ನಗರಸಭೆಯಾಗಿ ಅರಸೀಕೆರೆ ಪುರಸಭೆ
ಕನ್ನಡಪ್ರಭ ವಾರ್ತೆ ಅರಸೀಕೆರೆ ಅ. 6
ಪಟ್ಟಣ ಪುರಸಭೆಯನ್ನು ಶೀಘ್ರವೇ ನಗರಸಭೆಯನ್ನಾಗಿ ಪರಿವರ್ತಿಸಲು ಚಿಂತನೆ ನಡೆಸಲಾಗಿದೆ ಎಂದು ಪೌರಾಡಳಿತ ಸಚಿವ ಕಮರುಲ್ಲಾ ಇಸ್ಲಾಂ ತಿಳಿಸಿದರು.
ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುವ ಮಾರ್ಗಮಧ್ಯೆ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಪಟ್ಟಣದ ವ್ಯಾಪ್ತಿಯಲ್ಲಿ 50 ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆಯಿದ್ದು ಇದನ್ನು ನಗರಸಭೆಯನ್ನಾಗಿ ಮಾರ್ಪಡಿಸಲು ಒತ್ತಾಯ ಬಂದಿದ್ದು ಮುಂದಿನ ದಿನಗಳಲ್ಲಿ ನಗರಸಭೆಯನ್ನಾಗಿ ಪರಿವರ್ತಿಸಲು ಚಿಂತನೆ ನಡೆದಿದೆ. 2011ರ ಜನಗಣತಿಯಂತೆ ಈ ಪ್ರಕ್ರಿಯೆ ಆರಂಭಿಸಲಾಗುವುದು. ಪಟ್ಟಣಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಹೇಳಿದರು.
ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಸೇರಿದಂತೆ ನಾನಾ ಸ್ಥಳಿಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರನ್ನು ಶೀಘ್ರವೇ ಕಾಯಂಗೊಳಿಸುವ ಕುರಿತಂತೆ ಚಿಂತನೆ ನಡೆಸಲಾಗಿದೆ.
ಪೌರಾಡಳಿತ ಇಲಾಖೆ ವ್ಯಾಪ್ತಿಗೆ ಬರುವ ಪುರಸಭೆ, ನಗರಸಭೆ ಸೇರಿದಂತೆ ವಿವಿಧ ಸ್ಥಳಿಯ ಸಂಸ್ಥೆಗಳಲ್ಲಿ ಈವರೆಗೂ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಕಾಯಂಗೊಳಿಸುವ ಕುರಿತಂತೆ ಆಲೋಚನೆ ನಡೆಸಲಾಗಿದೆ. ಕೆಲ ವರ್ಷಗಳಿಂದ ಈ ಬೇಡಿಕೆ ನೆನೆಗುದಿಗೆ ಬಿದ್ದಿದ್ದು ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.
ಹಿಂದಿನ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣಕ್ಕೆ ಕೇವಲ ನಾಲ್ಕುನೂರು ಕೋಟಿ ಅನುದಾನ ಮೀಸಲಿಟ್ಟಿತ್ತು. ಕಾಂಗ್ರೆಸ್ ಸರ್ಕಾರ ಈ ಅನುದಾನವನ್ನು ಒಂದು ಸಾವಿರ ಕೋಟಿಗೆ ಹೆಚ್ಚಿಸಿದೆ.
ಇದು ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದ ಅವರು ಸರ್ಕಾರದ ಯೋಜನೆಗಳನ್ನು ಸಮುದಾಯದ ಸದಸ್ಯರ ಮನೆಯ ಬಾಗಿಲಿಗೆ ತಲುಪಿಸುವ ಕಾರ್ಯ ಯಶಸ್ವಿಗೊಳಿಸಿ ಪಕ್ಷ ಬಲವರ್ಧನೆಗೆ ಆದ್ಯತೆ ನೀಡಬೇಕೆಂದು ಸಲಹೆ ನೀಡಿದರು.
ಅಲ್ಪಸಂಖ್ಯಾತ ಸಮುದಾಯದ ಎರಡು ಸಾವಿರ ಯುವಕರಿಗೆ ಟ್ಯಾಕ್ಸಿ ಖರೀದಿಸಲು ತಲಾ 2 ಲಕ್ಷ ರು. ಅನುದಾನ ನೀಡುವ ಸರ್ಕಾರದ ಕಾರ್ಯಸೂಚಿ ಉತ್ತಮವಾಗಿದೆ. ಬರಲಿರುವ ದಿನಗಳಲ್ಲಿ ಈ ಸೌಲಭ್ಯವನ್ನು ಇನ್ನಷ್ಟು ಯುವಕರಿಗೆ ಉಪಯೋಗವಾಗುವಂತೆ ವಿಸ್ತರಿಸಿ ಅವರ ಆರ್ಥಿಕ ಮಟ್ಟವನ್ನು ಸುಧಾರಿಸುವ ಸಲುವಾಗಿ ಈ ಯೋಜನೆ ರೂಪಿಸಲಾಗಿದೆ ಎಂದು ನುಡಿದರು.
ಇದೇ ವೇಳೆ ಸ್ಥಳಿಯ ಸಂಸ್ಥೆಗಳ ಮೀಸಲಾತಿ ನಿಗದಿಯಲ್ಲಿ ಜಾತ್ಯಾತೀತ ಜನತಾದಳದ ವರಿಷ್ಟರು ಹಸ್ತಕ್ಷೇಪ ನಡೆಸಿದ್ದಾರೆ ಎಂಬ ವದಂತಿಯ ಬಗ್ಗೆ ಉತ್ತರಿಸಲು ನಿರಾಕರಿಸಿದರು.
ಪುರಸಭಾ ಮಾಜಿ ಉಪಾಧ್ಯಕ್ಷ ಅಬ್ದುಲ್ಜಮೀಲ್, ಯುವ ಅಧ್ಯಕ್ಷ ವಿಜಯಕುಮಾರ್, ಹಿಂದುಳಿದ ವರ್ಗಗಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಟೇಲ್ ಶಿವಪ್ಪ, ದುಮ್ಮೇನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಜಯ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಜೀಗೆರೆ ಚಂದ್ರಶೇಖರ್, ನಗರ ಉಪಾಧ್ಯಕ್ಷ ಮಂಜು, ಯೂನಸ್, ಕೋಡಿಹಳ್ಳಿ ರಘು, ಜಗದೀಶ್, ಗೀಜಿಹಳ್ಳಿ ಬಾಬು, ಅಯೂಬ್, ಸಾಹಿಬ್ಖಾನ್ ಇನ್ನೂ ಮೊದಲಾದವರು ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

