ಸಹಕಾರಿ ಸಂಘದ ಬಲವರ್ಧನೆಗೆ ಸಹಕಾರ: ಶಾಸಕ ರೇವಣ್ಣ
ಕ.ಪ್ರ. ವಾರ್ತೆ ಹೊಳೆನರಸೀಪುರ ನ.8
ತಾಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಬಲವರ್ಧನೆ ಹಾಗೂ ತಾಲೂಕಿನ ರೈತರ ಹಿತ ಕಾಯುವ ನಿಟ್ಟಿನಲ್ಲಿ ಸಂಘಕ್ಕೆ ಅಗತ್ಯ ಸಹಕಾರ ನೀಡಲು ತಾವು ಬದ್ಧವಾಗಿದ್ದು, ಸಂಘವನ್ನು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕ್ರಿಯಾಶೀಲತೆಯೊಂದಿಗೆ ರೈತರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖಗೊಳಿಸಲಾಗುವುದು ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು.
ಅವರು ಶುಕ್ರವಾರ ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ವತಿಯಿಂದ 12.25 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲಾಗಿರುವ ಹೆಚ್ಚುವರಿ ಕಟ್ಟಡ ಉದ್ಘಾಟಿಸಿ ಮಾತನಾಡಿ, ಸಂಸ್ಥೆಯ ಆದಾಯದ ಜೊತೆಗೆ ರೈತರ ಹಿತ ಕಾಯುವ ನಿಟ್ಟಿನಲ್ಲಿ ನಾನಾ ಯೋಜನೆಗಳನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದರು.
ರಾಜ್ಯದ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಗಳಲ್ಲಿ ಬಹುತೇಕ ಸಂಘಗಳು ನಷ್ಟವನ್ನು ಅನುಭವಿಸುತ್ತಿದ್ದರೆ, ಇಂತಹ ಸಂದರ್ಭದಲ್ಲೂ ತಾಲೂಕಿನ ಸಹಕಾರ ಸಂಘವು ಅತ್ಯಂತ ಜಾಗೃತವಾಗಿ ಕಾರ್ಯನಿರ್ವಹಿಸುತ್ತ, ರೈತರ ಹಿತವನ್ನು ಕಾಯುವ ದಿಕ್ಕಿನಲ್ಲಿ ಹೆಚ್ಚಿನ ಪರಿಶ್ರಮವನ್ನು ಹೊಂದಿರುವುದು ಶ್ಲಾಘನೀಯ ಸಂಗತಿ ಎಂದು ನುಡಿದರು.
ಸರ್ಕಾರ ನಿಗದಿಗೊಳಿಸಿರುವ ದರದಲ್ಲಿಯೇ ರೈತರಿಗೆ ಅಗತ್ಯವಾದ ರಸಗೊಬ್ಬರಗಳನ್ನು ಅವಶ್ಯಕತೆಗೆ ಅನುಗುಣವಾಗಿ, ಸರಿಯಾದ ಸಂದರ್ಭದಲ್ಲಿ ಒದಗಿಸಿ ರೈತರ ಕೃಷಿ ಚಟುವಟಿಕೆಗಳ ಹೆಚ್ಚಳಕ್ಕೆ ಸಂಘ ಪರೋಕ್ಷವಾಗಿ ಸಹಕಾರಿಯಾಗಿದೆ ಎಂದು ಹೇಳಿದರು.
ನೂತನ ಕಟ್ಟಡವನ್ನು ಹಿಂದುಳಿದ ವರ್ಗಗಳ ಮಹಿಳಾ ವಿದ್ಯಾರ್ಥಿನಿ ನಿಲಯಕ್ಕೆ ಬಾಡಿಗೆ ಆಧಾರದಲ್ಲಿ ನೀಡುವ ಮೂಲಕ ಸಂಘದ ಆದಾಯವನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಹಾಗೂ ಜಿಪಂ ಸದಸ್ಯ ಎಚ್.ಎನ್.ದೇವೇಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯು ರೈತರ ಅಭಿವಣದ್ಧಿಯ ಪಥವನ್ನು ನಿರೀಕ್ಷಿಸುವ ಜೊತೆಗೆ ರೈತರಿಗೆ ಸಹಕಾರ ನೀಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಚಿನ್ನದ ಅಡಮಾನದ ಮೇಲೆ ಸಾಲ ಸೌಲಭ್ಯವನ್ನು ನೀಡುವ ನಿರ್ಣಯವನ್ನು ಈಗಾಗಲೇ ನಡೆದಿರುವ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ಕಳೆದ 3 ವರ್ಷಗಳಿಂದಲೂ ಸಂಸ್ಥೆಯು ತಾಲೂಕಿನ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ರಸಗೊಬ್ಬರಗಳನ್ನು 2 ಕೋಟಿ ರು.ಗಳಿಗೂ ಅಧಿಕವಾಗಿ, ಸರ್ಕಾರಿ ಬೆಲೆಗೆ ಮಾರಾಟ ಮಾಡಿರುವುದಲ್ಲದೇ, ಪ್ರಸಕ್ತ ಸಾಲಿನಲ್ಲಿಯೇ 3ಕೋಟಿ ರು. ಬೇಡಿಕೆ ಇರುವ ರಸಗೊಬ್ಬರಗಳನ್ನು ಸರಿಯಾದ ಸಮಯದಲ್ಲಿ ನೀಡುವ ಮೂಲಕ ಖಾಸಗಿ ರಸಗೊಬ್ಬರ ಮಾರಾಟಗಾರರಲ್ಲಿ ದುಬಾರಿ ವೆಚ್ಚದಲ್ಲಿ ರಸಗೊಬ್ಬರಗಳನ್ನು ಖರೀದಿಸುವುದನ್ನು ತಪ್ಪಿಸಲಾಗಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ತಾಲೂಕಿನ ಗನ್ನಿಕಡದ ಬಳಿಯಲ್ಲಿಯೂ ರೈತರಿಗೆ ರಸಗೊಬ್ಬರಗಳ್ನು ಪೂರೈಸಲು ಸಂಘದ ಶಾಖೆಯನ್ನು ತೆರೆಯಲಾಗುವುದು ಎಂದು ಹೇಳಿದರು.
ಸಹಾಯಕ ನಿಬಂಧಕ ಪರಮೇಶ್ವರ್, ಸಹಕಾರ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀನಾರಾಯಣ್, ಕಾರ್ಯದರ್ಶಿ ಮಂಜುನಾಥ್, ಸೊಸೈಟಿ ನಿರ್ದೇಶಕ ಎಸ್.ಎ.ರಘು, ರೈಸ್ಮಿಲ್ ಉಸ್ತುವಾರಿ ರಾಜಣ್ಣ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

