ರು. 17.6 ಕೋಟಿ ವೆಚ್ಚದ ಏತ ನೀರಾವರಿ ಯೋಜನೆಗೆ ಚಾಲನೆ
ಚನ್ನರಾಯಪಟ್ಟಣ: ತಾಲೂಕಿನಲ್ಲಿ ನೆನೆಗುದಿಗೆ ಬಿದ್ದಿರುವ ಕಲ್ಲೆಸೋಮನಹಳ್ಳಿ ಏತ ನೀರಾವರಿ ಯೋಜನೆ ಪ್ರಾರಂಭಕ್ಕೆ ರಾಜ್ಯ ಸರ್ಕಾರ 24 ಕೋಟಿ ರು.ಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ತಾಲೂಕಿನ ಪಿ.ದಾಸಾಪುರ ಬಳಿ 17.6 ಕೋಟಿ ವೆಚ್ಚದ ನುಗ್ಗೇಹಳ್ಳಿ ಏತ ನೀರಾವರಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು ಕಲ್ಲೆಸೋಮನಹಳ್ಳಿ ಏತ ನೀರಾವರಿ ಯೋಜನೆಯಿಂದ 24 ಕ್ಕೂ ಹೆಚ್ಚು ಗ್ರಾಮಗಳಿಗೆ ಅನುಕೂಲವಾಗಲಿದೆ.
ಯೋಜನೆ ರೂಪಿಸುವ ಸಂದರ್ಭದಲ್ಲಿ ಬೇಸಿಗೆಯಲ್ಲಿ ಮಾತ್ರ ನೀರೆತ್ತಲು ಅವಕಾಶ ನೀಡಿರುವುದರಿಂದ ಬಾಗೂರು ನವಿಲೆ ಸುರಂಗ ಮಾರ್ಗದಲ್ಲಿ ಬೇಸಿಗೆ ಕಾಲದಲ್ಲಿ ನೀರು ಹರಿಯದ ಕಾರಣ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ತಿಳಿಸಿದರು.
ಯೋಜನೆಗೆ ಮಂಜೂರಾತಿ ದೊರೆತು 15 ವರ್ಷ ಕಳೆದರೂ ಕಾಮಗಾರಿ ಪ್ರಾರಂಭವಾಗದೆ ನೆನೆಗುದಿಗೆ ಬಿದ್ದಿರುವ ಯೋಜನೆಯನ್ನು ಬಾಗೂರು ನವಿಲೆ ಏತ ನೀರಾವರಿ ನೀರೆತ್ತುವ ಸಂದರ್ಭದಲ್ಲಿಯೇ ನೀರೆತ್ತಲು ಅವಕಾಶ ಕಲ್ಪಿಸಿ ಕಾಮಗಾರಿ ಪ್ರಾರಂಭಕ್ಕೆ ಅನುವು ಮಾಡಿಕೊಡಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಈ ಬಗ್ಗೆ ಯೋಜನೆಯ ಸಂಪೂರ್ಣ ವಿವರಣೆಯನ್ನು ಸರ್ಕಾರಕ್ಕೆ ನೀಡುವಂತೆ ಕಾವೇರಿ ನೀರಾವರಿ ನಿಗಮಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಜುಟ್ಟನಹಳ್ಳಿ ಹಿರೀಸಾವೆ ಏತ ನೀರಾವರಿ ಯೋಜನೆಯನ್ನು ಕೈಗೊಳ್ಳಲು ನಿಗಮದಿಂದ 24ಕೋಟಿ ಹಣವನ್ನು ನಿಗಮದಿಂದ ಸರ್ಕಾರಕ್ಕೆ ನೀಡಲು ಒಪ್ಪಿಗೆ ಸೂಚಿಸಿದ್ದು, ಯೋಜನೆಯ ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ನೀಡಿ ಆಡಳಿತಾತ್ಮಕ ಒಪ್ಪಿಗೆ ನೀಡುವಂತೆ ಮನವಿ ಮಾಡಲಾಗಿದೆ ಎಂದು ನುಡಿದರು. ಚನ್ನರಾಯಪಟ್ಟಣ ಕೆರೆಯಿಂದ ಹರಿದು ಹೋಗುವ ನೀರನ್ನು ಹಿರೀಸಾವೆ ಹೋಬಳಿಯ ತೋಟಿ ಹಾಗೂ ಸುತ್ತಮುತ್ತಲ ಕೆರೆಗೆ ಪೈಪ್ಲೈನ್ ಮುಖೇನ ತುಂಬಿಸಿ ಆ ಭಾಗದಲ್ಲಿ ಕುಡಿಯುವ ನೀರಿನ ಯೋಜನೆಗೆ ಅನುವು ಮಾಡಿಕೊಡುವ ಉದ್ದೇಶದಿಂದ ಯೋಜನೆ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ತಾಲೂಕಿನಲ್ಲಿ ಹಾದು ಹೋಗಿರುವ ಬಾಗೂರು ನವಿಲೆ ಸುರಂಗ ಮಾರ್ಗದಿಂದ ತಾಲೂಕಿನ 100ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಅಂತರ್ಜಲ ಹಾಳಾಗಿದ್ದು, ಅದನ್ನು ಸರಿದೂಗಿಸುವ ಸಲುವಾಗಿ ಸರ್ಕಾರ ಯೋಜನೆ ರೂಪಿಸುವ ಸಂದರ್ಭದಲ್ಲಿ ತಾಲೂಕಿನಲ್ಲಿ 150 ಕ್ಯುಸೆಕ್ ನೀರು ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕಾಗಿತ್ತು. ಆ ಸಂದರ್ಭದಲ್ಲಿ ಅಧಿಕಾರಿಗಳು ಅವಕಾಶ ಕಲ್ಪಿಸದೆ ತಾಲೂಕಿನಲ್ಲಿ ಬರಪೀಡಿತವಾಗುವಂತೆ ಯೋಜನೆ ರೂಪಿಸಿದ್ದಾರೆ ಎಂದು ವಿಷಾದಿಸಿದರು.
