ಹಾಸನ

ಆ್ಯಂಬುಲೆನ್ಸ್ ಬಳಕೆ ಮಾಹಿತಿ ಮಾಯ: ಲೋಕಾ ಡಿವೈಎಸ್ಪಿ ಆಕ್ಷೇಪ

Published On :

ಅರಕಲಗೂಡು: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿನ ಆ್ಯಂಬುಲೆನ್ಸ್‌ಗಳ ಬಳಕೆ ಕುರಿತು ನಿಯಮಬದ್ಧವಾಗಿ ಮಾಹಿತಿಯನ್ನು ದಾಖಲಿಸಿಲ್ಲದ ಬಗ್ಗೆ ಲೋಕಾಯುಕ್ತ ಡಿವೈಎಸ್ಪಿ ಶಿವಬಸಪ್ಪ ಆಕ್ಷೇಪ ವ್ಯಕ್ತಪಡಿಸಿ, ಈ ಬಗ್ಗೆ ಸಮಗ್ರ ಮಾಹಿತಿಯನ್ನು ಕೂಡಲೇ ಸಲ್ಲಿಸುವಂತೆ ವೈದ್ಯಾಧಿಕಾರಿಗೆ ಸೂಚನೆ ನೀಡಿದರು. ಮಂಗಳವಾರ ಮಧ್ಯಾಹ್ನ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ, ಈ ಸಾಲಿನಲ್ಲಿ ಸರ್ಕಾರಿ ಆ್ಯಂಬುಲೆನ್ಸ್ ಸೇರಿದಂತೆ 108 ವಾಹನಗಳ ಬಗ್ಗೆ ಸಿಬ್ಬಂದಿಯಿಂದ ಮಾಹಿತಿ ಪಡೆಯುವ ವೇಳೆ, ಸಮರ್ಪಕವಾದ ಮಾಹಿತಿಯನ್ನು ಪುಸ್ತಕದಲ್ಲಿ ದಾಖಲು ಮಾಡಿಲ್ಲದಿರುವುದು ಕಂಡುಬಂದಿತು. ಅಲ್ಲದೆ ಕೆಲವು ವಿವರಗಳನ್ನು ವೈಟ್ನರ್ ಹಚ್ಚಿ ತಿದ್ದಲಾಗಿದೆ. ಈ ವಾಹನಗಳು ಉಚಿತವಾಗಿ ಸಾರ್ವಜನಿಕರಿಗೆ ಲಭ್ಯವಾಗಬೇಕಿದ್ದು, ಇಂತಹ ವಿವರವನ್ನು ಈ ರೀತಿ ತಿದ್ದಬೇಕೆ ಎಂದು ಸಿಬ್ಬಂದಿಯನ್ನು ಪ್ರಶ್ನಿಸಿದರು. ಹೊರ ರೋಗಿ ವಿಭಾಗದ ದಾಖಲೆಗಳನ್ನು ಕೂಡ ಇದೇ ಸಂದರ್ಭದಲ್ಲಿ ತಪಾಸಣೆ ನಡೆಸಿದ  ವೇಳೆ ಅದು ಕೂಡ ನಿಯಮವಾಗಿ ಬರೆಯಲಾಗಿಲ್ಲ. ಇಷ್ಟೊಂದು ಸಿಬ್ಬಂದಿ ಕೆಲಸ ನಿರ್ವಹಿಸುತ್ತೀರಿ, ಒಂದು ಸಣ್ಣ ಪ್ರಮಾಣದ ವಿವರಗಳನ್ನು ಬರೆಯಲು ಸಾಧ್ಯವಾಗಿಲ್ಲ. ಇದು ಸಿಬ್ಬಂದಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತೆಯನ್ನು ತೋರಿಸುತ್ತದೆ ಎಂದು ಶಿವಬಸಪ್ಪ ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಹಾಜರಿಲ್ಲ. ಈಗಿರುವ ಸಿಬ್ಬಂದಿ ಮತ್ತು ವೈದ್ಯರನ್ನು  ಕರ್ತವ್ಯ ಲೋಪದ ಬಗ್ಗೆ ಪ್ರಶ್ನಿಸುವುದು ಪ್ರಯೋಜನಕ್ಕೆ ಬಾರದು .ಮುಂದಿನ ದಿನಗಳಲ್ಲಿ ಮತ್ತೆ  ಆಸ್ಪತ್ರೆಗೆ ನಮ್ಮ ಅಧಿಕಾರಿಗಳು ಭೇಟಿ ನೀಡಿ ಇಲ್ಲಿನ ಸಮಸ್ಯೆಗಳ ಅವಲೋಕಿಸಿ ಮೇಲಧಿಕಾರಿಗಳಿಗೆ ಕರ್ತವ್ಯ ನಿರ್ಲಕ್ಷ್ಯತೆ ಬಗ್ಗೆ ಎಚ್ಚರಿಕೆ ನೀಡಲಿದ್ದಾರೆ. ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ನಿವಾರಿಸಿ ಸಾರ್ವ ಜನಿಕರಿಗೆ ಉತ್ತಮ ಚಿಕಿತ್ಸೆ ಹಾಗೂ ಸೌಲಭ್ಯಗಳನ್ನು ನೀಡಬೇಕು ಎಂದು ಅವರು ಎಚ್ಚರಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ರೇವಣ್ಣ ಹಾಗೂ ಇತರೆ ಸಿಬ್ಬಂದಿ ಹಾಜರಿದ್ದರು.
ಖಜಾನೆಗೆ ಭೇಟಿ: ಲೋಕಾಯುಕ್ತ ಡಿವೈಎಸ್ಪಿ ಶಿವಬಸಪ್ಪ ಪಟ್ಟಣದ ಮಿನಿ ವಿಧಾನಸೌಧದಲ್ಲಿನ ತಾಲೂಕು ಉಪ ಖಜಾನೆ ಅಧಿಕಾರಿ ಕಚೇರಿಗೆ ಭೇಟಿ ನೀಡಿ ಪ್ರಸಕ್ತ ಸಾಲಿನ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ನಿವೃತ್ತ, ವಿಧವಾ, ವೃದ್ಧಾಪ್ಯ ಹಾಗೂ ಸಂಧ್ಯಾ ಸುರಕ್ಷಾ ವೇತನಗಳ ಫಲಾನುಭವಿಗಳ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ತಪಾಸಣೆ ನಡೆಸಿ ಸಕಾಲದಲ್ಲಿ ವೇತನ ಪಡೆಯುವಂತೆ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪಟ್ಟಣ ವ್ಯಾಪ್ತಿಯಲ್ಲಿ ಒಟ್ಟು 57 ಮಂದಿ ಅರ್ಜಿ ಸಲ್ಲಿಸಿದ್ದು, ಇಷ್ಟು ಮಂದಿಗೂ ಕೂಡ ನವೆಂಬರ್‌ನಲ್ಲಿ ವೇತನ ದೊರೆಯಲಿದೆ. ಉಳಿದ ಇತರೆ ಕಡತಗಳು ಬಾಕಿ ಇಲ್ಲದಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು. ಖಜಾನೆ ಅಧಿಕಾರಿ ಓಂಕಾರಪ್ಪ ಹಾಜರಿದ್ದು ಮಾಹಿತಿ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.