ವಿದ್ಯಾರ್ಥಿಗಳು, ಗ್ರಾಮಸ್ಥರಿಂದ ರಸ್ತೆ ತಡೆ
ಆಲೂರು: ತಾಲೂಕಿನ ಬಿಕ್ಕೋಡು ರಸ್ತೆಯ ತಾಳೂರು ಬಳಿ ಸಾರಿಗೆ ಬಸ್ಸೊಂದು ಮೋರಿಯನ್ನು ದಾಟುವಾಗ ಬಸ್ನ ಬಾಗಿಲು ಕಳಚಿ ಬಿದ್ದು, ಇಬ್ಬರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಹಾಗೂ ಸುತ್ತಮುತ್ತಲ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಸೋಮವಾರ ಪ್ರತಿಭಟನೆ ನಡೆಸಿದರು.
ಬೆಳಗ್ಗೆ 9 ಗಂಟೆ ಸಮಯದಲ್ಲಿ ಸಕಲೇಶಪುರದಿಂದ ಹಾಸನಕ್ಕೆ ಬರುತ್ತಿದ್ದ ಬಸ್ ಬಿಕ್ಕೋಡು ರಸ್ತೆಯಲ್ಲಿ ಕಾಮಗಾರಿ ಪ್ರಾರಂಭವಾಗಿ ವರ್ಷಗಳೇ ಕಳೆದರೂ ಇನ್ನೂ ಪೂರ್ಣಗೊಂಡಿರದ ಮೋರಿಯನ್ನು ದಾಟುವಾಗ ಮೋರಿ ಬದಿಗೆ ಡಿಕ್ಕಿ ಹೊಡೆದು ಬಸ್ ಬಾಗಿಲು ಕಳಚಿ ರಸ್ತೆಗೆ ಬಿದ್ದಿದೆ. ಬಾಗಿಲ ಬಳಿ ನಿಂತಿದ್ದ ಅಳುವಳ್ಳಿ ಗ್ರಾಮದ ಬಿಕಾಂ ಪದವಿ ವಿದ್ಯಾರ್ಥಿಗಳಾದ ಪ್ರತಾಪ್ ಹಾಗೂ ಸಿದ್ದಾಪುರ ಗ್ರಾಮದ ವಿನಯ್ ಕೆಳಕ್ಕೆ ಹಾರಿ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಆಕ್ರೋಶಗೊಂಡ ಸ್ಥಳದಲ್ಲಿ ಜಮಾಯಿಸಿದ ಗ್ರಾಮಸ್ಥರು ರಸ್ತೆ ತಡೆ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಣತೂರು ಗ್ರಾಪಂ ಅಧ್ಯಕ್ಷ ನಟರಾಜ್ ಮಾತನಾಡಿ, ರಸ್ತೆ ಕಾಮಗಾರಿ ಆರಂಭವಾಗಿ ವರ್ಷಗಳೇ ಕಳೆದರೂ ಆಮೆಗತಿಯಿಂದ ಸಾಗುತ್ತಿರುವ ಕಾರಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ.
ಪರಿಣಾಮ ಪದೇ ಪದೇ ಇಂಥ ಅಪಘಾತಗಳು ಸಂಭವಿಸಲು ಕಾರಣವಾಗಿದೆ. ಶೀಘ್ರವಾಗಿ ರಸ್ತೆ ದುರಸ್ತಿ ಮಾಡುವಂತೆ ಒತ್ತಾಯಿಸಿ ಹಲವಾರು ಬಾರಿ ಪ್ರತಿಭಟನೆ ಮಾಡಿದ್ದರೂ ಪ್ರಯೋಜನವಾಗಿಲ್ಲ. ಇದಕ್ಕೆ ಅಧಿಕಾರಿಗಳ ದಿವ್ಯ ನಿರ್ಲಕ್ಷವೇ ಕಾರಣವೆಂದು ದೂರಿದರು.
ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಶಾರದಾಂಬ ಪ್ರತಿಭಟನಕಾರರ ಮನವೊಲಿಸಿ ಶೀಘ್ರ ಕಾಮಗಾರಿ ಆರಂಭಿಸುವ ಭರವಸೆ ನೀಡಿದ ನಂತರ ಗ್ರಾಮಸ್ಥರು ಪ್ರತಿಭಟನೆಯನ್ನು ಹಿಂಪಡೆದರು. ಕುಮಾರಸ್ವಾಮಿ, ಪಿ.ಐ.ಗುರುರಾಜ್, ಇ.ಇ.ಪುಟ್ಟಸ್ವಾಮಿ, ವಿದ್ಯಾರ್ಥಿ ಮುಖಂಡ ಮಧು ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

