ಗಾಂಧಿ ಕನಸು ಇನ್ನೂ ನನಸಾಗಿಲ್ಲ
ಕ.ಪ್ರ.ವಾರ್ತೆ ಹೊಳೆನರಸೀಪುರ ಅ.2
ಮಹಾತ್ಮ ಗಾಂಧೀಜಿಯವರ ಕನಸಿನ ಗ್ರಾಮಗಳ ಉದ್ಧಾರ ಇನ್ನೂ ಯಾವುದೇ ಸರ್ಕಾರಗಳಿಂದಲೂ ಸಾಧ್ಯವಾಗಿಲ್ಲ. ಗಾಂಧೀಜಿ ಕನಸು ನನಸು ಮಾಡದ ಸರ್ಕಾರಗಳಿಂದಾಗಿ ಬಡಜನರನ್ನು ಬಡತನ ರೇಖೆಯಿಂದ ಮೇಲೆತ್ತುವ ಕಾರ್ಯ ಇನ್ನೂ ಸಾಧ್ಯವಾಗಿಯೇ ಇಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ವಿಷಾದಿಸಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಜಿಲ್ಲಾ ಪಂಚಾಯ್ತಿ ಕೈಗೊಂಡಿರುವ ತಾಲೂಕಿನ ಆಯ್ದ ಕೆರೆಗಳ ಪುನಶ್ಚೇತನ ಮತ್ತು ಅಭಿವೃದ್ಧಿ ಕಾಮಗಾರಿಗೆ ಬುಧವಾರ ತಾಲೂಕಿನ ಹರಿಹರಪುರ ಗ್ರಾಮದ ಅರಸೂರು ಕೆರೆಯಂಗಳದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ನಾಲ್ಕು ತಿಂಗಳು ಕಳೆದರೂ, ಇಂದಿಗೂ ಬಡಜನರಿಗೆ ಬಿಪಿಎಲ್ ಕಾರ್ಡ್ಗಳನ್ನು ಸಮರ್ಪಕವಾಗಿ ವಿತರಿಸಲಾಗಿಲ್ಲ ಎಂದು ದೂರಿದರು.
ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಇಂದಿಗೂ ಬಡತನ ರೇಖೆಗಿಂತಲೂ ಕೆಳಗಿರುವ ಶೇ.65ರಷ್ಟು ಜನರನ್ನು ಮುಖ್ಯವಾಹಿನಿಗೆ ತರುವ ಕಾರ್ಯ ಸರ್ಕಾರಗಳಿಂದ ಸಾಧ್ಯವಾಗಿಲ್ಲ. ಇಂಧನ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ರಾಮೀಣ ಭಾಗಗಳಲ್ಲಿ ಕೆಟ್ಟು ನಿಂತಿರುವ ವಿದ್ಯುತ್ ಪರಿವರ್ತಕಗಳನ್ನು ಬದಲಿಸಿ ಸಮರ್ಪಕವಾಗಿ ವಿದ್ಯುತ್ ನೀಡಲು ಸಾಧ್ಯವಾಗಿಲ್ಲ ಎಂದು ರಾಜ್ಯ ಸರ್ಕಾರದ ಕಾರ್ಯವೈಖರಿ ವಿರುದ್ಧ ಕಿಡಿಕಾರಿದರು.
ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಸುಮಾರು 4.30 ಕೋಟಿ ರು. ವೆಚ್ಚದಲ್ಲಿ ತಾಲೂಕಿನ ವ್ಯಾಪ್ತಿಯಲ್ಲಿರುವ 56 ಕೆರೆಗಳ ಅಭಿವೃದ್ಧಿ ಹಾಗೂ ಪುನಶ್ಚೇತನ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಈ ಯೋಜನೆಯಡಿಯಲ್ಲಿ 25ಎಕರೆಯಷ್ಟು ವ್ಯಾಪ್ತಿಯನ್ನು ಹೊಂದಿರುವ ಕೆರೆಗಳ ತೂಬು, ಕೋಡಿ ಹಾಗೂ ಸೋಪಾನಕಟ್ಟೆಗಳ ದುರಸ್ತಿ ಹಾಗೂ ಅಭಿವೃದ್ಧಿ ಕೈಗೊಳ್ಳಲಾಗುವುದು. ಅಲ್ಲದೆ ಕೆರೆಗಳಿಗೆ ನೀರು ಅಕ್ಕ ಪಕ್ಕದ ಕಾಲುವೆಗಳಿಂದ ಸರಾಗವಾಗಿ ಹರಿದುಬರುವಂತೆ ಮಾಡಲು ಅಗತ್ಯ ಕಾಮಗಾರಿಗಳನ್ನು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಎಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ರಾಷ್ಟ್ರೀಯ ಕುಟುಂಬ ಯೋಜನೆಯಡಿಯಲ್ಲಿ ಪತಿ ಮೃತಪಟ್ಟಲ್ಲಿ ಪತ್ನಿಗೆ ನೀಡಲಾಗುತ್ತಿದ್ದ 10 ಸಾವಿರ ರು. ಸಹಾಯಧನವನ್ನು ನಂತರದಲ್ಲಿ ಅಧಿಕಾರಕ್ಕೆ ಬಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಳೆದ 10 ವರ್ಷಗಳಿಂದಲೂ ನೀಡದೇ ಇರುವುದನ್ನು ಕಂಡರೆ ಈ ಸರ್ಕಾರಗಳು ಪಾಪರ್ ಆಗಿವೆಯೇ ಎಂಬ ಅನುಮಾನ ಮೂಡುತ್ತದೆ ಎಂದು ಕೇಂದ್ರ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ತಾಪಂ ಅಧ್ಯಕ್ಷೆ ಕೆ.ಎಂ.ಪುಷ್ಪಾಗೌಡೇಗೌಡ, ಉಪಾಧ್ಯಕ್ಷ ನಂಜುಡಪ್ಪ, ತಾಪಂ ಇಓ ತಮ್ಮಣ್ಣಗೌಡ, ಜಿಪಂ ಎಇಇ ಸತೀಶ್ಬಾಬು, ತಾಪಂ ಸದಸ್ಯರಾದ ಶಶಿಕಲಾ ಕುಸುಮ, ಕೆ.ಎಂ.ಚಂದ್ರಮತಿ, ಭಾಗ್ಯವತಿ, ಕೆ.ಕೆ.ಲೋಕೇಶ್, ಜೆಡಿಎಸ್ ಮುಖಂಡ ಎಚ್.ಜೆ.ರಾಮೇಗೌಡ, ಶಿವರಾಜ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

