ಗುರಿ ಸಾಧನೆಗೆ ಅಧಿಕಾರಿಗಳ ಕಾಳಜಿ ಅಗತ್ಯ
ಹಾಸನ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಉಪ ಯೋಜನೆಯಡಿ ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಕಲ್ಪಿಸಲು ನಾನಾ ಇಲಾಖೆ ಅಧಿಕಾರಿಗಳು ಕಾಳಜಿ ವಹಿಸಿ ಸೌಲಭ್ಯಗಳನ್ನು ಒದಗಿಸುವ ಮೂಲಕ ನಿಗದಿತ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಉಪ ಯೋಜನೆಯಡಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಿ ಮಾತನಾಡಿ, ಏನೇ ತೊಡಕುಗಳಿದ್ದರೂ ಅವುಗಳನ್ನು ಅಧಿಕಾರಿಗಳು ಬಗೆಹರಿಸಿ ಜನತೆಗೆ ಸೌಲಭ್ಯ ಕಲ್ಪಿಸಲು ಮುತುವರ್ಜಿ ವಹಿಸುವಂತೆ ತಿಳಿಸಿದರು. ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡುವಂತೆ ಸೂಚಿಸಿದರಲ್ಲದೆ, ಜನರ ಬಳಿಗೆ ಹೋಗಿ ಇಲಾಖೆ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಸದುಪಯೋಗಪಡಿಸಿಕೊಳ್ಳುವಂತೆ ಜನತೆಗೆ ಮನವರಿಕೆ ಮಾಡುವಂತೆ ತಿಳಿಸಿದರು. ರೇಷ್ಮೆ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಜನರಿಗೆ ಉತ್ತೇಜನ ನೀಡುವಂತೆ ಅಧಿಕಾರಿಗೆ ತಿಳಿಸಿದರಲ್ಲದೆ, ಇಲಾಖೆಯಿಂದ ದೊರಕುವ ಸವಲತ್ತು ಬಳಸಿಕೊಳ್ಳಲು ಪ್ರೋತ್ಸಾಹಿಸಬೇಕು. ಸಫಾಯಿ ಕರ್ಮಚಾರಿ ಕುಟುಂಬದ ಮಕ್ಕಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಅಂತವರನ್ನು ಗುರುತಿಸಿ ವಿದ್ಯಾರ್ಥಿ ವೇತನ ಸೌಲಭ್ಯ ಒದಗಿಸುವಂತೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗೆ ಸೂಚಿಸಿದರು. ಪ್ರವಾಸೋದ್ಯಮ ಇಲಾಖೆ ವತಿಯಿಂದ ಟ್ಯಾಕ್ಸಿ ನೀಡಲು ಅರ್ಹ ಫಲಾನುಭವಿಗಳ ಪಟ್ಟಿಯನ್ನು ಎರಡು ದಿನಗಳೊಳಗೆ ಅಂತಿಮಗೊಳಿಸುವಂತೆ ಅಧಿಕಾರಿಗೆ ಸೂಚಿಸಿದರು. ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಯುವಜನ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ನಿರ್ದೇಶನ ನೀಡಿದರು. ಪ್ರೊಬೇಷನರಿ ಐಎಎಸ್ ಅಧಿಕಾರಿ ರಾಮಚಂದ್ರ ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಕರಿಯಪ್ಪ, ಪರಪ್ಪಸ್ವಾಮಿ ಹಾಗೂ ನಾನಾ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

