ಹಾಸನ ಜಿಲ್ಲೆ ಅಭಿವೃದ್ಧಿಗೆ ಬಿಜೆಪಿ,ಕಾಂಗ್ರೆಸ್ ಸರ್ಕಾರ ತಾರತಮ್ಯ
ಕನ್ನಡಪ್ರಭ ವಾರ್ತೆ, ಬೆಂಗಳೂರು, ಅ.9
ರಾಜ್ಯದಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳು ಹಾಸನ ಜಿಲ್ಲೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯವೆಸಗುತ್ತಿವೆ ಎಂದು ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಆರೋಪಿಸಿದ್ದಾರೆ.
ಸರ್ಕಾರಗಳ ತಾರತಮ್ಯಗಳ ಬಗ್ಗೆ ಇದುವರೆಗೆ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳಿಗೆ ಕಳೆದ ಆರು ವರ್ಷದಿಂದ 19 ಪತ್ರಗಳನ್ನು ಬರೆಯಲಾಗಿದೆ. ಆದರೆ, ಯಾವುದಕ್ಕೂ ಸ್ಪಂದನೆ ಸಿಕ್ಕಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಪತ್ರ ಬರೆಯಲಾಗಿದ್ದು, ಅವರು ಕೂಡ ಸ್ಪಂದಿಸದಿದ್ದಲ್ಲಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳು ಕಳೆದರೂ ಅಭಿವೃದ್ಧಿ ಕೆಲಸಗಳು ಆರಂಭವಾಗಿಲ್ಲ. ಅನೇಕ ಇಲಾಖೆಗಳಲ್ಲಿ ಬಜೆಟ್ ಅನುದಾನವೇ ಬಳಕೆಯಾಗಿಲ್ಲ. ಪ್ರಮುಖವಾಗಿ ಗಂಗಾ ಕಲ್ಯಾಣ ಯೋಜನೆಯಡಿ 2012- 13ನೇ ಸಾಲಿನ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದರು.ಹಾಸನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತು ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದೆ.
ಕಾಮಗಾರಿ ನಿರ್ವಹಣೆಗೆ ಏಜನ್ಸಿ ನಿಗದಿಪಡಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ಐದು ವರ್ಷ ಹಿಂದೆಯೇ ಪೂರ್ಣಗೊಂಡಿದೆ. ಆದರೆ, ಇದುವರೆಗೆ ಕಾಮಗಾರಿಗೆ ಚಾಲನೆ ಸಿಕ್ಕಿಲ್ಲ. ಹಾಸನ- ಬೆಂಗಳೂರು ರೇಲ್ವೆ ಮಾರ್ಗ ನಿರ್ಮಾಣದಲ್ಲೂ ವಿಳಂಬ ಮಾಡಲಾಗುತ್ತಿದೆ ಎಂದು ದೂರಿದರು.ರಸ್ತೆಗಳ ದುರಸ್ತಿ ಮತ್ತು ಅಭಿವೃದ್ಧಿ, ಪಶುವೈದ್ಯ ಕಾಲೇಜು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಮೂಲ ಸೌಕರ್ಯ... ಹೀಗೆ ಎಲ್ಲಾ ರಂಗದಲ್ಲೂ ಹಾಸನ ಜಿಲ್ಲೆಯನ್ನು ನಿರ್ಲಕ್ಷಿಸಲಾಗಿದೆ ಎಂದು ಮಾಜಿ ಸಚಿವ ರೇವಣ್ಣ ಆಪಾದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

