ಎಂಇಎಸ್ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಿ
ಚನ್ನರಾಯಪಟ್ಟಣ: ಬೆಳಗಾವಿ ಎಂಇಎಸ್ ಶಾಸಕರು ಕನ್ನಡಿಗರ ಬಗ್ಗೆ ಕೀಳಾಗಿ ಮಾತನಾಡಿದ್ದು, ಅವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳದಿದ್ದರೆ, ಕಸಾಪ ಹಾಗೂ ಕನ್ನಡಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸುತ್ತದೆ ಎಂದು ನಿಕಟಪೂರ್ವ ಕಸಾಪ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಎಚ್ಚರಿಸಿದರು.
ಚನ್ನರಾಯಪಟ್ಟಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಕಸಾಪ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಚೆಲುವ ಚೆನ್ನುಡಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ಅವರು ನೇರವಾಗಿ ಕನ್ನಡಿಗರ ಶವಯಾತ್ರೆ ಬಗ್ಗೆ ಮಾತನಾಡಿರುವುದು ಕನ್ನಡಿಗರಿಗೆ ಮಾಡಿದ ಅಪಮಾನವಾಗಿದ್ದು, ಈ ಬಗ್ಗೆ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಎರಡು ಸದನಗಳಲ್ಲಿ ಚರ್ಚಿಸಿ ಕಾನೂನು ಕ್ರಮ ತೆಗೆದುಕೊಳ್ಳದಿದ್ದರೆ ಕಸಾಪ ಹಾಗೂ ಕನ್ನಡ ಪರ ಸಂಘಟನೆಗಳು ಭುಗಿಲೆದ್ದು ಧರಣಿ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಕನ್ನಡದ ನೆಲ, ಜಲ ಹಾಗೂ ಸಂಸ್ಕೃತಿ ಕುರಿತು ಯಾರೆಯಾಗಲೀ ಕೀಳಾಗಿ ಕಂಡರೆ ಸರ್ಕಾರ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು. ಸರ್ಕಾರ ಸುಮ್ಮನಿದ್ದರೂ ಸಂಘಟನೆಗಳು ಮಾತ್ರ ಅದನ್ನು ಸಹಿಸುವುದಿಲ್ಲ. ಬೀದಿಗಿಳಿದು ಹೋರಾಟ ಕೈಗೊಂಡು ಕನ್ನಡಿಗರ ಸ್ವಾಭಿಮಾನವನ್ನು ತೋರಿಸುತ್ತೇವೆ ಎಂದು ತಿಳಿಸಿದರು.
ಕರ್ನಾಟಕ ಏಕೀಕರಣಕ್ಕಾಗಿ ಕೆಲವರು ತಮ್ಮ ಪ್ರಾಣವನ್ನು ನೀಡಿ ಅಖಂಡ ಕರ್ನಾಟಕ ಕಟ್ಟಿದ್ದಾರೆ. ಅದನ್ನು ಒಡೆಯುವ ಹಾಗೂ ಕರ್ನಾಟಕಕ್ಕೆ ಅಪಮಾನ ಮಾಡುವ ಮಾತನ್ನು ಮುಂದಿನ ದಿನಗಳಲ್ಲಿ ಯಾರೇ ಪ್ರಸ್ತಾಪಿಸಿದರೂ ಅವರಿಗೆ ಸಾರ್ವಜನಿಕವಾಗಿ ಶಿಕ್ಷೆ ಖಚಿತವಾಗಿದೆ ಎಂದು ತಿಳಿಸಿದರು.
ಆದಿಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಆಶೀರ್ವಚನ ನೀಡಿ, ಕನ್ನಡ ಸಾಹಿತ್ಯವನ್ನು ಮನೆ ಮನೆಗೆ ತಲುಪಿಸಿ ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ತಿಳಿಸಿದರು.
ತಾಂತ್ರಿಕ ಹಾಗೂ ಶೈಕ್ಷಣಿಕ ಮಾಹಿತಿಯುಳ್ಳ ಕಿರುಚಿತ್ರಗಳ ಧ್ವನಿಗಳನ್ನು ಕನ್ನಡಕ್ಕೆ ಅನುವಾದಿಸಿ ಅವುಗಳಲ್ಲಿನ ಸಾರವನ್ನು ಕನ್ನಡದಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಕಲ್ಪಿಸಿದರೆ ಅವರುಗಳು ಉನ್ನತ ತಂತ್ರಗಾರಿಕೆಯ ಮಾಹಿತಿಯನ್ನು ಪಡೆಯಲು ಅನುಕೂಲಕರವಾಗುತ್ತದೆ. ಈ ನಿಟ್ಟಿನಲ್ಲಿ ಕಸಾಪ ರಾಜ್ಯ ಸರ್ಕಾರಕ್ಕೆ ಒತ್ತಾಯ ತರಬೇಕು ಎಂದು ತಿಳಿಸಿದರು.
ಜಿಪಂ ಅಧ್ಯಕ್ಷೆ ಅಂಬಿಕಾ ರಾಮಕೃಷ್ಣ, ತಾಪಂ ಅಧ್ಯಕ್ಷೆ ಹೇಮಾವತಿ, ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಜನಾರ್ದನ್, ಜಿಪಂ ಸದಸ್ಯರಾದ ಕುಸುಮಾ ಬಾಲಕೃಷ್ಣ, ದೇವಿಕಾ ಪ್ರಕಾಶ್, ತಾಪಂ ಉಪಾಧ್ಯಕ್ಷೆ ಶಿಲ್ಪಾ ಶ್ರೀನಿವಾಸ್, ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಉದಯರವಿ, ತಾಲೂಕು ಕಸಾಪ ಅಧ್ಯಕ್ಷ ಎಚ್.ಎನ್. ಲೋಕೇಶ್, ತಹಸೀಲ್ದಾರ್ ಡಾ. ನಾಗರಾಜು, ಬಿಜೆಪಿ ಮುಖಂಡ ಪಟೇಲ್ ಮಂಜುನಾಥ್, ತಾಲೂಕು ಸರ್ಕಾರಿ ನೌಕರರ ಸಂಘಧ ಅಧ್ಯಕ್ಷ ಮೋಹನ್ಕುಮಾರ್, ತಾಲೂಕು ಕಸಾಪ ಕಾರ್ಯದರ್ಶಿಗಳಾದ ಶಿವರಾಂ, ಶಿವನಗೌಡ ಪಾಟೀಲ್ ಇದ್ದರು.
ಈ ಸಂದರ್ಭದಲ್ಲಿ ಕನ್ನಡದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು, ರಾಜ್ಯೋತ್ಸವ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸತ್ಕರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

