ಸರ್ಕಾರದ ತಾರತಮ್ಯ ನೀತಿ: ರೇವಣ್ಣ ಖಂಡನೆ
ಕ.ಪ್ರ.ವಾರ್ತೆ ಹಾಸನ ನ. 21
ಹಿಂದೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿಗಳೇ ಅರಸೀಕೆರೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ಬರಪೀಡಿತ ಪಟ್ಟಿಯಿಂದ ಕೈ ಬಿಡುವ ಮೂಲಕ ತಾರತಮ್ಯ ನೀತಿ ಅನುಸರಿಸಲಾಗಿದೆ ಎಂದು ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಖಂಡಿಸಿದರು.
ಬರಗಾಲದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ. ಹಾಸನಕ್ಕೆ ಸಿಎಂ ಭೇಟಿ ನೀಡಿದ್ದಾಗಲೂ ಅರಕಲಗೂಡು, ಬೇಲೂರು ತಾಲೂಕುಗಳನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕರು ಅತಿ ಹೆಚ್ಚು ಮಳೆಯಿಂದ ಹಾನಿಯಾಗಿದೆ ಪರಿಹಾರ ಘೋಷಣೆ ಮಾಡಿ, ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡಿಸಬೇಕು. ಹೊಯ್ಸಳೋತ್ಸವ ನಡೆಸಬೇಕು. ಅದಕ್ಕಾಗಿ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಆದರೆ ಬರದಿಂದ ತತ್ತರಿಸಿ ಹೋಗಿರುವ ಅರಸೀಕೆರೆ ಮತ್ತು ಚನ್ನರಾಯಪಟ್ಟಣ ತಾಲೂಕುಗಳನ್ನು ಬರಪೀಡಿತ ಪಟ್ಟಿಯಲ್ಲಿ ಸೇರಿಸದೇ ತಾರತಮ್ಯ ನೀತಿ ಅನುಸರಿಸಲಾಗಿದೆ. ಇದನ್ನು ಸರಿಪಡಿಸಬೇಕು. ಅಲ್ಲದೇ ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು, ಹಳೆಕೋಟೆ ಹೋಬಳಿ, ಹಾಸನ ತಾಲೂಕಿನ ದುದ್ದ, ಸಾಲಗಾಮೆ ಹೋಬಳಿಗಳು ಮತ್ತು ಸಕಲೇಶಪುರ ಕ್ಷೇತ್ರದ ವ್ಯಾಪ್ತಿಗೆ ಬರುವ ಕಟ್ಟಾಯ ಹೋಬಳಿಗಳಲ್ಲಿ ಬೆಳೆ ನಾಶವಾಗಿದ್ದು. ಬರ ಪ್ರದೇಶಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಅರಸೀಕೆರೆ, ಚನ್ನರಾಯಪಟ್ಟಣ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ, ಕುಡಿಯುವ ನೀರು ಒದಗಿಸುವ, ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಮತ್ತು ಅತಿವೃಷ್ಟಿಯಿಂದ ಹಾನಿಯಾದ ಪ್ರದೇಶಗಳಿಗೆ ಪರಿಹಾರ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂತಲೂ ಒತ್ತಾಯಿಸಿದರು.
ಬಂಗಾರಪ್ಪ ಕುಟುಂಬ ಸ್ಪರ್ಧೆ: ರಾಜ್ಯಾಧ್ಯಕ್ಷರ ತೀರ್ಮಾನವೇ ಅಂತಿಮ
ಹಾಸನ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ದಿವಂಗತ ಬಂಗಾರಪ್ಪನವರ ಕುಟುಂಬದವರು ಸ್ಪರ್ಧಿಸುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರ ತೀರ್ಮಾನವೇ ಅಂತಿಮ ಎಂದು ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಹೇಳಿದ್ದಾರೆ. ನಟ ಶಿವರಾಜ್ಕುಮಾರ್ ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ತಮಗೇನೂ ಗೊತ್ತಿಲ್ಲ. ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಪಕ್ಷದ ರಾಷ್ಟ್ರಾಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರಿಗೆ ಬಿಟ್ಟ ವಿಚಾರ. ಆದರೆ ಭ್ರಷ್ಟಾಚಾರದಲ್ಲಿ ಮುಳುಗಿ ತೇಲುತ್ತಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ತೀವ್ರ ಹೋರಾಟ ನಡೆಸಿ, ಜೆಡಿಎಸ್ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ. ಆ ಬಗ್ಗೆ ಯಾವುದೇ ಅನುಮಾನ ಬೇಡ ಎಂಬ ವಿಶ್ವಾಸವನ್ನು ಗುರುವಾರ ಸುದ್ದಿಗೋಷ್ಠಿಯಲ್ಲಿ ರೇವಣ್ಣ ವ್ಯಕ್ತಪಡಿಸಿದರು. ರಾಜ್ಯಾದ್ಯಂತ 15 ಲಕ್ಷ ಬಿಪಿಎಲ್ ಬೋಗಸ್ ಕಾರ್ಡ್ಗಳಿದ್ದು, ಕಾನೂನು ಬಾಹಿರವಾಗಿ ಕಾರ್ಡ್ಗಳನ್ನು ಹೊಂದಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು. ಉದ್ಯೋಗ ಖಾತ್ರಿ ಯೋಜನೆಯಿಂದ 1 ರು. ಸಹ ಬಿಡುಗಡೆ ಮಾಡಿಲ್ಲ. ಅಡಕೆ ಮತ್ತು ತೆಂಗು ಬೆಳೆಗಾರರರು ತೀವ್ರ ಸಂಕಷ್ಟದಲ್ಲಿದ್ದು, ತೆಂಗು ನಷ್ಟದ ಬಗ್ಗೆ ಅಧ್ಯಯನ ಮಾಡಿದ ಕೇಂದ್ರ ತಂಡ ವರದಿ ಸಲ್ಲಿಸಿದ್ದರೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಕ್ರಮ ತೆಗೆದುಕೊಂಡಿಲ್ಲ ಎಂದು ಟೀಕಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

