ಗ್ರಾಪಂ ಕಚೇರಿಗೆ ಬೀಗ ಹಾಕಿ ಫಲಾನುಭವಿಗಳ ಪ್ರತಿಭಟನೆ
ಚನ್ನರಾಯಪಟ್ಟಣ: ಬಸವ ವಸತಿ ಯೋಜನೆಯಲ್ಲಿ ಮಂಜೂರಾಗಿರುವ ಮನೆಗಳಿಗೆ ಬಿಲ್ ನೀಡುವಲ್ಲಿ ತಾರತಮ್ಯ ಮಾಡುತ್ತಿದ್ದಾರೆಂದು ಆರೋಪಿಸಿ ಫಲಾನುಭವಿಗಳು ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟಿಸಿದರು.
ತಾಲೂಕಿನ ದಿಂಡಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಂಡಗೂರು ಗ್ರಾಮದಲ್ಲಿನ ಫಲಾನುಭವಿಗಳಿಗೆ 126 ಮನೆಗಳು ಮಂಜೂರಾಗಿದ್ದು, ಸರ್ಕಾರದಿಂದ 50ಕ್ಕೂ ಹೆಚ್ಚು ಮನೆಗಳಿಗೆ ಸರ್ಕಾರ ಪ್ರಥಮ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದರೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ತಮಗೆ ಬೇಕಾದವರಿಗೆ ಮಾತ್ರ ಬಿಲ್ ಬರೆಸಿ ಚೆಕ್ಗೆ ಸಹಿ ಹಾಕಿ ತಾರತಮ್ಯ ಎಸಗುತ್ತಿದ್ದಾರೆಂದು ಆರೋಪಿಸಿ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರು ಕಾಂಗ್ರೆಸ್ ಬೆಂಬಲಿತರಾಗಿದ್ದು, ಗ್ರಾಮದ 126 ಮಂದಿ ಫಲಾನುಭವಿಗಳು ಅಗತ್ಯ ದಾಖಲಾತಿ ನೀಡಿದ್ದರೂ ಯಾರು ಕಾಂಗ್ರೆಸ್ ಪಕ್ಷದವರಾಗಿದ್ದಾರೆ ಎಂಬುದನ್ನು ಗುರುತಿಸಿ ಆ ಫಲಾನುಭವಿಗಳಿಗೆ ಮಾತ್ರ ಚೆಕ್ ನೀಡುತ್ತಿದ್ದಾರೆಂದು ಆರೋಪಿಸಿದರು.
ಸಾಲ ಮಾಡಿ ಮನೆಗಳನ್ನು ಕಟ್ಟಲು ಸಾಮಾಗ್ರಿಗಳನ್ನು ಖರೀದಿಸಿದ ಫಲಾನುಭವಿಗಳು ತಮಗೆ ಬಿಲ್ ನೀಡಲು ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ 50ಕ್ಕೂ ಹೆಚ್ಚು ಫಲಾನುಭವಿಗಳು ಸೋಮವಾರ ಬೆ.10ಕ್ಕೆ ಕಚೇರಿ ಬಳಿ ಗಂಟೆಗಟ್ಟಲೇ ಕಾದರೂ ಯಾವ ಅಧಿಕಾರಿಗಳು ಬಾರದ ಕಾರಣ ತಮ್ಮ ಆಕ್ರೋಶ ವ್ಯಕ್ತಪಡಿಸಿ ತಮ್ಮ ಮನೆಗಳಿಗೆ ಬಿಲ್ ನೀಡದಿದ್ದರೆ ತಾಲೂಕು ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸುವುದಾಗಿ ಎಚ್ಚರಿಸಿದರು.
ನಂತರ ಗ್ರಾಮ ಪಂಚಾಯಿತಿಗೆ ಆಗಮಿಸಿದ ಪ್ರಭಾರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ಫಲಾನುಭವಿಗಳ ಅಳಲನ್ನು ಆಲಿಸಿ ಸರ್ಕಾರದಿಂದ ಬಂದಿರುವಷ್ಟು ಹಣವನ್ನು ಫಲಾನುಭವಿಗಳಿಗೆ ನೀಡುವಲ್ಲಿ ಮುಂದಾಗುವುದಾಗಿ ತಿಳಿಸಿದರು.
ಗ್ರಾಮ ಪಂಚಾಯಿತಿ ಪಿಡಿಒ ಅವರು ಹಾಸನದಲ್ಲಿನ ಸಭೆಗೆ ಹೋಗಿದ್ದು, ಕಾರ್ಯದರ್ಶಿ ಬೇರೆಡೆಗೆ ವರ್ಗಾವಣೆಯಾಗಿದ್ದಾರೆ. ಹಾಗಾಗಿ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

