ಹಾಸನ

ಗಣ್ಯರು ಬಂದಾಗಷ್ಟೇ ಗುಂಡಿ ಮುಚ್ಚುವ ಕಾಯಕ

Published On :

ಕನ್ನಡಪ್ರಭ ವಾರ್ತೆ೤ ಹಾಸನ೤ ಅ. 7
ಮುಖ್ಯಮಂತ್ರಿ ಸಿದ್ದರಾಮಯ್ಯ ಅ.8 ರಂದು ನಗರಕ್ಕೆ ಆಗಮಿಸಲಿದ್ದು, ಕೆಡಿಪಿ ಸಭೆ, ಕಾಂಗ್ರೆಸ್ ಸಭೆ ಮತ್ತು ಜನತಾದರ್ಶನದಲ್ಲಿ ಭಾಗವಹಿಸುವರು. ಆದಕ್ಕಾಗಿ ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ನಡೆಸಿದೆ.
ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್, ಮುಖ್ಯಮಂತ್ರಿಯವರು ಪಾಲ್ಗೊಳ್ಳುವ ಜನತಾ ದರ್ಶನ ಹಾಗೂ ನಾನಾ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಗೆ ಮಾಡಿಕೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.
ಮುಖ್ಯಮಂತ್ರಿಗಳು ಮೈಸೂರಿನಿಂದ ರಸ್ತೆ ಮಾರ್ಗವಾಗಿ ಬೆಳಿಗ್ಗೆ 11 ಗಂಟೆಗೆ ಹಾಸನಕ್ಕೆ ಆಗಮಿಸಿ ಹಾಸನಾಂಬ ಕಲಾಮಂದಿರದಲ್ಲಿ ಜನತಾ ದಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ.  ಅದಕ್ಕಾಗಿ ಜಿಲ್ಲಾಡಳಿತ ವಿಶೇಷ ವ್ಯವಸ್ಥೆಗಳನ್ನು ಮಾಡಿಕೊಂಡಿದೆ.
ಮುಖ್ಯಮಂತ್ರಿಯವರಿಗೆ ಅಹವಾಲು ಸಲ್ಲಿಸಲು ಆಗಮಿಸುವ ಅಂಗವಿಕಲರು, ವಯೋವೃದ್ಧರಿಗೆ ಗಾಲಿ ಖುರ್ಚಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಸ್ವೀಕರಿಸಿದ ಅರ್ಜಿಗಳ ಗಣಕೀಕರಣ, ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ ನೀಡಿ ಅದಕ್ಕಾಗಿ ಪ್ರತ್ಯೇಕ ತಂಡಗಳನ್ನು ರಚಿಸಿದ್ದಾರೆ.
ಅದೇ ರೀತಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಧ್ಯಾಹ್ನ 3 ಕ್ಕೆ ನಡೆಯುವ ಪ್ರಗತಿ ಪರಿಶೀಲನಾ ಸಭೆಗೂ ಎಲ್ಲಾ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪಸಿಂಗ್ ನೇತೃತ್ವದಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ.
ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್, ಜಿಲ್ಲಾ ಎಸ್ಪಿ ರವಿ ಚನ್ನಣ್ಣನವರ್, ಅಪರ ಜಿಲ್ಲಾಧಿಕಾರಿ ಡಾ. ಗೋಪಾಲಕೃಷ್ಣ, ಐಎಎಸ್ ಪ್ರೊಬೇಷನರಿ ಅಧಿಕಾರಿ ರಾಮಚಂದ್ರ ಜಿಲ್ಲಾಧಿಕಾರಿ ಕಚೇರಿ ಸಹಾಯಕ ಅಧಿಕಾರಿ ರಂಜಿತ, ತೋಟಗಾರಿಕಾ ಉಪನಿರ್ದೇಶಕ ಶಕೀಲ್ ಅಹಮದ್, ನಗರಸಭಾ ಆಯುಕ್ತ ನಾಗಭೂಷಣ್ ಮತ್ತಿತರರು ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದರು.
ಸಿಎಂ ನಗರಕ್ಕೆ ಬರುವ ಹಿನ್ನೆಲೆಯಲ್ಲಿ ರಸ್ತೆಯ ಯಾವ ಭಾಗದಲ್ಲಿ ಹೆಚ್ಚು ಗುಂಡಿ ಬಿದ್ದಿದೆ ಹಾಗೂ ಯಾವ ರಸ್ತೆಯಲ್ಲಿ ಸಿಎಂ ಪ್ರಯಾಣಿಸುತ್ತಾರೆ ಅಂತಹ ಜಾಗವನ್ನು ಗುರುತಿಸಿ ತರಾತುರಿಯಲ್ಲಿ ಮುಚ್ಚಲಾಗುತ್ತಿದೆ.
ಗುಂಡಿಮಯವಾಗಿರುವ ಹೊಳೆನರಸೀಪುರ ರಸ್ತೆ ಮತ್ತು ಬಿ.ಎಂ. ರಸ್ತೆಗಳ ಗುಂಡಿಗಳನ್ನು ಮುಚ್ಚುವ ಕಾಮಗಾರಿ ತರಾತುರಿಯಲ್ಲಿ ನಡೆಯುತ್ತಿದ್ದು, ಸಂತೆ ಹೊತ್ತಿಗೆ ಮೂರು ಮೊಳ ನೇಯ್ದದಂತೆ ಸಿಎಂ ಬಂದು ಹೋಗುವ ಕಾಣರ ಲಕ್ಷಾಂತರ ರು. ವೆಚ್ಚದಲ್ಲಿ ತಾತ್ಕಾಲಿಕವಾಗಿ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ಹೀಗೆ ಗುಂಡಿ ಮುಚ್ಚುತ್ತಿರುವುದು ಇದೇನೂ ಮೊದಲ ಬಾರಿಯಲ್ಲ. ಹಿಂದೆ ಉಸ್ತುವಾರಿ ಸಚಿವರು ಬಂದಾಗಲೂ ಗುಂಡಿ ಮುಚ್ಚಲಾಗಿತ್ತು. ಒಂದು ತಿಂಗಳಲ್ಲಿ ಮತ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ಇದೆಲ್ಲ ಸಿಎಂ ಆಗಮಿಸುತ್ತಾರೆ ಎಂಬ ಕಾರಣಕ್ಕಾಗಿ ಮಾತ್ರ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.