ತುಮಕೂರು ಹಾಗೂ ಮಂಡ್ಯ ಜಿಲ್ಲೆಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ತಾಲೂಕನ್ನು ಬರಗಾಲ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದಾದರೂ 150 ಕ್ಯುಸೆಕ್ ನೀರು ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸುವಂತೆ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.
ನಿಗಮದಿಂದ ರು. 42 ಕೋಟಿ ಅನುದಾನ: ತಾಲೂಕಿನಲ್ಲಿ ನೀರಾವರಿ ಯೋಜನೆಗಳನ್ನು ಕೈಗೊಳ್ಳಲು ಸರ್ಕಾರ ಕಾವೇರಿ ನೀರಾವರಿ ನಿಗಮಕ್ಕೆ 42 ಕೋಟಿ ನೀಡಿದ್ದು, ಇದರಲ್ಲಿ 8.5 ಕೋಟಿ ನುಗ್ಗೇಹಳ್ಳಿ ಏತ ನೀರಾವರಿ ಯೋಜನೆಗೆ, 18.5ಕೋಟಿ ರು.ಗಳನ್ನು ಹಿರೀಸಾವೆ ಹಾಗೂ ಜುಟ್ಟನಹಳ್ಳಿ ಏತ ನೀರಾವರಿ ಯೋಜನೆ ಕೈಗೊಳ್ಳಲು ಹಣವನ್ನು ಮೀಸಲಿಡಲಾಗಿದ್ದು, ಉಳಿದ 15ಕೋಟಿ ವೆಚ್ಚದಲ್ಲಿ ನೀರಾವರಿ ಅಚ್ಚುಕಟ್ಟು ಪ್ರದೇಶದಲ್ಲಿ ರಸ್ತೆ ನಿರ್ಮಾಣಕ್ಕೆ ಮೀಸಲಿಟ್ಟು, ಟೆಂಡರ್ ಕರೆದು
ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಅವರು ವಿವರಿಸಿದರು.
18 ತಿಂಗಳಲ್ಲಿ ಪೂರ್ಣ: 17.6 ಕೋಟಿ ವೆಚ್ಚದಲ್ಲಿ ಬಾಗೂರು ಸುರಂಗದ ಬಳಿಯಿಂದ ಏತ ನೀರಾವರಿ ಮಖೇನ ನುಗ್ಗೇಹಳ್ಳಿ ಹಾಗೂ ಸುತ್ತಮುತ್ತಲಿನ ಕೆ.ಚೌಡೇನಹಳ್ಳಿ, ಕಲ್ಕೆರೆ ಊರಮುಂದಲ ಕೆರೆ, ಕಲ್ಕೆರೆ ಅಮಾನಿಕೆರೆ, ದೇವಿಗೆರೆ, ಅಯ್ಯಾರಹಳ್ಳಿ, ಪಿ.ದಾಸಾಪುರ, ಚನ್ನನಕಟ್ಟೆ, ಜಂಬೂರು ಅಮಾನಿಕೆರೆ, ಜಂಬೂರು ಒಳಗೆರೆ, ಹಾಗೂ ತಾವರೆಕೆರೆಗಳಿಗೆ ನೀರು ತುಂಬಿಸಲು ಸರ್ಕಾರ ಯೋಜನೆ ತಯಾರಿಸಲಾಗಿದೆ.
ಹೆಚ್ಚುವರಿಯಾಗಿ ಹೊನ್ನಮಾರನಹಳ್ಳಿ ಮತ್ತು ವಿರುಪಾಕ್ಷಿಪುರ ಕೆರೆಗಳನ್ನು ತುಂಬಿಸುವ ಯೋಜನೆಯನ್ನು ಮುಂದಿನ 18 ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ಗುತ್ತಿಗೆದಾರರು ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.
ನುಗ್ಗೇಹಳ್ಳಿ ಪುರವರ್ಗ ಮಠದ ಮಹೇಶ್ವರ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಸದಸ್ಯ ರಂಗಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಸ್ವಾಮಿ, ತಾಲೂಕು ಪಂಚಾಯಿತಿ ಸದಸ್ಯ ಬಸವರಾಜು, ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಂಜುನಾಧ್, ನುಗ್ಗೇಹಳ್ಳಿ ಏತ ನೀರಾವರಿ ಹೋರಾಟ ಸಮಿತಿಯ ಸಿ.ಬಿ ಶಂಕರ್, ತಾಲೂಕು ಜೆಡಿಎಸ್ ಅಧ್ಯಕ್ಷ ಪರಮ ದೇವರಾಜೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ಕಾವೇರಿ ನೀರಾವರಿ ನಿಗಮದ ಚಿಕ್ಕಮಲ್ಲಯ್ಯ ಹಾಗೂ ಹನುಮಂತಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

