ಹಾರನಹಳ್ಳಿ ಕೆರೆಗೆ ಯಗಚಿ ನೀರು ಹರಿಸಲು ಆಗ್ರಹಿಸಿ ಧರಣಿ
ಅರಸೀಕೆರೆ: ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಹಾರನಹಳ್ಳಿ ಕೆರೆಗೆ ಯಗಚಿ ನೀರು ಪೂರೈಸುವ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ತಾಲೂಕಿನ ಹಾರನಹಳ್ಳಿ ಗ್ರಾಪಂ ಕಚೇರಿ ಬಳಿ ಇತ್ತೀಚೆಗೆ ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ನಡೆಸಿದರು.ರಾಜ್ಯ ರೈತ ಸಂಘದ ಜಿಲ್ಲಾ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್, ಗ್ರಾಪಂ ಮಾಜಿ ಅಧ್ಯಕ್ಷ ಕರೀಂಸಾಬ್ ಹಾಗೂ ಹಾರನಹಳ್ಳಿ ಗ್ರಾಮಸ್ಥರ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯಿತು.
2 ವರ್ಷದಿಂದ ಮಳೆ ಅಭಾವದಿಂದ ಕೆರೆ ಸಂಪೂರ್ಣವಾಗಿ ಬರಿದಾಗಿದ್ದು, ಇದರಿಂದ ಸುತ್ತಮುತ್ತಲ 15 ಕಿ.ಮೀ. ವ್ಯಾಪ್ತಿಯಲ್ಲಿ ಕೊಳವೆ ಬಾವಿಗಳು ಬತ್ತಿವೆ. ಕುಡಿಯುವ ನೀರಿಗಾಗಿ ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಯಾವುದಾದರೂ ಮೂಲದಿಂದ ಈ ಕೆರೆಗೆ ನೀರು ಪೂರೈಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರಸನ್ನಕುಮಾರ್ ಮಾತನಾಡಿ, ಹಾರನಹಳ್ಳಿ ಕೆರೆಗೆ ಯಗಚಿ ನದಿ ನೀರು ಪೂರೈಸುವ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಈ ಹಿಂದೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಬರಪೀಡಿತ ಪ್ರದೇಶವಾಗಿರುವ ಅರಸೀಕೆರೆ ತಾಲೂಕನ್ನು ನಿರಂತರವಾಗಿ ಕಡೆಗಣಿಸಲಾಗಿದೆ. ಜಿಲ್ಲೆಯಲ್ಲಿ ಐದು ನದಿಗಳು ಹರಿದರೂ, ತಾಲೂಕಿನಲ್ಲಿ ಕುಡಿಯುವ ನೀರಿಗಾಗಿ ಜನರು ಹಪಹಪಿಸುತ್ತಿದ್ದಾರೆ. ಯಾವುದೇ ಸರ್ಕಾರ, ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜನ-ಜಾನುವಾರು ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ. ಪರಿಸ್ಥಿತಿ ಹೀಗಿದ್ದರೂ ಸರ್ಕಾರಗಳು ರೈತರ ನೆರವಿಗೆ ನಿಲ್ಲುವ ಬದಲು ಉದ್ಯಮಿಗಳಿಗೆ ಆಶ್ರಯ ನೀಡಲು ಮುಂದಾಗುತ್ತಿದ್ದಾರೆ. ಕೂಡಲೇ ಹಾರನಹಳ್ಳಿ ಕೆರೆಗೆ ನೀರು ಹರಿಸಲು ಯೋಜನೆ ರೂಪಿಸಬೇಕು. ನೀರು ಹರಿವವರೆಗೂ ಉಪವಾಸ ಸತ್ಯಾಗ್ರಹ ಕೈಬಿಡುವುದಿಲ್ಲ ಎಂದರು.
ಸತ್ಯಾಗ್ರಹದ ಸುದ್ದಿ ತಿಳಿದ ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಶಿವಕುಮಾರ್ ಸ್ಥಳಕ್ಕೆ ಆಗಮಿಸಿ ಸತ್ಯಾಗ್ರಹನಿರತರೊಂದಿಗೆ ಮಾತುಕತೆ ನಡೆಸಿ ಇನ್ನೊಂದು ತಿಂಗಳಲ್ಲಿ ಪರಿಸ್ಥಿತಿಯ ಸಮಗ್ರ ವರದಿ ಕಳುಹಿಸಿ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಯತ್ನ ನಡೆಸುವುದಾಗಿ ಭರವಸೆ ನೀಡಿದರು. ನಂತರ ಉಪವಾಸ ಸತ್ಯಾಗ್ರಹವನ್ನು ಕೈಬಿಡಲಾಯಿತು.ಮಹದೇವಪ್ಪ, ಮರುಲಿಂಗಪ್ಪ, ಮಹೇಶ, ಸತೀಶ್, ಹಾರನಹಳ್ಳಿ ಲಕ್ಕಮ್ಮ ಇದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

