'ಆಸಕ್ತಿ ಹುಟ್ಟುವ ಪರಿಸರ ನಿರ್ಮಾಣವಾಗಲಿ'
ಅರಸೀಕೆರೆ: ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಲು ಅತ್ಯುತ್ತಮವಾದ ಸುಂದರ ವಾತಾವರಣವನ್ನು ಶಾಲೆಗಳಲ್ಲಿ ನಿರ್ಮಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.
ತಾಲೂಕಿನ ಹಾರನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಏರ್ಪಡಿಸಿದ್ದ ಶಾಲಾ ಆಟದ ಮೈದಾನ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಇಂದಿನ ಮಕ್ಕಳೇ ದೇಶದ ಮುಂದಿನ ಪ್ರಜೆಗಳಾಗಿದ್ದು, ಅವರ ಭವಿಷ್ಯ ಉಜ್ವಲವಾಗಿ ರೂಪಿಸುವ ಸಲುವಾಗಿ ಸರ್ಕಾರ ಕಡ್ಡಾಯ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಬೇಕಾದ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ ಎಂದು ಹೇಳಿದರು. ಶಾಲೆಗಳಲ್ಲಿ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆಯಬೇಕಾದರೆ ಅವರ ಆಸಕ್ತಿಯನ್ನು ಬೆಳೆಸುವಂತಹ ಪರಿಸರ ಶಾಲೆಯಲ್ಲಿ ನಿರ್ಮಾಣ ಆಗಬೇಕಾಗಿದೆ. ಅದೇ ಕಾರಣದಿಂದ ಅನೇಕ ಪೋಷಕರು ತಮ್ಮ ಮಕ್ಕಳನ್ನೂ ಸರ್ಕಾರಿ ಶಾಲೆಗೆ ಸೇರಿಸುವ ಬದಲಿಗೆ ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಅಂತಹ ಪೋಷಕರಿಗೆ ಸರ್ಕಾರಿ ಶಾಲೆಯ ಬಗ್ಗೆ ಮಾಹಿತಿ ಕೊರತೆ ಇರುವುದೇ ಪ್ರಮುಖ ಕಾರಣವಾಗಿದೆ.
ಸರ್ಕಾರಿ ಶಾಲೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ ಅನೇಕರು ಇಂದು ಅತ್ಯಂತ ಮಹತ್ವದ ಹುದ್ದೆಯಲ್ಲಿದ್ದಾರೆ ಎಂಬುದು ಪೋಷಕರಿಗೆ ಮನವರಿಕೆಯಾಗಬೇಕಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಗೆ ಸುಮಾರು 54 ಸಾವಿರ ಕೋಟಿ ರು. ಮೀಸಲಿಟ್ಟಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಸಕಾಲದಲ್ಲಿ ಉದ್ಯೋಗ ಸೃಷ್ಟಿಸುವ ಜೊತೆಗೆ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡುವುದು ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ಈ ಯೋಜನೆ ಸದ್ಬಳಕೆ ಮಾಡಿಕೊಂಡು ತಾಲೂಕಿನ ಅನೇಕ ಪ್ರೌಢಶಾಲಾ ಮೈದಾನಗಳನ್ನು ಸುಸಜ್ಜಿತಗೊಳಿಸಲಾಗುತ್ತಿದೆ ಎಂದು ನುಡಿದರು. ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಬಿಳಿಚೌಡಯ್ಯ, ಜಿಲ್ಲಾ ಪಂಚಾಯ್ತಿ ಅಭಿವೃದ್ಧಿ ಕಾರ್ಯದರ್ಶಿ ಕರಿಯಪ್ಪ ಮಾತನಾಡಿದರು. ಹಾರನಹಳ್ಳಿ ಗ್ರಾಪಂ ಉಪಾಧ್ಯಕ್ಷ ಬಸವರಾಜು ಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷ ಎಚ್.ಟಿ.ಶಿವಮೂರ್ತಿ, ತಾಪಂ ಇಓ ಟಿ.ಎನ್.ಮೂರ್ತಿ, ಬಿಇಓ ಎಸ್.ಪಿ.ನಟರಾಜು, ದೈಹಿಕ ಶಿಕ್ಷಣ ಪರಿವೀಕ್ಷಕ ತಿಮ್ಮೇಶ್, ಜಿಪಂ ಉಪವಿಭಾಗದ ಸಹಾಯಕ ಎಂಜಿನಿಯರ್ ಶೇಖರಪ್ಪ ಇತರರು ಇದ್ದರು. ಗ್ರಾಪಂ ಪಿಡಿಓ ಶಾರದಮ್ಮ ಸ್ವಾಗತಿಸಿದರು.
ಕಾಡಾನೆ ದಾಳಿ ಪ್ರದೇಶಕ್ಕೆ ಶಾಸಕರ ಭೇಟಿ
ಸಕಲೇಶಪುರ: ತಾಲೂಕಿನ ಬಾಗೆ ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ನಾಶಗೊಂಡಿರುವ ಕಾಫಿ ಹಾಗೂ ಭತ್ತದ ಗದ್ದೆಗಳಿಗೆ ಶಾಸಕ ಎಚ್.ಕೆ.ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಮಾತನಾಡಿದ ಅವರು, ಇತ್ತೀಚೆಗೆ ಕಾಡಾನೆ ಹಾವಳಿ ಮಿತಿ ಮೀರಿದ್ದು, ಬೆಳಗೋಡು ಹೋಬಳಿಯ ಬಾಗೆ, ಅಲುವಳ್ಳಿ, ರಾಜೇಂದ್ರಪುರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಕೊಯ್ಲಿಗೆ ಬಂದಿರುವ ಬತ್ತದ ಗದ್ದೆ ಹಣ್ಣಾಗಿರುವ ಕಾಫಿ ತೋಟಗಳನ್ನು ಕಾಡಾನೆ ಹಿಂಡು ವ್ಯಾಪಕವಾಗಿ ನಾಶಮಾಡುತ್ತಿರುವುದು ಕಳವಳಕಾರಿ ಸಂಗತಿ ಎಂದರು. ಇದೆ ಸಂದರ್ಭದಲ್ಲಿ ವಿವಿಧ ಗ್ರಾಮಗಳ ನೂರಾರು ಬೆಳೆಗಾರರರು ಶಾಸಕರಿಗೆ ಮನವಿ ಸಲ್ಲಿಸಿ ಪರಿಹಾರ ನೀಡಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

