ಹಾಸನ

ಸಿದ್ಧವಸ್ತು ತಯಾರಿಸಿದರೆ ನಿರುದ್ಯೋಗ ಸಮಸ್ಯೆಯಿರದು

Published On :

ಅರಸೀಕೆರೆ: ನಾಡಿನ ನೈಸರ್ಗಿಕ ಸಂಪತ್ತು ಹಾಗೂ ಮಾನವ ಶಕ್ತಿಯ ಸದ್ಬಳಕೆ ಮಾಡಿಕೊಂಡು ಸಿದ್ಧವಸ್ತುಗಳನ್ನು ಇಲ್ಲಿಯೇ ತಯಾರಿಸಿದರೆ ನಿರುದ್ಯೋಗಿಗಳ ಸಮಸ್ಯೆ ಹೋಗಲಾಡಿಸಬಹುದು. ಹಾಗೂ ವಿಜಯನಗರ ಸಾಮ್ರಾಜ್ಯದ ಸುವರ್ಣ ಯುಗ ಕಾಣಲು ಸಾಧ್ಯವಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.
 ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪಟ್ಟಣದ ಬಸವರಾಜೇಂದ್ರ ಫೌಢಶಾಲಾ ಆವರಣಲ್ಲಿ ಶುಕ್ರವಾರ  ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ನಾಡ ಧ್ವಜಾರೋಹಣ ನೆರವೇರಿಸಿದ ನಂತರ  ಅವರು ಮಾತನಾಡಿದರು.
ದೇಶದ ಆಡಳಿತ ವ್ಯವಸ್ಥೆಯಲ್ಲಿ ಕೋಟ್ಯಾಂತರ ರು.  ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಧೋರಣೆ ನಡೆಯುತ್ತಿರುವುದು ಅಭಿವೃದ್ಧಿಗೆ ಮಾರಕವಾಗಿದೆ. ಇಲ್ಲಿನ ನೈಸರ್ಗಿಕ ಖನಿಜ ಸಂಪತ್ತು ಬೇರೆ ಬೇರೆ ದೇಶಗಳಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದೆ. ಅಲ್ಲದೆ ಹೆಚ್ಚಿನ ಮಾನವ ಶಕ್ತಿಯನ್ನು ಹೊಂದಿರುವ ನಮ್ಮ ನಾಡಿನಲ್ಲಿ ದುಡಿಯುವ ಕೈಗಳಿಗೆ ಉದ್ಯೋಗ ಸೃಷ್ಟಿಸುವ ಕೈಗಾರಿಕೆಗಳ ಸ್ಥಾಪನೆ ಹಾಗೂ ಕೃಷಿ ಕ್ಷೇತ್ರಕ್ಕೆ ಪೂರಕವಾದ ನೀರಾವರಿ ಸೌಲಭ್ಯಗಳನ್ನು ಕಲ್ಪಿಸಬೇಕಾದ ಸರ್ಕಾರಗಳು ತಮ್ಮ ಆದ್ಯ ಕರ್ತವ್ಯವನ್ನು ಮರೆತು ನಿರುಪಯುಕ್ತ ಕೆಲವು ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶದ ಆರ್ಥಿಕ ವ್ಯವಸ್ಥೆಯನ್ನೇ ಹಾಳು ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಷ್ಟ್ರಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಕೇಶವಮೂರ್ತಿ ಮಾತನಾಡಿ,  ರಾಜ್ಯದ ಸಂಸ್ಕೃತಿ ಮತ್ತು ಐತಿಹಾಸಿಕ ಪರಂಪರೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಲಾಗಿದೆ. ಸುಮಾರು 2 ಸಾವಿರ ವರ್ಷಗಳ ಇತಿಹಾಸವುಳ್ಳ ಈ ನಾಡಿಗೆ ಅನೇಕ ರಾಜವಂಶಸ್ಥರು ತಮ್ಮ ಅಮೂಲ್ಯ ಸೇವೆಯನ್ನು ಸಲ್ಲಿಸಿದ್ದಾರೆ.ಅಂತಹ ಮಹಾನ್ ಪುರುಷರನ್ನು ಇಂದು ನಾವುಗಳೆಲ್ಲರೂ ಸ್ಮರಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಪುರಸಭೆ ಅಧ್ಯಕ್ಷ ಮೋಹನ್ಕುಮಾರ್ ಉದ್ಘಾಟಿಸಿದರು. ಜಿಪಂ  ಉಪಾಧ್ಯಕ್ಷ ಬಿಳಿಚೌಡಯ್ಯ, ತಾಪಂ ಅಧ್ಯಕ್ಷ ಎಚ್.ಟಿ.ಶಿವಮೂರ್ತಿ ಮಾತನಾಡಿದರು.  ಎಪಿಎಂಸಿ ಅಧ್ಯಕ್ಷ ಅಜ್ಜಪ್ಪ, ಡಿವೈಎಸ್ಪಿ ಐ.ಜಿ. ಮಂಜುನಾಥ್, ತಾಪಂ  ಕಾರ್ಯ ನಿರ್ವಹಣಾಧಿಕಾರಿ  ಟಿ.ಎನ್.ಮೂರ್ತಿ,  ಬಿಇಓ ನಟರಾಜ್, ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ ಹಾಗೂ ಪುರಸಭಾ ಸದಸ್ಯರು ಮತ್ತು ನಾನಾ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.
ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಅನೇಕ ಗಣ್ಯರನ್ನು  ಅಲ್ಲದೆ ತಾಲೂಕಿನಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದ ನಂತರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಶಾಲಾ ಮಕ್ಕಳ ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.