾಕ್ಷರತಾ ಯಾತ್ರೆ ಮೂಲಕ ಕಾನೂನಿನ ಅರಿವು
ಕನ್ನಡಪ್ರಭವಾರ್ತೆ ಅರಸೀಕೆರೆ ಮಾ. 21
ಗ್ರಾಮೀಣ ಪ್ರದೇಶದ ಜನರಿಗೆ ಕಾನೂನು ಸಾಕ್ಷರತಾ ರಥ ಯಾತ್ರೆ ಮೂಲಕ ಕಾನೂನಿನ ಅರಿವು ಮತ್ತು ನೆರವಿನ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಜೆಎಂಎಫ್ಸಿ ಸಿವಿಲ್ ಪ್ರಧಾನ ನ್ಯಾಯಾಧೀಶ ದೇವಾನಂದ್ ತಿಳಿಸಿದರು.
ತಾಲೂಕಿನ ಗೀಜಿಹಳ್ಳಿ ಗ್ರಾಪಂ ಆವರಣದಲ್ಲಿ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಆದೇಶ ಮೇರೆಗೆ ಪ್ರತಿಯೊಬ್ಬ ಪ್ರಜೆಗೆ ಸಾಮಾನ್ಯ ಕಾನೂನುಗಳ ಬಗ್ಗೆ ಅರಿವು ಉಂಟು ಮಾಡಲು ಅನೇಕ ಯೋಜನೆಗಳನ್ನು ರೂಪಿಸಲಾಗಿದೆ. ತಾಲೂಕು ಕೇಂದ್ರಗಳಲ್ಲಿ ಕಾನೂನು ಸೇವಾ ಸಮಿತಿ ಮತ್ತು ಮಧ್ಯಸ್ಥಿಕೆ ಕೇಂದ್ರ ಸ್ಥಾಪಿಸಲಾಗಿದೆ. ಇದರ ಮೂಲಕ ಜನಸಾಮಾನ್ಯರಿಗೆ ಕಾನೂನಿನ ಅರಿವು ಮತ್ತು ನೆರವು ನೀಡಲಾಗುತ್ತಿದೆ ಎಂದು ನುಡಿದರು.
ಕಾನೂನು ಬಗ್ಗೆ ಜನರಲ್ಲಿ ಜಾಗೃತಿ ಉಂಟು ಮಾಡಲು ನ್ಯಾಯಾಧೀಶರು ಮತ್ತು ಪೊಲೀಸ್ ಅಧಿಕಾರಿಗಳು, ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ ವಕೀಲರ ತಂಡ ಗ್ರಾಮೀಣ ಪ್ರದೇಶದಲ್ಲಿ ಸಾಕ್ಷರತ ರಥಯಾತ್ರೆ ಮೂಲಕ ಗ್ರಾಮೀಣ ಜನರಿಗೆ ಸಾಮಾಜಿಕ ಸಮಸ್ಯೆ ಮತ್ತು ಮಹಿಳೆಯರು ಮತ್ತು ಮಕ್ಕಳ ಹಕ್ಕಿನ ಬಗ್ಗೆ ಸರ್ಕಾರ ರೂಪಿಸಿರುವ ಕಾನೂನುಗಳ ಬಗ್ಗೆ ತಿಳಿವಳಿಕೆ ನೀಡಿ ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲೆಸಲು ಪ್ರಯತ್ನಿಸಲಾಗುತ್ತಿದೆ. ಆದ್ದರಿಂದ ಅವಶ್ಯಕತೆಯುಳ್ಳವರು ಇದರ ಪ್ರಯೋಜನ ಪಡೆಯಬಹುದೆಂದು ವಿವರಿಸಿದರು. ನಗರ ಪೊಲೀಸ್ ಠಾಣೆ ವೃತ್ತ ನಿರೀಕ್ಷ ಕುಮಾರಸ್ವಾಮಿ ಮಾತನಾಡಿ, ನ್ಯಾಯಾಲಯ ಮತ್ತು ಪೊಲೀಸ್ ಇಲಾಖೆ ಬಗ್ಗೆ ಹೆಚ್ಚಿನ ಜನರಿಗೆ ಒಂದು ರೀತಿಯ ಭಯವಿದೆ. ಇದರಿಂದ ಅವರನ್ನು ಮುಕ್ತಗೊಳಿಸುವ ಕಾರ್ಯವನ್ನು ಕಾನೂನು ಅರಿವು ಕಾರ್ಯಕ್ರಮಗಳ ಮೂಲಕ ಮಾಡಲಾಗುತ್ತಿದೆ. ಸರ್ಕಾರ ನೀಡುವ ಸೇವಾ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರ ನೀಡ ಬೇಕೆಂದು ಮನವಿ ಮಾಡಿದರು.
ವಕೀಲ ಎಚ್.ಎನ್.ಅಶೋಕ್ಕುಮಾರ್ ಮಾತನಾಡಿ, ಮಹಿಳೆ ಮತ್ತು ಕಾನೂನು ವಿಷಯದ ಬಗ್ಗೆ ಉಪನ್ಯಾಸ ನೀಡಿ ಮಹಿಳೆಯರ ಅಭಿವೃದ್ಧಿಗೆ ಸರ್ಕಾರ ಅನೇಕ ಕಾನೂನು ಜಾರಿಗೆ ತಂದಿದೆ. ಆದರೆ ಹೆಣ್ಣು ಭ್ರೂಣಹತ್ಯೆಯ ಪಾಪದ ಕಾರ್ಯಕ್ಕೆ ಮಹಿಳೆಯರೇ ಮುಂದಾಗಿರುವುದು ವಿಪರ್ಯಾಸದ ಸಂಗತಿ. ಮುಂದಿನ ದಿನಗಳಲ್ಲಿ ಇದರಿಂದ ಹೆಚ್ಚಿನ ಸಮಸ್ಯೆ ಅನುಭವಿಸ ಬೇಕಾಗುತ್ತದೆ ಎಂಬ ಸತ್ಯ ತಿಳಿಯಬೇಕೆಂದರು.
ವಕೀಲರಾದ ಪಿ.ನಟರಾಜ್ ಹಕ್ಕು ಮತ್ತು ಆರೋಗ್ಯ ಸಂರಕ್ಷಣೆ ಬಗ್ಗೆ ಉಪನ್ಯಾಸ ನೀಡಿದರು.
ಗ್ರಾಪಂ ಅಧ್ಯಕ್ಷ ವೈ.ಆರ್.ನಾಗಾರಾಜು ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ವನಜಾಕ್ಷಮ್ಮ, ಸರ್ಕಾರಿ ಸಹಾಯಕ ಅಭಿಯೋಜಕ ದೇಶ ಭಂಡಾರಿ, ವಕೀಲರ ಸಂಘದ ಅಧ್ಯಕ್ಷ ಕೆ.ಎ.ರವಿಶಂಕರ್, ವಕೀಲರಾದ ಕೆ.ಜಿ.ಸದಾನಂದ, ಕೆಂಪೇಗೌಡ, ಉರಲಿಂಗಪ್ಪ, ಕಲ್ಯಾಣಕುಮಾರ್, ಮಹದೇವಪ್ಪ, ಪೂರ್ಣಿಮಾ, ಶ್ವೇತ, ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕ ಗಂಗಾಧರಪ್ಪ, ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಚಂಪಾವತಿ, ಅಂಬಿಕಾ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

